ಬೆಂಗಳೂರು ಜು.14 : ಕೊಡಗು ಜಿಲ್ಲೆಯ ಕೆಲವೆಡೆ ಕೊಳೆತ ಮೊಟ್ಟೆ ವಿತರಣೆ ಮಾಡಿರುವ ವರದಿಗಳು ಬಂದಿರುವ ಹಿನ್ನಲೆಯಲ್ಲಿ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಅವರು ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ ಕೊಳೆತ ಮೊಟ್ಟೆಗಳನ್ನು ಸರಬರಾಜು ಮಾಡಿರುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಬಾಣಂತಿಯರಿಗೆ ಪೌಷ್ಟಿಕಾಂಶ ದೊರಕಬೇಕು ಎನ್ನುವ ಉದ್ದೇಶದಿಂದ ಮೊಟ್ಟೆಗಳನ್ನು ನೀಡಲಾಗುತ್ತಿದೆ. ಆದರೆ, ಕೆಲವೆಡೆ ಕೊಳೆತ ಮೊಟ್ಟೆಗಳನ್ನು ನೀಡುತ್ತಿರುವುದು ಮಾಧ್ಯಮಗಳ ವರದಿಯಿಂದ ತಿಳಿದು ಬಂದಿದೆ. ಈ ರೀತಿಯ ಬೇಜವಾಬ್ದಾರಿಯ ನಡವಳಿಕೆಯನ್ನು ಸಹಿಸುವುದು ಸಾಧ್ಯವಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಇದು ಪುನರಾವರ್ತನೆ ಆದರೆ ಅಧಿಕಾರಿಗಳ ವಿರುದ್ದವೂ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸಚಿವರು ತಿಳಿಸಿದ್ದಾರೆ.