ಮಡಿಕೇರಿ ಆ.9 : ನಗರದ ದಾಸವಾಳ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಉದ್ಯಾನವನ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಬೇಕೆಂದು ಮಡಿಕೇರಿ ನಗರ ಕಾಂಗ್ರೆಸ್ ಮಹಿಳಾ ಘಟಕದ ನಗರಾಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಮನವಿ ಮಾಡಿದ್ದಾರೆ.
ಉದ್ದೇಶಿತ ಯೋಜನೆಯ ಸ್ಥಳಕ್ಕೆ ಭೇಟಿ ನೀಡಿದ್ದ ಅವರು ಅಲ್ಲಿನ ಅವ್ಯವಸ್ಥೆಯನ್ನು ಕಂಡು ಬೇಸರ ವ್ಯಕ್ತಪಡಿಸಿದರು.
ಮಾಜಿ ಶಾಸಕ ಎಂ.ಪಿ.ಅಪಚ್ಚು ರಂಜನ್ ಅವರು 2022 ಮೇ ತಿಂಗಳಿನಲ್ಲಿ ಉದ್ಯಾನವನ ನಿರ್ಮಾಣಕ್ಕಾಗಿ ಭೂಮಿಪೂಜೆ ನೆರವೇರಿಸಿದ್ದರು. ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಸುಂದರವಾದ ಉದ್ಯಾನವನ ನಿರ್ಮಿಸಬೇಕೆಂದು ಯೋಜನೆಗೆ ಅನುಮೋದನೆ ನೀಡಿದ್ದರು.
ಆದರೆ ಭೂಮಿಪೂಜೆ ನೆರವೇರಿಸಿ ಒಂದು ವರ್ಷ ಕಳೆದಿದ್ದರೂ ಇಲ್ಲಿಯವರೆಗೆ ಉದ್ಯಾನವನ ನಿರ್ಮಾಣಗೊಂಡಿಲ್ಲ. ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ ಮತ್ತು ಬೇಲಿ ಮಾತ್ರ ನಿರ್ಮಿಸಿ ಕಾಮಗಾರಿಯನ್ನು ಅಪೂರ್ಣಗೊಳಿಸಲಾಗಿದೆ ಎಂದು ಆರೋಪಿಸಿದರು.
ಇದೀಗ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಗಮನ ಸೆಳೆಯುವುದಾಗಿ ತಿಳಿಸಿದರು.
ನಗರದ ಸೌಂದರ್ಯದ ಹಿತದೃಷ್ಟಿಯಿಂದ ಮತ್ತು ಸಾರ್ವಜನಿಕರ ಹಿತಾಸಕ್ತಿಯಿಂದ ಉದ್ದೇಶಿತ ಯೋಜನೆಯನ್ನು ನಗರಸಭೆ ಆದಷ್ಟು ಶೀಘ್ರ ಪೂರ್ಣಗೊಳಿಸಬೇಕು. ಉದ್ಯಾವನದ ಯೋಜನೆಗಾಗಿ ಮೀಸಲಿಟ್ಟಿರುವ ಅನುದಾನವನ್ನು ಸದ್ಬಳಕೆ ಮಾಡಬೇಕು. ಅಲ್ಲದೆ ನಗರದಲ್ಲಿರುವ ನಗರಸಭೆಗೆ ಸೇರಿದ ಎಲ್ಲಾ ಉದ್ಯಾನವನಗಳ ಅಭಿವೃದ್ಧಿ ಮತ್ತು ನಿರ್ವಹಣೆಗೂ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.











