ಮಡಿಕೇರಿ ಜು.20 : ಕನ್ನಡ ಸಾಹಿತ್ಯ ಪರಿಷತ್ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಮೂಲಕ ಕನ್ನಡ ಪರವಾದ ಕೆಲಸಗಳು ನಡೆಯಲಿದೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಧ್ಯಾಪಕ ಡಾ.ಶ್ರೀಧರ್ ಹೆಗಡೆ ಹೇಳಿದರು.
ನಗರದ ಪತ್ರಿಕಾಭವನದಲ್ಲಿ ನಡೆದ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕೊಡಗಿನಲ್ಲಿರುವ ಪ್ರಾಕೃತಿಕ ಸಂಪತ್ತನ್ನು ದಾಖಲೀಕರಣ ಮಾಡುವ ಕೆಲಸವಾಗಬೇಕು ಎಂದು ಸಲಹೆ ನೀಡಿದ ಅವರು, ಮಾತೃಭಾಷೆಯಾದ ಕನ್ನಡಕ್ಕೆ ಮೊದಲ ಆದ್ಯತೆ ಸಿಗುವಂತಾಗಬೇಕು ಎಂದು ನುಡಿದರು.
ಪ್ರಾಸ್ತಾವಿಕ ಮಾತನಾಡಿದ ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ಜಿಲ್ಲಾ ಕಸಾಪದಲ್ಲಿ ಸದಸ್ಯತ್ವವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪರಿಷತ್‍ನ ಪದಾಧಿಕಾರಿಗಳು ಸದಸ್ಯರು ಸಹಕಾರ ನೀಡಬೇಕು ಎಂದು ಹೇಳಿದರು.
ನೂತನ ಅಧ್ಯಕ್ಷರಿಗೆ ನಿಕಟಪೂರ್ವ ಅಧ್ಯಕ್ಷ ಅಂಬೆಕಲ್ ನವೀನ್ ಅಧಿಕಾರ ಹಸ್ತಾಂತರಿಸಿದರು.
ಮಡಿಕೇರಿ ತಾಲೂಕು ಕಸಾಪ ಅಧ್ಯಕ್ಷರಾಗಿ ಕಡ್ಲೇರ ತುಳಸಿ ಮೋಹನ್, ಗೌರವ ಕಾರ್ಯದರ್ಶಿಗಳಾದ ಪುದಿಯನೆರವನ ರಿಷಿತ್ ಮಾದಯ್ಯ, ಬಾಳೆಯಡ ದಿವ್ಯ ಮಂದಪ್ಪ, ಗೌರವ ಕೋಶಾಧಿಕಾರಿ ಸಿದ್ದರಾಜು ಬೆಳ್ಳಯ್ಯ, ಸಂಘಟನಾ ಕಾರ್ಯದರ್ಶಿಗಳಾದ ಚೊಕ್ಕಾಡಿ ಪ್ರೇಮಾ ರಾಘವಯ್ಯ, ತಳೂರು ದಿನೇಶ್ ಕರುಂಬಯ್ಯ ಮತ್ತು ತಂಡಕ್ಕೆ ಕಸಾಪ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಪ್ರತಿಜ್ಞಾವಿಧಿ ಬೋಧಿಸಿದರು.
ವೇದಿಕೆಯಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪುದಿಯನೆರವನ ರೇವತಿ ರಮೇಶ್ ಉಪಸ್ಥಿತರಿದ್ದರು.
ಭಾರತಿ ರಮೇಶ್ ತಂಡವರು ನಾಡಗೀತೆ ಹಾಡಿದರು. ಸದಸ್ಯ ವಿನೋದ್ ಮೂಡಗದ್ದೆ ನಿರೂಪಿಸಿದರು, ಜಿಲ್ಲಾ ಗೌರವ ಕಾರ್ಯದರ್ಶಿ ಮುನೀರ್ ಅಹ್ಮದ್ ಸ್ವಾಗತಿಸಿದರು, ಬಾಳೆಯಡ ದಿವ್ಯ ಮಂದಪ್ಪ ವಂದಿಸಿದರು.








