ಮಡಿಕೇರಿ ಆ.1 : ಜಿಲ್ಲೆಯಲ್ಲಿ ಕಳೆದ ಏಳು ತಿಂಗಳಲ್ಲಿ ಗಾಂಜಾ ಸಂಬಂಧಿಸಿದಂತೆ 61 ಪ್ರಕರಣಗಳು ದಾಖಲಾಗಿದ್ದು, 157 ಜನರ ಮೇಲೆ ಮೊಕದ್ದಮೆ ಹೂಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ, ಪೊಲೀಸ್ ಇಲಾಖೆ, ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ವತಿಯಿಂದ ನಗರದ ಸರ್ಕಾರಿ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನದ ಪ್ರಯುಕ್ತ ಮಂಗಳವಾರ ನಡೆದ ‘ವ್ಯಸನ ಮುಕ್ತ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕೊಡಗು ಜಿಲ್ಲೆಯಲ್ಲಿ 36 ಕೆ.ಜಿ.ಯಷ್ಟು ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಸುಮಾರು 6 ಕಡೆಗಳಲ್ಲಿ ಗಾಂಜಾ ಬೆಳೆಯುತ್ತಿರುವುದನ್ನು ಪತ್ತೆ ಹಚ್ಚಲಾಗಿದೆ. ಹಾಗೆಯೇ 99 ಗ್ರಾಂ ಎಂಡಿಎಂಎ(ಮೀಥೈಲ್ ಎಡಿಯಾಕ್ಸಿ ಮೆಥಾಂಫೆಟಮೈನ್) ಮತ್ತು 9 ಬ್ಲಾಕ್‍ಗಳಲ್ಲಿ ಸ್ಟ್ರಿಪ್ಸ್ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಯುವಜನರು ಮದ್ಯ ಅಥವಾ ಮಾದಕ ವಸ್ತುಗಳಿಗೆ ತುತ್ತಾಗದೆ ವಿದ್ಯಾರ್ಜನೆಯತ್ತ ಗಮನಹರಿಸಬೇಕು. ಲಭ್ಯವಿರುವ ಸಮಯವನ್ನು ಸರಿಯಾಗಿ ಬಳಸಿಕೊಂಡಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಸಲಹೆ ಮಾಡಿದರು.
ಡಾ.ಮಹಾಂತ ಶಿವಯೋಗಿಗಳು ಮದ್ಯ ಹಾಗೂ ಮಾದಕ ವಸ್ತುಗಳ ವಿರುದ್ಧ 70 ರ ದಶಕದಲ್ಲಿಯೇ ಜಾಗೃತಿ ಮೂಡಿಸಿದರು. ಡಾ.ಮಹಾಂತ ಶಿವಯೋಗಿಗಳ ಆದರ್ಶಗಳನ್ನು ತಿಳಿದುಕೊಂಡು ಮುನ್ನಡೆಯಬೇಕು ಎಂದರು.
ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸಿ, ಉದ್ಯೋಗ ಪಡೆಯುವತ್ತ ಗಮನಹರಿಸಬೇಕು. ಸಂಗೀತ, ಸಾಹಿತ್ಯ, ಕ್ರೀಡೆ ಹೀಗೆ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಹುದಾಗಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮನೋವೈದ್ಯರಾದ ಡಾ.ಡೆವಿನ್ ಕರ್ಕಡ ಅವರು ಮಾತನಾಡಿ ಮದ್ಯ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ನೆನಪಿನ ಶಕ್ತಿ ಕಡಿಮೆಯಾಗುತ್ತದೆ. ಜೊತೆಗೆ ದೈಹಿಕ ಮತ್ತು ಮಾನಸಿಕವಾಗಿ ಕುಗ್ಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮದ್ಯ ಹಾಗೂ ಮಾದಕ ವಸ್ತುಗಳಿಗೆ ತುತ್ತಾದರೆ ಕುಟುಂಬ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಇದರಿಂದ ರಾಷ್ಟ್ರದ ಅಭಿವೃದ್ಧಿಗೆ ಹಿನ್ನೆಡೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಡೆವಿನ್ ಕರ್ಕಡ ಹೇಳಿದರು.
ಮದ್ಯ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ಮನಸ್ಸು ಮತ್ತು ನರ ದೌರ್ಬಲ್ಯ ಉಂಟಾಗುತ್ತದೆ. ಇದರಿಂದ ಕಿಡ್ನಿ, ಮೆದುಳಿಗೆ ತೊಂದರೆಯಾಗಲಿದೆ. ಆದ್ದರಿಂದ ಮದ್ಯ ಹಾಗೂ ಮಾದಕ ವಸ್ತುಗಳಿಂದ ದೂರವಿರಬೇಕು ಎಂದರು.
‘ಇತ್ತೀಚಿನ ದಿನಗಳಲ್ಲಿ ಮೊಬೈಲ್ ಪೋನ್ ಹೆಚ್ಚು ಬಳಸುವುದು ಸಹ ಒಂದು ರೀತಿ ವ್ಯಸನವಾಗಿದೆ. ರಾತ್ರಿ ವೇಳೆ ಹೆಚ್ಚು ಮೊಬೈಲ್ ನೋಡುವುದರಿಂದ ಒಂದು ರೀತಿ ಗೀಳು ಉಂಟಾಗಲಿದೆ. ಆದ್ದರಿಂದ ಯಾವುದೇ ರೀತಿಯ ಚಟಕ್ಕೂ ದಾಸರಾಗದಂತೆ ಎಚ್ಚರವಹಿಸುವುದು ಅತ್ಯಗತ್ಯ ಎಂದು ಡಾ.ಡೆವಿನ್ ಕರ್ಕಡ ಅವರು ಪ್ರತಿಪಾದಿಸಿದರು.
ರಾಷ್ಟ್ರದಲ್ಲಿ 16 ಕೋಟಿಯಷ್ಟು ಜನರು ಮದ್ಯಪಾನ ಮಾಡುತ್ತಾರೆ. ಇವರಲ್ಲಿ 3 ಕೋಟಿಯಷ್ಟು ಜನರು ಮದ್ಯ ವ್ಯಸನಕ್ಕೆ ತುತ್ತಾಗಿದ್ದಾರೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ ಅವರು ಮಾತನಾಡಿ ವಿದ್ಯಾರ್ಥಿಗಳು ಯಾವುದೇ ರೀತಿಯ ದುಶ್ಚಟಗಳಿಗೆ ಬಲಿಯಾಗಬಾರದು. ಇತರರು ಬಲಿಯಾಗದಂತೆ ಎಚ್ಚರವಹಿಸುವುದು ಅತ್ಯಗತ್ಯ ಎಂದು ಹೇಳಿದರು.
ವಾರ್ತಾಧಿಕಾರಿ ಚಿನ್ನಸ್ವಾಮಿ ಅವರು ಮಾತನಾಡಿ ಡಾ.ಮಹಾಂತ ಶಿವಯೋಗಿಗಳು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಆ. 1, 1930 ರಲ್ಲಿ ಜನಿಸಿ ವ್ಯಸನ ಮುಕ್ತ ಸಮಾಜಕ್ಕೆ ಶ್ರಮಿಸಿದ್ದಾರೆ ಎಂದು ತಿಳಿಸಿದರು.
1970 ರಲ್ಲಿ ಚಿತ್ತರಗಿ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ 19 ನೇ ಪೀಠಾಧಿಕಾರಿಯಾಗಿ, ಅನ್ನದಾಸೋಹ, ವಚನ ಮಾಂಗಲ್ಯ, ದೇವದಾಸಿ ವಿಮೋಚನೆ, ದೇವದಾಸಿಯರ ಮಕ್ಕಳಿಗೆ ಟ್ರಸ್ಟ್ ಸ್ಥಾಪನೆ ಹೀಗೆ ಹಲವು ಸಮಾಜಮುಖಿ ಕಾರ್ಯಗಳನ್ನು ಕೈಗೊಂಡಿದ್ದರು. ಡಾ.ಮಹಾಂತ ಸ್ವಾಮೀಜಿ ಅವರು 1975 ರಿಂದ ಕೈಗೊಂಡ ‘ಮಹಾಂತ ಜೋಳಿಗೆ’ ಕಾರ್ಯಕ್ರಮ ಅತ್ಯಂತ ವಿಶಿಷ್ಟವಾದದ್ದು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ ಅವರು ಮಾತನಾಡಿ ಡಾ.ಮಹಾಂತ ಶಿವಯೋಗಿಗಳ ಸಮಾಜ ಕಾರ್ಯ ಸ್ಮರಣೀಯ. ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಮಹಾಂತ ಸ್ವಾಮೀಜಿಗಳು ಶ್ರಮಿಸಿದ್ದಾರೆ ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು.
ಕರ್ನಾಟಕ ರಾಜ್ಯಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರಾದ ಸ್ಮಿತಾ ಸುಬ್ಬಯ್ಯ, ಉಪನ್ಯಾಸಕರಾದ ಚಿದಾನಂದ, ರಾಜಸುಂದರಂ, ಇತರರು ಇದ್ದರು.








