ವಿರಾಜಪೇಟೆ ಆ.28 : ವಿರಾಜಪೇಟೆ ತಾಲೂಕು ಬಿಲ್ಲವ ಸೇವಾ ಸಂಘದ ವತಿಯಿಂದ ಆ.31 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಆಚರಿಸಲಾಗುವುದು ಎಂದು ಬಿಲ್ಲವ ಸೇವಾ ಸಂಘದ ತಾಲೂಕು ಅಧ್ಯಕ್ಷ ಬಿ.ಎಂ.ಗಣೇಶ್ ತಿಳಿಸಿದರು.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬಿಟ್ಟಂಗಾಲ ಗ್ರಾಮದ ಅಂಬಟ್ಟಿಯಲ್ಲಿರುವ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರದಲ್ಲಿ ಬೆಳಿಗ್ಗೆ 8 ಗಂಟೆಗೆ ಬ್ರಹ್ಮಶ್ರಿ ನಾರಾಯಣ ಗುರು ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದೆಂದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಿರಾಜಪೇಟೆಯ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಹಾಗೂ ವಿಧಾನ ಪರಿಷತ್ತ್ ಸದಸ್ಯರಾದ ಮಂಡೇಪಂಡ ಸುಜಾ ಕುಶಾಲಪ್ಪ ಭಾಗವಹಿಸಲಿದ್ದಾರೆ. ಇದೇ ಸಂದರ್ಭ ಶಾಸಕದ್ವಯರನ್ನು ಸಂಘದ ವತಿಯಿಂದ ಸನ್ಮಾನಿಸಲಾಗುತ್ತದೆ. ಮತ್ತು ಜನಾಂಗ ಭಾಂಧವರಲ್ಲಿ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.80ಕ್ಕಿಂತಲೂ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಸಂಘದಲ್ಲಿ ಈಗಾಗಲೇ ಸಂಘದ ಸದಸ್ಯರಿಗೆ ಮರಣ ನಿಧಿಯನ್ನು ಸ್ಥಾಪಿಸಲಾಗಿದ್ದು, ಮರಣನಿಧಿಗೆ ಸಂಭಂಧಿಸಿದಂತೆ ಸದಸ್ಯರುಗಳು ಆದಷ್ಟು ಬೇಗ ತಮ್ಮ ಸದಸ್ಯತ್ವವನ್ನು ನವೀಕರಣಗೊಳಿಸುವಂತೆ ತಿಳಿಸಿದರು.
ಸಂಘದ ಸದಸ್ಯರುಗಳು, ಜನಾಂಗ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಿಕೊಡುವಂತೆ ಅಧ್ಯಕ್ಷರಾದ ಬಿ.ಎಂ. ಗಣೇಶ್ ಕೋರಿದ್ದಾರೆ.