ಮಡಿಕೇರಿ ಜು.15 : ಸರ್ಕಾರದ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾದ ‘ಅನ್ನಭಾಗ್ಯ’ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ. ಅಕ್ಕಿ ಬದಲಿಗೆ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ 170 ರೂ.ನಂತೆ ‘ನೇರ ನಗದು ವರ್ಗಾವಣೆ’ ಮಾಡುವ ಪ್ರಕ್ರಿಯೆ ಆರಂಭವಾಗಿದ್ದು, ಈ ಸಂಬಂಧ ಕೊಡಗು ಜಿಲ್ಲೆಯಲ್ಲಿ 12,930 ಮಂದಿಯ ಬ್ಯಾಂಕ್ ಖಾತೆ ಬಗ್ಗೆ ಹೋಬಳಿ ಮಟ್ಟದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಆದ್ಯತೆ ಮೇಲೆ ಮಾಹಿತಿ ಪಡೆದು ಯೋಜನೆ ಅನುಷ್ಠಾನಗೊಳಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ಕಾರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ’ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಡಿತರ ಚೀಟಿದಾರರಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಮಾಡುವ ಬಗ್ಗೆ 12,930 ಮಂದಿಯ ಬ್ಯಾಂಕ್ ಖಾತೆ ಪರಿಶೀಲನೆ ಸಂಬಂಧ ಹೋಬಳಿವಾರು ಮಾಹಿತಿ ಸಂಗ್ರಹಿಸಿ ಸರಿಪಡಿಸುವ ಕಾರ್ಯವು ಒಂದು ವಾರದೊಳಗೆ ಸಮರೋಪಾದಿಯಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಶರತ್ ಅವರು ಪಡಿತರ ಚೀಟಿದಾರರಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಸಂಬಂಧ ಶೀಘ್ರದಲ್ಲೇ ಹಣ ಬಿಡುಗಡೆಯಾಗಲಿದೆ. ಬ್ಯಾಂಕ್ ಖಾತೆ ಪಟ್ಟಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ 1,01,660 ಬಿಪಿಎಲ್ ಕುಟುಂಬಗಳಿವೆ. 9,868 ಅಂತ್ಯೋದಯ ಯೋಜನೆ ಕುಟುಂಬಗಳಿವೆ. ಹಾಗೆಯೇ 37,141 ಎಪಿಎಲ್ ಕುಟುಂಬಗಳಿವೆ ಎಂದು ಕುಮುದಾ ಶರತ್ ಮಾಹಿತಿ ನೀಡಿದರು.
ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಕೆಎಸ್‍ಆರ್‍ಟಿಸಿ ಘಟಕ ಇದ್ದು, ಕುಶಾಲನಗರದಲ್ಲಿ ಮತ್ತೊಂದು ಘಟಕ ಆರಂಭಿಸುವ ಸಂಬಂಧ ಅಗತ್ಯ ಮಾಹಿತಿ ಒದಗಿಸುವಂತೆ ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕರಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚಿಸಿದರು.
ಹೊಸ ಬಸ್‍ಗಳ ಖರೀದಿ ಪ್ರಕ್ರಿಯೆ ನಡೆದಿದ್ದು, ಸದ್ಯದಲ್ಲೇ ಜಿಲ್ಲೆಗಳಿಗೆ ಹೊಸ ಬಸ್‍ಗಳು ಬರಲಿವೆ ಎಂದು ಸಾರಿಗೆ ಇಲಾಖೆಯ ಕಾರ್ಯದರ್ಶಿಯೂ ಆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ತಿಳಿಸಿದರು.
ಕೆಎಸ್‍ಆರ್‍ಟಿಸಿ ಪುತ್ತೂರು ಘಟಕದ ವ್ಯವಸ್ಥಾಪಕರಾದ ಜಯಕರಶೆಟ್ಟಿ ಅವರು ಮಾಹಿತಿ ನೀಡಿ, ಕುಶಾಲನಗರದ ಬಸವನಹಳ್ಳಿ ಬಳಿ ಕೆಎಸ್‍ಆರ್‍ಟಿಸಿ ಘಟಕ ಆರಂಭಕ್ಕೆ 4 ಎಕರೆ ಜಾಗ ಕಾಯ್ದಿರಿಸಲಾಗಿದೆ. ಹಾಗೆಯೇ ವಿರಾಜಪೇಟೆ ತಾಲ್ಲೂಕು ಕೇಂದ್ರದಲ್ಲಿ ಕೆಎಸ್‍ಆರ್‍ಟಿಸಿ ಘಟಕ ಆರಂಭಿಸುವ ಸಂಬಂಧ 4-5 ಎಕರೆ ಜಾಗ ಬೇಕಿದೆ ಎಂದು ಅವರು ಮಾಹಿತಿ ನೀಡಿದರು.
ಶಕ್ತಿ ಯೋಜನೆ ಜಾರಿಯಾದ ನಂತರ ಪ್ರತೀ ದಿನ ಪ್ರಯಾಣಿಸುವವರ ಸಂಖ್ಯೆ 24 ಸಾವಿರದಿಂದ 29 ಸಾವಿರಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದರು.
2018 ಮತ್ತು 2019 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡವರಿಗೆ ಮನೆ ಕಲ್ಪಿಸುವಂತಾಗಬೇಕು. ನಮೂನೆ 50, 53, 94ಸಿ, 94ಸಿಸಿ ರಡಿ ಸಾಗುವಳಿ ಚೀಟಿಯನ್ನು ಎಷ್ಟು ಮಂದಿಗೆ ನೀಡಲಾಗಿದೆ. ಸಾಗುವಳಿ ಚೀಟಿ ನೀಡಿರುವುದಕ್ಕೆ ಆರ್‍ಟಿಸಿ ಆಗಿದೆಯೇ ಎಂದು ನಿಖರ ಮಾಹಿತಿ ಒದಗಿಸುವಂತೆ ಸೂಚಿಸಿದರು.
ಇದುವರೆಗೆ ಸಾಗುವಳಿ ಚೀಟಿ ನೀಡದಿದ್ದಲ್ಲಿ ಅಂತಹ ಪ್ರಕರಣಗಳನ್ನು ತಿರಸ್ಕøರಿಸಬೇಕು. ಈ ಸಂಬಂಧ ಒಂದು ವಾರದೊಳಗೆ ಮಾಹಿತಿ ಒದಗಿಸುವಂತೆ ಡಾ.ಎನ್.ವಿ.ಪ್ರಸಾದ್ ಅವರು ಸೂಚಿಸಿದರು.
ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಪ್ರತೀ ತಿಂಗಳು ಮಾಹಿತಿ ಸಂಗ್ರಹಿಸಬೇಕು. ಜನನ ಮತ್ತು ಮರಣ ನೋಂದಣಿಯನ್ನು ನಿಖರವಾಗಿ ದಾಖಲಿಸುವಂತೆ ಸೂಚಿಸಿದರು.
ಪಿಂಚಣಿ ಪಡೆಯುವವರು ಯಾರಾದರೂ ನಿಧನ ಹೊಂದಿದಲ್ಲಿ ಡಿಲೀಟ್ ಮಾಡಬೇಕು. ಸೇರ್ಪಡೆ ಮಾಡುವವರ ಬಗ್ಗೆ ನಿಖರ ಮಾಹಿತಿ ಇರಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಹೇಳಿದರು.
ಲೈನ್‍ಮನೆಯಲ್ಲಿ ವಾಸಿಸುವ ಕುಟುಂಬಗಳಿಗೆ ಹತ್ತಿರದಲ್ಲಿಯೇ ನಿವೇಶನ ಒದಗಿಸಿ ಮನೆ ನಿರ್ಮಿಸಿಕೊಡಬೇಕು. ಆ ನಿಟ್ಟಿನಲ್ಲಿ ಜಾಗ ಕಾಯ್ದಿರಿಸುವಂತೆ ಡಾ.ಎನ್.ವಿ.ಪ್ರಸಾದ್ ಅವರು ಸೂಚಿಸಿದರು.
ಮಳೆಗಾಲದಲ್ಲಿ ವಿದ್ಯುತ್ ಕಂಬಗಳ ಸುಸ್ಥಿತಿ ಬಗ್ಗೆ ಗಮನಹರಿಸಬೇಕು. ಹಳೇ ವಿದ್ಯುತ್ ಕಂಬಗಳನ್ನು ಬದಲಿಸಬೇಕು ಎಂದು ಹೇಳಿದರು.
‘ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪೂರೈಸಬೇಕು. ಯಾವುದೇ ಕಾರಣಕ್ಕೂ ದೂರುಗಳು ಬರದಂತೆ ಎಚ್ಚರ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗೆ ಸೂಚಿಸಿದರು.’
ಅಂಗನವಾಡಿ ಕಟ್ಟಡಗಳ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಕಳೆದ ವರ್ಷ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ಪಡೆದ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.
ವಿದ್ಯಾರ್ಥಿ ನಿಲಯಗಳಿಗೆ ಜಾಗ ಬೇಕಿದ್ದಲ್ಲಿ ಜಾಗ ಒದಗಿಸಬೇಕು. ಸರ್ಕಾರದ ಹಂತದಲ್ಲಿ ಆಗಬೇಕಿರುವ ಕೆಲಸಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದಲ್ಲಿ ತ್ವರಿತವಾಗಿ ಪರಿಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಹೇಳಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ ಕಳೆದ ಜೂನ್ ತಿಂಗಳಲ್ಲಿ ಕಡಿಮೆ ಮಳೆಯಾಗಿದೆ. ಜೂನ್ ತಿಂಗಳಲ್ಲಿ 544 ಮಿ.ಮೀ. ಸರಾಸರಿ ವಾಡಿಕೆ ಮಳೆಗೆ, 106 ಮಿ.ಮೀ. ಮಾತ್ರ ಮಳೆಯಾಗಿದೆ ಎಂದರು.
ಸಾಮಾಜಿಕ ಭದ್ರತಾ ಯೋಜನೆಯಡಿ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ವೇತನ, ವಿಧವಾ ವೇತನ, ವಿಕಲಚೇತನರ ವೇತನ, ಮನಸ್ವಿನಿ, ಮೈತ್ರಿ ಯೋಜನೆಯಡಿ ಸಾಮಾಜಿಕ ಭದ್ರತಾ ಯೋಜನೆ ಕಲ್ಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಮುಂಗಾರು ಅವಧಿಯಲ್ಲಿ 4 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆ ಕಾರ್ಯ ಆಗಬೇಕಿದ್ದು, ಈಗಾಗಲೇ 2,500 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಆಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಬಾನಾ ಎಂ.ಷೇಕ್ ಅವರು ಮಾಹಿತಿ ನೀಡಿದರು.
ಭತ್ತ ಸಸಿಮಡಿ ಕಾರ್ಯ ನಡೆದಿದ್ದು, ಜುಲೈ ಅಂತ್ಯದವರೆಗೆ 2 ಅಥವಾ 3 ಬಾರಿ ಉತ್ತಮ ಮಳೆ ಆಗಬೇಕಿದೆ ಎಂದು ಮಾಹಿತಿ ನೀಡಿದರು.
ಜಿ.ಪಂ.ಸಿಇಒ ವರ್ಣೀಶ್ ನೇಗಿ ಅವರು ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಅನುಷ್ಠಾನ, ಅಂಬೇಡ್ಕರ್ ವಸತಿ ಯೋಜನೆ, ವಾಜಪೇಯಿ ನಗರ ವಸತಿ ಯೋಜನೆಗಳ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಜಿ.ಪಂ.ಯೋಜನಾ ನಿರ್ದೇಶಕರಾದ ಜಗದೀಶ್, ಜಿ.ಪಂ.ಮುಖ್ಯ ಯೋಜನಾಧಿಕಾರಿ ರಾಜ್‍ಗೋಪಾಲ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಸಪ್ಪ, ಜಿ.ಪಂ.ಎಂಜಿನಿಯರ್ ಸುರೇಶ್ ಕುಮಾರ್, ಭೂ ದಾಖಲೆಗಳ ಉಪ ನಿರ್ದೇಶಕರಾದ ಪಿ.ಶ್ರೀನಿವಾಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್‍ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಳ್ಳಿಚಂಡ ಕಾರ್ಯಪ್ಪ, ಸೆಸ್ಕ್ ಇಇ ಅನಿತಾ ಬಾಯಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಎಚ್.ಆರ್.ನಾಯಕ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಹಿಂದುಳಿದ ವರ್ಗಗಳ ಅಧಿಕಾರಿ ಎನ್.ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜು, ಕಾರ್ಮಿಕ ಅಧಿಕಾರಿ ಹರ್ಷವರ್ಧನ, ತಹಶೀಲ್ದಾರರಾದ ಪ್ರಕಾಶ್, ಕಿರಣ್ ಗೌರಯ್ಯ, ಎಸ್.ಎನ್.ನರಗುಂದ, ಪ್ರಶಾಂತ್, ಪೌರಾಯುಕ್ತರಾದ ವಿಜಯ ಮಾಹಿತಿ ನೀಡಿದರು.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*