ಮಡಿಕೇರಿ ಜು.28 : ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧಕ ಆಸ್ಪತ್ರೆ ಬಳಿ 29 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ‘ಕ್ರಿಟಿಕಲ್ ಕೇರ್ ಯೂನಿಟ್ ಆಸ್ಪತ್ರೆ’ ನಿರ್ಮಾಣ ಸಂಬಂಧ ಸಂಸದರಾದ ಪ್ರತಾಪ್ ಸಿಂಹ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಕುರಿತು ಮಾತನಾಡಿದ ಸಂಬಂಧಪಟ್ಟ ಎಂಜಿನಿಯರ್ ರಾಜೇಶ್ ಅವರು ಕ್ರಿಟಿಕಲ್ ಕೇರ್ ಯೂನಿಟ್ ಆಸ್ಪತ್ರೆಯನ್ನು 45 ಸೆಂಟು ಜಾಗದಲ್ಲಿ ಬೋಧಕ ಆಸ್ಪತ್ರೆ ಹತ್ತಿರ ನಿರ್ಮಿಸಲು ಉದ್ದೇಶಿಸಲಾಗಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದೆ ಎಂದರು.
ಸದ್ಯ ಈಗಾಗಲೇ ನಿರ್ಮಾಣ ಆಗುತ್ತಿರುವ 450 ಹಾಸಿಗೆ ಆಸ್ಪತ್ರೆಯ ಜನರಲ್ ವಿಭಾಗದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಆಸ್ಪತ್ರೆ ನವೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ. ಈಗಾಗಲೇ 100 ಕೋಟಿ ರೂ. ಬಿಡುಗಡೆಯಾಗಿದ್ದು, ಹೆಚ್ಚುವರಿಯಾಗಿ ಅನುದಾನ ಬೇಕಿದೆ ಎಂದು ಹೇಳಿದರು.
‘ಕ್ರಿಟಿಕಲ್ ಕೇರ್ ಯೂನಿಟ್ ಆಸ್ಪತ್ರೆ’ 15 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಂಸದರಾದ ಪ್ರತಾಪ್ ಸಿಂಹ ಅವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧಕ ಆಸ್ಪತ್ರೆಗೆ ಆದ್ಯತೆ ಮೇಲೆ ಎಂಆರ್‍ಐ ಸ್ಕ್ಯಾನ್ ಬೇಕಿದೆ. ಜೊತೆಗೆ ಮದರ್ ಚೈಲ್ಡ್ ಆಸ್ಪತ್ರೆ ಬೇಕಿದೆ ಎಂದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಕೆಲಸ ಮಾಡುವ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ವಸತಿ ಗೃಹ ಕಲ್ಪಿಸುವಂತೆ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸ್ಥಾನಿಕ ವೈದ್ಯಾಧಿಕಾರಿ ಡಾ.ಸತೀಶ್ ಅವರು ಮನವಿ ಮಾಡಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ವೈದ್ಯಾಧಿಕಾರಿಗಳಿಗೆ ವಸತಿ ಗೃಹ ಕಲ್ಪಿಸುವ ಸಂಬಂಧ ಜಾಗ ಒದಗಿಸಲಾಗುವುದು ಎಂದರು.
ಈಗಾಗಲೇ ಮೂರ್ನಾಡು ರಸ್ತೆಯ ಪ್ರವಾಸಿ ಮಂದಿರ ವೈದ್ಯಕೀಯ ಕಾಲೇಜಿಗೆ ಆಗಿದ್ದು, ಈ ಜಾಗದಲ್ಲಿ ವಸತಿ ಗೃಹ ನಿರ್ಮಾಣ ಮಾಡಬಹುದಾಗಿದೆ ಎಂದು ಸಂಬಂಧಪಟ್ಟ ಎಂಜಿನಿಯರ್ ಅವರು ತಿಳಿಸಿದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಪ್ರತಾಪ್ ಸಿಂಹ ಅವರು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಿರ್ಮಾಣವಾಗುತ್ತಿರುವ 750 ಹಾಸಿಗೆ ಆಸ್ಪತ್ರೆ, 100 ಕೋಟಿ ರೂ. ಬಿಡುಗಡೆಯಾಗಿದ್ದು, ಇನ್ನೂ 70 ಕೋಟಿ ರೂ. ಬೇಕಿದ್ದು, ಅನುದಾನ ಬಿಡುಗಡೆಗೆ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಸ್ವಾಮಿ, ಪ್ರಭಾರ ನಿರ್ದೇಶಕರಾದ ನರಸಿಂಹ ರೈ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುಂಡಯ್ಯ, ಎಂಜಿನಿಯರ್‍ಗಳಾದ ಶ್ರೀನಿವಾಸ್ ಗೌಡ, ನರಸಿಂಹ ಮೂರ್ತಿ, ವೈದ್ಯಕೀಯ ವಿಜ್ಞಾನ ಸಂಸ್ಥೆಯ ದೀಪಕ್ ಇತರರು ಇದ್ದರು.