ಮಡಿಕೇರಿ ಜು.12 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಬಜೆಟ್ ಮಂಡನೆ ಸಂದರ್ಭ ಕೊಡಗು ಜಿಲ್ಲೆಯನ್ನು ಸಂಪೂರ್ಣವಾಗಿ ನಿರ್ಲಕ್ಷ್ಯಿಸಿದೆ ಎಂದು ಆರೋಪಿಸಿರುವ ಕೊಡಗು ಜಿಲ್ಲಾ ಬಿಜೆಪಿ ರೈತ ಮೋರ್ಚಾ, ಈ ಹಿಂದಿನ ಬಿಜೆಪಿ ಸರ್ಕಾರದ ರೈತಪರ ಯೋಜನೆಗಳನ್ನು ಮುಂದುವರೆಸುವಂತೆ ಒತ್ತಾಯಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ರೈತ ಮೋರ್ಚಾದ ಕಾರ್ಯದರ್ಶಿ ಡಾ.ಬಿ.ಸಿ.ನವೀನ್ ಕುಮಾರ್, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಚುನಾವಣೆ ಸಂದರ್ಭ ಘೋಷಿಸಿದ ಹಲವು ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು.
ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಎಪಿಎಂಸಿ ಕಾಯ್ದೆಯನ್ನು ರದ್ದು ಪಡಿಸಿರುವುದು ಸರಿಯಲ್ಲ. ಏಕಾಏಕಿ ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಗ್ರಾಹಕರು ಹಾಗೂ ಸಣ್ಣ ಉದ್ದಿಮೆದಾರರಿಗೆ ಆರ್ಥಿಕ ಹೊರೆ ಉಂಟು ಮಡಲಾಗಿದೆ. ರೈತ ವಿದ್ಯಾನಿಧಿ ಯೋಜನೆ, ಜಿಲ್ಲೆಗೊಂದು ಗೋಶಾಲೆ ಯೋಜನೆ, ಭೂ ಸಿರಿ ಯೋಜನೆ, ಕಿಸಾನ್ ಸಮ್ಮಾನ್ ನಿಧಿ ಯೋಜನೆ, ರೈತ ಶಕ್ತಿ ಯೋಜನೆಗಳನ್ನು ರದ್ದುಗೊಳಿಸುವ ಮೂಲಕ ಬಡ ರೈತರ ಮಕ್ಕಳಿಗೆ ಹಾಗೂ ಕೃಷಿಕರಿಗೆ ಅನ್ಯಾಯ ಮಾಡಲಾಗಿದೆ. ನೀರಾವರಿ ಯೋಜನೆಗಳ ಬಗ್ಗೆ ದಿಟ್ಟ ನಿರ್ಧಾರ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಲಾಗಿದೆ. ಕ್ಷೀರ ಕ್ರಾಂತಿಗಾಗಿ ಕ್ರೆಡಿಟ್ ಕಾರ್ಡ್ ನೀಡುವುದಾಗಿ ಹೇಳಿ ಯಾವುದೇ ಕ್ರಮ ಕೈಗೊಳ್ಳದೆ ಜಿಲ್ಲೆಯನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದರು.
ಈ ಹಿಂದೆ ಇದ್ದ ಬಿಜೆಪಿ ಸರ್ಕಾರ ಹಲವು ರೈತಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಅದನ್ನು ಮರುಸ್ಥಾಪನೆ ಮಾಡಬೇಕು ಮತ್ತು ರೈತಪರ ಯೋಜನೆಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕೆಂದು ಡಾ.ನವೀನ್ ಕುಮಾರ್ ಒತ್ತಾಯಿಸಿದರು.
ರಾಜ್ಯ ರೈತ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆ ಯಮುನಾ ಚಂಗಪ್ಪ ಮಾತನಾಡಿ, ರಾಜ್ಯದ ಬಜೆಟ್ ರೈತರ ಪರವಾಗಿಲ್ಲ, ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣದ ಆಡಳಿತ ಮಾಡುತ್ತಿದೆ ಎಂದು ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಮಹೇಶ್ ಜೈನಿ ಹಾಗೂ ರೈತ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕುಂದಳ್ಳಿ ಉಪಸ್ಥಿತರಿದ್ದರು.









