ಮಡಿಕೇರಿ ಜು.29 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಮಟ್ಟದ ಮೂಲ ತರಬೇತಿ ಶಿಬಿರದ ಸಮಾರೋಪ ಸಮಾರಂಭ ನಗರದ ಗಾಂಧಿ ಭವನದಲ್ಲಿ ನಡೆಯಿತು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ರಂಗದಾಮಯ್ಯ ಮಾತನಾಡಿ, ಶಿಕ್ಷಕರು ತರಬೇತಿಯಲ್ಲಿ ಪಡೆದ ಮಾಹಿತಿಯನ್ನು ಮಕ್ಕಳಿಗೆ ನೀಡುವುದರ ಮೂಲಕ ಮಕ್ಕಳಲ್ಲಿ ಮೌಲ್ಯ ತುಂಬಬೇಕು, ಆ ಮೂಲಕ ಸದೃಢ ರಾಷ್ಟ್ರದ ನಿರ್ಮಾಣ ಆಗಬೇಕೆಂಬ ಸಂದೇಶ ನೀಡಿದರು.
ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಡಾ. ಸದಾಶಿವಯ್ಯ ಎಸ್ ಪಲ್ಲೇದ್ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಉತ್ತಮ ಗುಣಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ನಡೆಯುತ್ತಿದ್ದು, ರಾಜ್ಯ ಸಂಸ್ಥೆಯಿಂದ ಉತ್ತಮ ಬೆಂಬಲ ವ್ಯಕ್ತವಾಗಿದೆ, ಅದರ ಪ್ರಯೋಜನವನ್ನು ಪಡೆದುಕೊಳ್ಳಲು ಶಿಕ್ಷಕರಿಗೆ ಸಲಹೆ ನೀಡಿದರು.
ಮಡಿಕೇರಿ ನಗರಸಭಾ ಸದಸ್ಯರಾದ ಶಾರದಾ ನಾಗರಾಜ್ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಿಂದ ಮಕ್ಕಳಲ್ಲಿ ದೇಶ ಸೇವಾ ಮನೋಭಾವ ಬೆಳೆಯುತ್ತದೆ ಎಂಬ ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ ಬೇಬಿ ಮ್ಯಾಥ್ಯು, ಗಾಂಧಿ ಭವನದಲ್ಲಿ ನಡೆದ ಪ್ರಥಮ ಕಾರ್ಯಕ್ರಮ ನಮ್ಮ ಈ ತರಬೇತಿ ಆಗಿದ್ದು, ಈ ಭವನವನ್ನು ಏಳು ದಿನದ ಕಾರ್ಯಕ್ರಮಕ್ಕಾಗಿ ನೀಡಿದ ಜಿಲ್ಲಾಡಳಿತ ಮತ್ತು ವಾರ್ತಾ ಇಲಾಖೆ , ಕನ್ನಡ ಮತ್ತು ಸಂಸ್ಕೃತ ಇಲಾಖೆಗೆ ಕೃತಜ್ಞತೆ ಸಲ್ಲಿಸಿದರು.