ಬೆಂಗಳೂರು ಆ.26 : ಕರ್ನಾಟಕ ಆದಿಜಾಂಬವರ ಸಾಂಸ್ಕೃತಿಕ ಸಮಿತಿ ಬೆಂಗಳೂರಿನ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ, ಸಿದ್ದಲಿಂಗಯ್ಯ ಅವರ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿದರು.
ನಂತರ ಮಾತನಾಡಿದ ಅವರು, ಬರೀ ಅಂಬಾನಿ – ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರ, ಮಧ್ಯಮ ವರ್ಗದವರ ಉದ್ಧಾರ ಸಾಧ್ಯವಿಲ್ಲ. ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ ಆರ್ಥಿಕತೆ ಬೆಳವಣಿಗೆ ಆಗುತ್ತದೆ. ದುಡಿಯುವವರ, ಶ್ರಮಿಕರ ಜೇಬಿನಲ್ಲಿ ಹಣ ಇದ್ದರೆ ಅವರು ದೇಶದ ಆರ್ಥಿಕತೆಯ ಬೆಳವಣಿಗೆಗೆ ಕಾರಣರಾಗುತ್ತಾರೆ. ಕೇವಲ ಅಂಬಾನಿ, ಅದಾನಿ ಜೇಬು ತುಂಬಿಸುವವರ ಕೈಗೆ ಅಧಿಕಾರ ಕೊಟ್ಟು ಇಡೀ ದೇಶ ಪರಿತಪಿಸುವಂತಾಗಿದೆ ಎಂದರು.
ಈ ಕಾರಣಕ್ಕೆ ನಾವು ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಕಾರ್ಯಕ್ರಮಗಳನ್ನು ಜಾರಿ ಮಾಡಿ ಜನರ ಜೇಬಿಗೆ ಹಣ ಹಾಕುವ ಕೆಲಸಕ್ಕೆ ಮುಂದಾಗಿದ್ದೇವೆ. ಇದರಿಂದ ನಮ್ಮ ಆರ್ಥಿಕತೆ ಚೈತನ್ಯ ಪಡೆದುಕೊಳ್ಳುತ್ತಿದೆ ಎಂದು ಹೇಳಿದರು.
ಮಾಜಿ ಸಚಿವ ಹೆಚ್.ಆಂಜನೇಯ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ.ಮಹದೇವಪ್ಪ, ಹಿರಿಯ ಸಾಹಿತಿಗಳಾದ ಕೆ.ಮರುಳಸಿದ್ದಪ್ಪ, ಎಸ್.ಜಿ ಸಿದ್ದರಾಮಯ್ಯ, ಅಗ್ರಹಾರ ಕೃಷ್ಣಮೂರ್ತಿ ಹಾಗೂ ಪ್ರಜಾವಾಣಿ ಪತ್ರಿಕೆ ಸಂಪಾದಕರಾದ ರವೀಂದ್ರ ಭಟ್, ಶಿಕ್ಷಣ ತಜ್ಞ ನಿರಂಜನಾರಾಧ್ಯ, ಇಂದಿರಾ ಕೃಷ್ಣಪ್ಪ, ಪ್ರೊ.ಜಾಫೆಟ್ ಸೇರಿ ಹಲವರು ಉಪಸ್ಥಿತರಿದ್ದರು.