ಮಡಿಕೇರಿ ಜು.19 : ಸರ್ಕಾರಿ ಕಚೇರಿಗಳಲ್ಲಿ ಕಳೆದ ಹಲವು ವರ್ಷಗಳಿಂದ ಖಾಯಂ ಆಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳಿಂದ ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ ಮತ್ತು ಅರ್ಜಿಗಳನ್ನು ವಿಲೇವಾರಿ ಮಾಡದೆ ಸತಾಯಿಸಲಾಗುತ್ತಿದೆ ಎಂದು ಸೋಮವಾರಪೇಟೆ ರೈತ ಸಂಘದ ಸಂಚಾಲಕ ಕೆ.ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಕೂರು ಗಾಮದ ವ್ಯಕ್ತಿಯೊಬ್ಬರು ಜಾಗವನ್ನು ಮಾರಾಟ ಮಾಡಲು ಅನುಮತಿ ಕೋರಿ ಕಳೆದ ಐದು ವರ್ಷಗಳಿಂದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕು ಕಚೇರಿಗೆ ಹಲವು ಬಾರಿ ಅರ್ಜಿ ಸಲ್ಲಿಸಿದ್ದು, ಅಧಿಕಾರಿಗಳು ಇಲ್ಲಸಲ್ಲದ ಸಬೂಬು ನೀಡಿ ಕಚೇರಿಯಿಂದ ಕಚೇರಿಗೆ ಅಲೆದಾಡಿಸುತ್ತಿದ್ದಾರೆ ಎಂದು ಆರೋಪಿಸಿದರು.
ಸಂಬಂಧಿಸಿದ ವ್ಯಕ್ತಿಯು ವೃದ್ದಾಪ್ಯ ಮತ್ತು ಹೃದಯ ಸಂಬಂಧಿ ತೊಂದರೆಯಿಂದ ಬಳಲುತ್ತಿದ್ದು, ಜಾಗವನ್ನು ಮಾರಾಟ ಮಾಡಿ ಮಗನ ಮನೆಗೆ ತೆರಳಲು ಇಚ್ಛೆ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಂಡು ನ್ಯಾಯ ಒದಗಿಸುವಂತೆ ಮನವಿ ಮಾಡಿದರು.
ಕಳೆದ ಹಲವು ವರ್ಷಗಳಿಂದ ಒಂದೇ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳಿಂದ ತೊಂದರೆಯಾಗುತ್ತಿದೆ. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದನೆ ನೀಡದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಲಕ್ಷ್ಮಣ್ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂತ್ರಸ್ತ ಬಿ.ಎಸ್.ತಿಮ್ಮಪ್ಪ ರೈ ಹಾಗೂ ಸಾಮಾಜಿಕ ಕಾರ್ಯಕರ್ತ ಎ.ಎಂ.ಜಾನ್ ಉಪಸ್ಥಿತರಿದ್ದರು.








