ಮಡಿಕೇರಿ ಜು.24 : ರಾಷ್ಟ್ರದ ಅಭಿವೃದ್ಧಿ ಮತ್ತು ಶಿಸ್ತು ಬದ್ಧ ಜೀವನಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ಚಟುವಟಿಕೆಗಳು ಸಹಕಾರಿ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಗರದ ಗಾಂಧಿ ಭವನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ಒಂದು ವಾರಗಳ ಕಾಲ ನಡೆಯುವ ‘ಮೂಲ ತರಬೇತಿ ಶಿಬಿರಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.
ರಾಷ್ಟ್ರದ ಅಭಿವೃದ್ಧಿ, ಸಂಸ್ಕೃತಿ, ನಾಡು ನುಡಿಯ ಬಗ್ಗೆ ಎಲ್ಲರೂ ಕಲಿಯಲು ಮತ್ತು ಮಕ್ಕಳಿಗೆ ಕಲಿಸಲು ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆ ಅಗತ್ಯ ಎಂದು ತಿಳಿಸಿದರು.
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು, ಪರಿಸರ ಸಂರಕ್ಷಣೆ, ಸಮಯ ಪ್ರಜ್ಞೆ, ಹೀಗೆ ಹಲವು ವಿಚಾರಗಳ ಕುರಿತು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಲ್ಲಿ ಕಾಣಬಹುದು ಎಂದು ಡಾ.ನಂಜುಂಡೇಗೌಡ ವಿವರಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಅವರು ಮಾತನಾಡಿ ಯಾವುದೇ ಸಂಕಷ್ಟದ ಪರಿಸ್ಥಿತಿಯಲ್ಲೂ ತೊಡಗಿಸಿಕೊಂಡು ಸಮಾಜದ ಅಭಿವೃದ್ಧಿಗೆ ಸಹಕಾರಿಯಾಗುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಪಾತ್ರ ವಹಿಸುತ್ತದೆ ಎಂದು ಹೇಳಿದರು.
ಪ್ರತಿಯೊಂದು ರಂಗದಲ್ಲಿಯೂ ಮಾನವೀಯತೆಯನ್ನು ಬೆಳೆಸಿಕೊಂಡು ಹೆಚ್ಚಿನ ಸಮಾಜ ಸೇವೆಯಲ್ಲಿ ಪಾಲ್ಗೊಳ್ಳಲು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿಯಾಗಿದೆ ಎಂದರು.
ಪ್ರಸ್ತುತ ದಿನಗಳಲ್ಲಿ ಮಕ್ಕಳಿಗಿಂತ ಪೋಷಕರು ಸ್ಕೌಟ್ಸ್ ಮತ್ತು ಗೈಡ್ಸ್‍ನಲ್ಲಿ ತೊಡಗಿಸಿಕೊಳ್ಳುವುದು ಅತ್ಯಗತ್ಯವಾಗಿದೆ. ಮಕ್ಕಳ ವ್ಯಕ್ತಿತ್ವ ವಿಕಸನ ಬೆಳವಣಿಗೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿಯಾಗಿದ್ದು, ಮಕ್ಕಳಿಗೆ ಉತ್ತಮ ಮಾರ್ಗದರ್ಶನ ನೀಡುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್‍ನಿಂದ ಅನುಕೂಲ ಎಂದರು.
ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ ಅವರು ಮಾತನಾಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನಲ್ಲಿ ದೇಶ ಸೇವೆಯೇ ಅತೀ ಮುಖ್ಯವಾಗಿದೆ. ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡುವುದು, ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವುದು, ಪರಿಸರ ಸಂರಕ್ಷಣೆ, ಕಳೆದು ಹೋಗುವ ಸಂಪನ್ಮೂಲಗಳಾದ ಕುಡಿಯುವ ನೀರು, ವಿದ್ಯುತ್ ಸಂರಕ್ಷಿಸುವುದು, ಶುಚಿತ್ವ, ಪರಿಸರ ಹೀಗೆ ಹಲವು ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿಯಾಗಿದೆ ಎಂದರು.
ತರಬೇತಿದಾರರಾದ ಶ್ರೀರಾಮ ಅವರು ಮಾತನಾಡಿ ರಾಷ್ಟ್ರದ ಶ್ರೇಯೋಭಿವೃದ್ಧಿಗಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನಲ್ಲಿ ತೊಡಗಿಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದರು.
ಶಿಕ್ಷಕರು ತಾವು ಬೆಳೆದು ಮಕ್ಕಳನ್ನು ಬೆಳೆಸುವುದು ಸ್ಕೌಟ್ಸ್ ಮತ್ತು ಗೈಡ್ಸ್‍ನ ಧ್ಯೇಯೋದ್ದೇಶವಾಗಿದೆ. ವಿದ್ಯಾರ್ಥಿಗಳು ಶಿಕ್ಷಣ, ಶಿಷ್ಟಾಚಾರ, ಸಮವಸ್ತ್ರ ಹೀಗೆ ಹಲವು ಮಹತ್ವಗಳ ಬಗ್ಗೆ ಮಾಹಿತಿ ನೀಡುವುದು ಮತ್ತು ಅನುಸರಿಸುವುದು ಅತೀ ಮುಖ್ಯವಾಗಿದೆ ಎಂದರು.
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಮುತ್ತಪ್ಪ, ಬೊಳ್ಳಜಿರ ಬಿ.ಅಯ್ಯಪ್ಪ, ದಮಯಂತಿ ಇತರರು ಇದ್ದರು. ರಂಜಿತ್ ನಿರೂಪಿಸಿದರು.









