ಮಡಿಕೇರಿ ಜು.12 : ನಗರಸಭಾ ಸದಸ್ಯ ಕಾಳಚಂಡ ಅಪ್ಪಣ್ಣ ಅವರ ಮೇಲಿನ ಹಲ್ಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್, ಮಡಿಕೇರಿ ಕೊಡವ ಸಮಾಜ ಹಾಗೂ ಮಡಿಕೇರಿ ಗೌಡ ಸಮಾಜ ಹಲ್ಲೆ ಮಾಡಿದವರನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿವೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೇಂಬರ್ ಆಫ್ ಕಾಮರ್ಸ್ ನಗರಾಧ್ಯಕ್ಷ ಎಂ.ಧನಂಜಯ, ಜನಪ್ರತಿನಿಧಿಯೊಬ್ಬರ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿರುವ ಈ ಘಟನೆ ನಗರದ ಎಲ್ಲಾ ವರ್ತಕರು ಮುಜುಗರಕ್ಕೊಳಗಾಗುವಂತೆ ಮಾಡಿದೆ. ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಹಲ್ಲೆ ಮಾಡಿದವರನ್ನು ರೌಡಿ ಶೀಟರ್ ಪಟ್ಟಿಗೆ ಸೇರಿಸಬೇಕು ಮತ್ತು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.
ಘಟನೆ ನಡೆದ ಐಟಿಐ ಜಂಕ್ಷನ್ ವ್ಯಾಪ್ತಿಯಲ್ಲಿ ಪ್ರತಿಷ್ಠಿತ ಕಾಲೇಜು ಮತ್ತು ಸರ್ಕಾರಿ ಕಚೇರಿಗಳಿದ್ದು, ವಿದ್ಯಾರ್ಥಿಗಳು ಹಾಗೂ ನೌಕರರು ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಮಾಜದ ಸ್ವಾಸ್ಥ್ಯ ಕೆಡಿಸುವ ಗುಂಪುಗಳು ನಗರದಲ್ಲಿ ಕಾರ್ಯಾಚರಿಸುತ್ತಿದ್ದು, ಹೆಚ್ಚಿನ ಅನಾಹುತಗಳು ಸಂಭವಿಸುವ ಮೊದಲು ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಧನಂಜಯ ಆಗ್ರಹಿಸಿದರು.
ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ ಮಾತನಾಡಿ ಘಟನೆಯನ್ನು ತೀವ್ರವಾಗಿ ಖಂಡಿಸುವುದಲ್ಲದೆ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸುವುದಾಗಿ ತಿಳಿಸಿದರು.
ಗೌಡ ಸಮಾಜದ ನಿರ್ದೇಶಕ ಪೈಕೆರ ಮನೋಹರ ಮಾದಪ್ಪ ಮಾತನಾಡಿ ಅಪ್ಪಣ್ಣ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಕೊಡವ ಸಮಾಜದ ಉಪಾಧ್ಯಕ್ಷ ಎನ್.ಪಿ.ಚಿಯಣ್ಣ ಹಾಗೂ ನಿರ್ದೇಶಕ ನಂದಿನೆರವಂಡ ದಿನೇಶ್ ಉಪಸ್ಥಿತರಿದ್ದರು.











