ಮಡಿಕೇರಿ ಜು.26 : ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು ಮಣಿಪುರದ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭ ಸಮಿತಿಯ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಮಾತನಾಡಿ, ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.
ಮಣಿಪುರದಲ್ಲಿ ಕಳೆದ ಮೂರು ತಿಂಗಳಿನಿಂದ ನಿರಂತರವಾಗಿ ನಡೆಯುತ್ತಿರುವ ಕೋಮು ಸಂಘರ್ಷ ಅತ್ಯಂತ ಗಂಭೀರ ಸ್ವರೂಪ ಪಡೆಯುತ್ತಿದ್ದು, ಮಹಿಳೆಯರು ಜೀವ ಕಳೆದುಕೊಳ್ಳುತ್ತಿದ್ದಾರೆ. ಇದೊಂದು ಅಮಾನವೀಯ ಕೃತ್ಯವಾಗಿದ್ದು, ಕೇಂದ್ರ ಸರ್ಕಾರವಾಗಲೀ, ಅಲ್ಲಿನ ರಾಜ್ಯ ಸರ್ಕಾರವಾಗಲೀ ಯಾವುದೇ ಕ್ರಮಗಳನ್ನು ಕೈಗೊಳ್ಳದಿರುವುದು ಖಂಡನೀಯ ಎಂದರು.
ಜಿಲ್ಲಾ ಪ್ರಧನಾ ಕಾರ್ಯದರ್ಶಿ ಎ.ಸಿ.ಸಾಬು ಮಾತನಾಡಿ, ಮಣಿಪುರದ ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ಅಲ್ಲಿನ ರಾಜ್ಯ ಮತ್ತು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.
ತಕ್ಷಣವೇ ಮಣಿಪುರದಲ್ಲಿ ಶಾಂತಿ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು, ಆದಿವಾಸಿ, ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡಬೇಕು, ಹಿಂಸಾಚಾರ ಪೀಡಿತರಿಗೆ ಕಠಿಣ ಶಿಕ್ಷೆಯಾಗಬೇಕು, ಮುಖ್ಯಮಂತ್ರಿ ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿದರು.
ಸಮಿತಿಯ ಉಪಾಧ್ಯಕ್ಷ ಹೆಚ್.ಪಿ.ರಮೇಶ್, ಸಹ ಕಾರ್ಯದರ್ಶಿ ಶಾಜಿ ರಮೇಶ್, ಸರ್ಕಾರಿ ಆಸ್ಪತ್ರೆಯ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಜಾನಕಿ, ಬಿಸಿಯೂಟ ಮುಖಂಡು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.