ಮಡಿಕೇರಿ ಆ.26 : ಮಾದಾಪುರದ ಶ್ರೀಮತಿ ಡಿ.ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಉದ್ಘಾಟನೆ ಹಾಗೂ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.
ಸೋಮವಾರಪೇಟೆ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷ ಹಾಗೂ ಸಿವಿಲ್ ನ್ಯಾಯಾಧೀಶರಾದ ಗೋಕುಲ್ ಎನ್ಎಸ್ಎಸ್ ಘಟಕವನ್ನು ಉದ್ಘಾಟಿಸಿ, ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯದ ಅರಿವು ಹಾಗೂ ಪೋಕ್ಸೋ ಕಾಯಿದೆ ಮತ್ತು ಮೋಟಾರ್ ವಾಹನ ಕಾಯಿದೆ ಬಗ್ಗೆ ಮಾಹಿತಿ ನೀಡಿದರು.
ಎನ್ ಎಸ್ ಎಸ್ ಘಟಕದ ಮುಖ್ಯ ಉದ್ದೇಶವಾದ ಸೇವಾ ಮನೋಭಾವನೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು.
ಸಂಸ್ಥೆಯ ಪ್ರಾಂಶುಪಾಲ ಸಿ.ಜಿ.ಮಂದಪ್ಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ವಿದ್ಯಾರ್ಥಿ ದೆಸೆಯಲ್ಲಿಯೇ ಕಾನೂನಿನ ಬಗ್ಗೆ ಅರಿವನ್ನು ಬೆಳೆಸಿಕೊಂಡು ಉತ್ತಮ ನಾಗರಿಕರಾಗಿ ಎಂದು ಸಲಹೆ ನೀಡಿದರು.
ಹಿರಿಯ ಉಪನ್ಯಾಸಕ ರಾಜಸುಂದರಂ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕಿ ಪ್ರಮೀಳ ನಿರೂಪಿಸಿ, ಉಪನ್ಯಾಸಕಿ ಸೀಮಾ ಮಂದಪ್ಪ ವಂದಿಸಿದರು. ಮುಖ್ಯ ಶಿಕ್ಷಕಿ ರೇವತಿ, ಸಂಸ್ಥೆಯ ಸಿಬ್ಬಂದಿ ವರ್ಗ , ವಿದ್ಯಾರ್ಥಿಗಳು ಹಾಜರಿದ್ದರು.