ಮಡಿಕೇರಿ ಜು.28 : ಪ್ರವಾಸಿತಾಣಗಳಲ್ಲಿ ಸುರಕ್ಷತಾ ಕ್ರಮಗಳನ್ನು ಪಾಲಿಸದ ಪ್ರವಾಸಿಗರ ಮೇಲೆ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಎಚ್ಚರಿಕೆ ನೀಡಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಹಿನ್ನಲೆಯಲ್ಲಿ ಜಿಲ್ಲೆಯ ಬಹುತೇಕ ಜಲಾಶಯಗಳು, ಜಲಪಾತಗಳು, ನದಿಗಳು ಉಕ್ಕಿ ಹರಿಯುತ್ತಿವೆ, ಕಲ್ಲು ಬಂಡೆಗಳು ಜಾರುತ್ತಿವೆ. ಜಿಲ್ಲೆಯ ಪ್ರಕೃತಿ ಸೌಂದರ್ಯ ಮತ್ತಷ್ಟು ಹೆಚ್ಚಾಗಿದ್ದು, ಇವುಗಳನ್ನು ವಿಕ್ಷೀಸಲು ಬರುವಂತಹ ಸಾರ್ವಜನಿಕರು/ ಪ್ರವಾಸಿಗರು ಸೌಂದರ್ಯಕ್ಕೆ ಮನಸೋತು ಬಹಳ ಹತ್ತಿರದಿಂದ ಫೋಟೋ ಅಥವಾ ವಿಡಿಯೋ ತೆಗೆಯುವ, ರೀಲ್ಸ್ ಮಾಡುವ ಅನಗತ್ಯ ಸಾಹಸ ಮಾಡದಿರಿ, ಪ್ರವಾಸಿಗರು ಮತ್ತು ಸ್ಥಳೀಯರು ಹೊಸ ಪ್ರದೇಶದಲ್ಲಿ ಅಲ್ಲಿನ ಪರಿಸರದ ಬಗ್ಗೆ ಅರಿವಿರುವುದಿಲ್ಲ ಸ್ಥಳೀಯರ ಮಾತುಗಳನ್ನು ಗೌರವಿಸಿ, ಪ್ರವಾಸಿ ತಾಣಗಳಲ್ಲಿ ಅನುಸರಿಸಬೇಕಾದ ಕನಿಷ್ಠ ನಿಯಮಗಳ ಅನುಸರಿಸಿ, ಅಲ್ಲದೇ ಪ್ರವಾಸೋದ್ಯಮ ಇಲಾಖೆಯಿಂದ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ದೇಶಿಯ ಹಾಗೂ ವಿದೇಶಿಯ ಪ್ರವಾಸಿಗರಿಗೆ, ಸೂಕ್ತ ಸುರಕ್ಷತೆ ಮತ್ತು ಭದ್ರತೆಯನ್ನು ಕಲ್ಪಿಸುವ ದೃಷ್ಟಿಯಿಂದ ಪ್ರವಾಸಿ ಮಿತ್ರರನ್ನೂ ಸಹ ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಪ್ರವಾಸಿತಾಣಗಳಲ್ಲಿ ಪ್ರವಾಸಿಗರು ಮುನ್ನೆಚ್ಚರಿಕೆಯನ್ನು ನಿರ್ಲಕ್ಷಿಸಿ ತಮ್ಮ ಅಮೂಲ್ಯ ಜೀವವನ್ನು ಹಾನಿ ಮಾಡಿಕೊಳ್ಳುವ ಸಾಹಸಕ್ಕೆ ಕೈ ಹಾಕುತ್ತಿದ್ದಾರೆ. ಒಂದು ಸಣ್ಣ ತಪ್ಪು ನಡೆ ಜೀವಕ್ಕೆ ಸಂಚಕಾರವಾದೀತು, ಆದ್ದರಿಂದ ಪ್ರವಾಸಿಗರು ಜವಾಬ್ದಾರಿಯಿಂದ ವರ್ತಿಸಬೇಕು. ಹೋಟೆಲ್, ಹೋಂ-ಸ್ಟೇ, ರೆಸಾರ್ಟ್‍ಗಳಲ್ಲಿ ತಂಗುವ ಸಾರ್ವಜನಿಕರಿಗೆ/ ಪ್ರವಾಸಿಗರಿಗೆ ಮಾಲೀಕರು ಅಥವಾ ಸಿಬ್ಬಂದಿಗಳು ಪ್ರವಾಸಿತಾಣಗಳ ಬಗ್ಗೆ ಮಾಹಿತಿ ನೀಡಬೇಕು. ಜಾಗೃತಿ ಹಾಗೂ ಸುರಕ್ಷತೆಯಿಂದ ಇರುವಂತೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದ್ದಾರೆ.
ಈ ಎಲ್ಲಾ ಪ್ರಯತ್ನಗಳ ಹೊರತಾಗಿಯೂ ಪ್ರವಾಸಿಗರು ನಿರ್ಬಂಧಗಳನ್ನು ಉಲ್ಲಂಘಿಸಿದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.