ಮಡಿಕೇರಿ ಜು.26 : ನೈಸರ್ಗಿಕ ವಿಕೋಪ ನಿರ್ವಹಣೆಗಾಗಿ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ 56 ಕೋಟಿ ರೂ ಇದ್ದು, ಪ್ರಸಕ್ತ ಅವಧಿಯಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆಗಾಗಿ ಜಿಲ್ಲಾಡಳಿತದಿಂದ ಅಗತ್ಯ ಪ್ರಸ್ತಾವನೆ ಸಲ್ಲಿಸಿದಲ್ಲಿ 20 ಕೋಟಿ ರೂ ಬಿಡುಗಡೆ ಮಾಡಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧಿಸಿದಂತೆ ಮಂಗಳವಾರ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು.
ಪ್ರಾಕೃತಿಕ ವಿಕೋಪ ನಿರ್ವಹಣೆಗಾಗಿ ಈಗಾಗಲೇ ಬಿಡುಗಡೆ ಆಗಿರುವ ಅನುದಾನವನ್ನು ಸರಿಯಾಗಿ ಬಳಸಬೇಕು. ಒಂದು ತಿಂಗಳಲ್ಲಿ ಮನೆ ಕಾಮಗಾರಿಗಳು ಮತ್ತು ಇತರೆ ಹಳೇ ಕಾಮಗಾರಿಗಳ ಕೆಲಸ ಆಗಿದ್ದಲ್ಲಿ ಹಣ ಪಾವತಿಸಬೇಕು. ಹಾಗೆಯೇ ಕಾಮಗಾರಿ ಆರಂಭಿಸದಿದ್ದಲ್ಲಿ ನೋಟೀಸು ನೀಡಿ ಮಾಹಿತಿ ಪಡೆದು ಮುಕ್ತಾಯಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕಾಮಗಾರಿ ಬಾಕಿ ಇದ್ದಲ್ಲಿ ಸರ್ಕಾರದ ಹಂತದಲ್ಲಿ ಮಾಹಿತಿ ನೀಡುವುದು ಕಷ್ಟವಾಗುತ್ತದೆ. ಆದ್ದರಿಂದ ಮನೆ ಕಾಮಗಾರಿಗಳು ಸೇರಿದಂತೆ ಇತರೆ ಪ್ರಾಕೃತಿಕ ವಿಕೋಪದಡಿ ತೆಗೆದುಕೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಕಂದಾಯ ಸಚಿವರು ಸ್ಪಷ್ಟ ನಿರ್ದೇಶನ ನೀಡಿದರು.
ನೈಸರ್ಗಿಕ ವಿಕೋಪ ಎದುರಿಸಲು ರಾಜ್ಯದ ಹಲವು ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 540 ಕೊಟಿ ರೂ ಇದ್ದು, ಕೊಡಗು ಜಿಲ್ಲೆಗೆ ಹೆಚ್ಚುವರಿಯಾಗಿ 32 ಕೋಟಿ ರೂ ಬಿಡುಗಡೆ ಆಗಿದೆ ಎಂದು ಕಂದಾಯ ಸಚಿವರು ಮಾಹಿತಿ ನೀಡಿದರು.
ಮಳೆ ಹಾನಿ ಕಾಮಗಾರಿಗಳ ಸಂಬಂಧ ಕಳೆದ ನಾಲ್ಕು ವರ್ಷಗಳಿಂದ ಮನೆ ಮತ್ತು ಇತರೆ ಕಾಮಗಾರಿಗಳು ಆರಂಭ ಆಗದಿರುವುದಕ್ಕೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದರು.
ಮಳೆಗಾಲದ ಸಂದರ್ಭದಲ್ಲಿ ಅಧಿಕಾರಿಗಳು ಹೆಚ್ಚಿನ ಎಚ್ಚರ ವಹಿಸಿ ಕೆಲಸ ಮಾಡಬೇಕು. ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ನಾಗರಿಕರಲ್ಲಿ ಧೈರ್ಯ ತುಂಬಬೇಕು ಎಂದು ಕೃಷ್ಣ ಬೈರೇಗೌಡ ಅವರು ನಿರ್ದೇಶನ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೆಶನದಂತೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಮಾತನಾಡಿ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಅಷ್ಟಾಗಿ ಮಳೆ ಆಗಿಲ್ಲ, ಜುಲೈ 22 ರಿಂದ ವ್ಯಾಪಕ ಮಳೆ ಆಗುತ್ತಿದೆ. ಆದ್ದರಿಂದ ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಬಿರುನಾಣಿ ಮತ್ತು ನಾಪೋಕ್ಲು ಭಾಗದಲ್ಲಿ ಕಳೆದ ಎರಡು ದಿನಗಳಿಂದ ವಿದ್ಯುತ್ ಇಲ್ಲದೆ ಅಲ್ಲಿನ ನಾಗರಿಕರು ಪರಿತಪಿಸುತ್ತಿದ್ದು, ಕೂಡಲೇ ಸರಿಪಡಿಸುವಂತೆ ಸೂಚಿಸಿದರು.
ಶಾಸಕರಾದ ಡಾ.ಮಂತರ್ ಗೌಡ ಅವರು ಶಾಂತಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆ ಮತ್ತು ಗಾಳಿಯಿಂದ ವಿದ್ಯುತ್ ಸಂಪರ್ಕ ಇಲ್ಲದೆ ಸಾರ್ವಜನಿಕರಿಂದ ದೂರು ಬರುತ್ತಿದ್ದು ಕೂಡಲೇ ಸರಿಪಡಿಸುವಂತೆ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಳೆ ಹಾನಿ ಬಗ್ಗೆ ಮಾಹಿತಿ ನೀಡಿ ಈ ಬಾರಿ 40 ಕಿ.ಮೀ.ವೇಗದಲ್ಲಿ ಗಾಳಿ ಬೀಸಿ ಹೆಚ್ಚಿನ ಹಾನಿ ಆಗಿದೆ ಎಂದು ತಿಳಿಸಿದರು.
ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧಿಸಿದಂತೆ ಕಂದಾಯ, ಪೊಲೀಸ್, ಅರಣ್ಯ, ಪಂಚಾಯತ್ ರಾಜ್, ಅಗ್ನಿಶಾಮಕ ಹಾಗೂ ವಿವಿಧ ಇಲಾಖೆಗಳ ಜೊತೆಗೆ ಎನ್‍ಡಿಆರ್‍ಎಫ್ ತಂಡಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸುತ್ತಿವೆ ಎಂದು ತಿಳಿಸಿದರು.
ಪೊಲೀಸ್ ಇಲಾಖೆಯಿಂದ 4 ರ್ಯಾಪಿಡ್ ರೆಸ್ಪಾನ್ಸ್ ತಂಡಗಳು, ಸೆಸ್ಕ್ ವಿಭಾಗದಿಂದ 19 ತಂಡಗಳು ಹಾಗೂ ಅರಣ್ಯ ಇಲಾಖೆಯಿಂದ ಹಲವು ವಿಭಾಗಗಳು ಪ್ರಾಕೃತಿಕ ವಿಕೋಪದಲ್ಲಿ ತೊಡಗಿಸಿಕೊಂಡಿವೆ ಎಂದು ಮಾಹಿತಿ ನೀಡಿದರು.
ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಪ್ರಾಕೃತಿಕ ವಿಕೋಪ ವಿಭಾಗದ ರಾಜ್ಯ ಆಯುಕ್ತರಾದ ಸುನಿಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.









