ಸೋಮವಾರಪೇಟೆ ಜು.19 : ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ಅಬ್ಬೂರುಕಟ್ಟೆ ಒಕ್ಕಲಿಗರ ಸಂಘದ ವತಿಯಿಂದ ಜು.23ರ ಹೊಸಳ್ಳಿ ಗ್ರಾಮದಲ್ಲಿ ಕೆಸರು ಗದ್ದೆ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎ.ಎಚ್.ತಿಮ್ಮಯ್ಯ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಳಿಗ್ಗೆ 9.30 ಗಂಟೆಗೆ ಹೊಸಳ್ಳಿ ಗ್ರಾಮದ ಕುಶಾಲಪ್ಪ ಅವರಿಗೆ ಸೇರಿದ ಗದ್ದೆಯಲ್ಲಿ ಕ್ರೀಡಾಕೂಟ ಆರಂಭಗೊಳ್ಳಲಿದ್ದು, ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥಸ್ವಾಮೀಜಿ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ಸಂಸದ ಪ್ರತಾಪ್ ಸಿಂಹ, ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ, ಹುಣಸೂರು ಶಾಸಕ ಹರೀಶ್ ಗೌಡ, ಒಕ್ಕಲಿಗರ ಸಂಘದ ರಾಜ್ಯ ನಿರ್ದೇಶಕ ಹರಪಳ್ಳಿ ರವೀಂದ್ರ, ಜಿಲ್ಲಾ ಯುವ ವೇದಿಕೆ ಅಧ್ಯಕ್ಷ ಗಿರೀಶ್ ಮಲ್ಲಪ್ಪ, ಉದ್ಯಮಿ ಅರುಣ್ ಕೊತ್ನಳ್ಳಿ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಒಕ್ಕಲಿಗ ಸಮುದಾಯದ ಪುರುಷರಿಗೆ ವಾಲಿಬಾಲ್, ಮಹಿಳೆಯರಿಗೆ ಥ್ರೋಬಾಲ್ ಸ್ಪರ್ಧೆಗಳು ನಡೆಯಲಿವೆ. ನೇರುಗಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಿಳೆ ಮತ್ತು ಪುರುಷರ ಪ್ರತ್ಯೇಕ ವಿಭಾಗದಲ್ಲಿ ಹಗ್ಗಜಗ್ಗಾಟ, ಸ್ಪರ್ಧೆ ನಡೆಯಲಿದ್ದು, ವಿಜೇತರಿಗೆ ನಗದು ಬಹುಮಾನ ನೀಡಲಾಗುವುದು ಎಂದರು.
ಒಂದರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ, ಪಿಯುಸಿಯಿಂದ ಪದವಿವರೆಗಿನ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಿಭಾಗದಲ್ಲಿ ಗದ್ದೆ ಓಟ ಆಯೋಜಿಸಲಾಗಿದೆ. ಇದರೊಂದಿಗೆ ದಂಪತಿ ಓಟ ಸ್ಪರ್ಧೆಯಿದ್ದು, 65 ವರ್ಷ ಮೇಲ್ಪಟ್ಟವರಿಗೆ ಪಾಸಿಂಗ್ ದ ಬಾಲ್, ಸಾರ್ವಜನಿಕ ವಿಭಾಗದಲ್ಲಿ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು. ಕ್ರೀಡಾಕೂಟದ ಬಗ್ಗೆ ಹೆಚ್ಚಿನ ಮಾಹಿತಿಗೆ ಮೊ: 9449275855, 7259967520 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದರು.
ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷರಾದ ಜೋಯಪ್ಪ, ಲೋಕೇಶ್, ಕಾರ್ಯದರ್ಶಿ ಎಚ್.ಎ. ರಾಜೇಶ್, ಖಜಾಂಚಿ ಚಂದ್ರಪ್ರಸಾದ್, ನಿರ್ದೇಶಕ ಪ್ರಮೋದ್ ಇದ್ದರು.