ಮಡಿಕೇರಿ ಜು.14 : ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ಪಾರದರ್ಶಕ ಮತ್ತು ಶಾಂತಿಯುತವಾಗಿ ನಡೆಸುವ ದೃಷ್ಟಿಯಿಂದ ಕುಶಾಲನಗರ ತಾಲೂಕಿನ ಕೂಡುಮಂಗಳೂರು, ಮಡಿಕೇರಿ ತಾಲೂಕಿನ ಕಾಂತೂರು ಮುರ್ನಾಡು ಮತ್ತು ಕಡಗದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಎಲ್ಲಾ ಶಸ್ತ್ರಾಸ್ತ್ರ ಪರವಾನಗಿದಾರರು ಹೊಂದಿರುವ ಶಸ್ತ್ರಾಸ್ತ್ರಗಳನ್ನು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಠೇವಣಿ ಇಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.
ವಿನಾಯಿತಿ ಪತ್ರ ಹೊಂದಿರುವವರ ಪೈಕಿ ಕ್ರಿಮಿನಲ್/ ರೌಡಿಶೀಟರ್/ ಕೋಮುಗಲಭೆ ಹಿನ್ನೆಲೆಯುಳ್ಳ ನ್ಯಾಯಾಲಯದಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ವ್ಯಕ್ತಿ ಅಥವಾ ಈ ಹಿಂದಿನ ಚುನಾವಣಾ ಸಂದರ್ಭದಲ್ಲಿ ಬಂದೂಕನ್ನು ದುರ್ಬಳಕೆ ಮಾಡಿದ ಹಿನ್ನೆಲೆಯುಳ್ಳ ವ್ಯಕ್ತಿಗಳು ಹೊಂದಿರುವ ಶಸ್ತ್ರಾಸ್ತ್ರಗಳನ್ನು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಠೇವಣಿ ಇಡಬೇಕು. ಚುನಾವಣಾ ಫಲಿತಾಂಶ ಘೋಷಣೆಯಾಗುವವರೆಗೆ ನೀತಿ ಸಂಹಿತೆ ಜಾರಿಯಲ್ಲಿರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ವ್ಯಕ್ತಿ ಶಸ್ತ್ರಾಸ್ತ್ರಗಳನ್ನು ಪ್ರದರ್ಶಿಸುವುದು, ಹಿಡಿದುಕೊಂಡು ಓಡಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.
ಚುನಾವಣಾ ಫಲಿತಾಂಶ ಪ್ರಕಟಗೊಂಡ ಒಂದು ವಾರದ ಒಳಗಾಗಿ ಠೇವಣಿ ಇರಿಸಿದ ಶಸ್ತ್ರಾಸ್ತ್ರಗಳನ್ನು ಹಿಂತಿರುಗಿಸಲಾಗುವುದು. ಗ್ರಾಮ ಪಂಚಾಯಿತಿಯ ಯಾವುದೇ ಸ್ಥಾನಕ್ಕೂ ಚುನಾವಣೆ ನಡೆಯದೆ ಇದ್ದಲ್ಲಿ ಅಥವಾ ಚುನಾವಣೆ ಘೋಷಿಸಿರುವ ಎಲ್ಲಾ ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಆಯ್ಕೆಯಾದ ಅಭ್ಯರ್ಥಿಯ ಫಲಿತಾಂಶವನ್ನು ಚುನಾವಣಾ ಅಧಿಕಾರಿಯು ಘೋಷಿಸಿದ್ದಲ್ಲಿ, ಅಂತಹ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿ ಇರುವುದು ತಕ್ಷಣದಿಂದ ನಿಂತು ಹೋಗುವುದರಿಂದ ಆ ವ್ಯಾಪ್ತಿಯಲ್ಲಿ ಶಸ್ತ್ರಾಸ್ತ್ರಗಳನ್ನು ಠೇವಣಿ ಇರಿಸುವ ಅವಶ್ಯಕತೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.