ಮಡಿಕೇರಿ ಆ.29 : ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಹಾಗೂ ಕಾರ್ಯಕರ್ತರಿಗೆ ಬೃಹತ್ ಅಭಿನಂದನಾ ಸಮಾವೇಶವು ಸೆ.5 ರಂದು ನಡೆಯಲಿದೆ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಜಿಲ್ಲಾಧ್ಯಕ್ಷ ಪಿ.ಎ.ಹನೀಫ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಕಾವೇರಿ ಹಾಲ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು, ವಿಧಾನ ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್, ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ರಾಜ್ಯ ವಕ್ಫ್ ಮತ್ತು ಅಲ್ಪಸಂಖ್ಯಾತರ ಇಲಾಖೆ ಸಚಿವ ಜಮೀರ್ ಅಹ್ಮದ್, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ, ಸಣ್ಣ ನೀರಾವರಿ ಸಚಿವ ಬೋಸ್ ರಾಜ್, ಇಂಧನ ಸಚಿವ ಕೆ.ಜೆ.ಜಾರ್ಜ್ ಪಾಲ್ಗೊಳ್ಳಲಿದ್ದಾರೆ.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಬೆಂಗಳೂರು ಶಾಂತಿನಗರದ ಶಾಸಕ ಎನ್.ಎ.ಹಾರಿಸ್, ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಉಪಾಧ್ಯಕ್ಷ ಐ ವಾನ್ ಡಿಸೋಜಾ, ಕೆಪಿಸಿಸಿ ವಕ್ತಾರ ಲಕ್ಷ್ಮಣ್, ಕೆಪಿಸಿಸಿ ಕಾರ್ಯದರ್ಶಿ ಮೆಹರುಸ್ ಖಾನ್ ಸೇರಿದಂತೆ ಮತ್ತಿತರ ರಾಜ್ಯ ನಾಯಕರು, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಮುಖಂಡರು ಪಾಲ್ಗೊಳ್ಳಲಿದ್ದು, ಜಿಲ್ಲಾ ಕಾಂಗ್ರೆಸ್ ಪ್ರಮುಖರು, ವಿವಿಧ ಘಟಕದ ಅಧ್ಯಕ್ಷರು, ಉಪಾಧ್ಯಕ್ಷರು ಸಮಿತಿ ಸದಸ್ಯರು, ಪದಾಧಿಕಾರಿಗಳು, ಬೂತ್ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಹನೀಫ್ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಪಕ್ಷಕ್ಕಾಗಿ ನಿರಂತರವಾಗಿ ದುಡಿದ ಪಕ್ಷದ ಆರು ಬ್ಲಾಕಿನ ಆರು ಹಿರಿಯ ಕಾರ್ಯಕರ್ತರನ್ನು ಸನ್ಮಾನಿಸಿ ಗೌರವಿಸಲಾಗುವುದೆಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಉಪಾಧ್ಯಕ್ಷ ಎಂ.ಎಂ.ಇಸ್ಮಾಯಿಲ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಕಲೀಲ್ ಬಾಷ, ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ರಫೀಕ್ ಕೋಳುಮಂಡ, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಶುಬೈರ್ ಕಡಂಗ, ಕಾಂಗ್ರೆಸ್ ಮುಖಂಡ ಜೋಕಿಂ ಉಪಸ್ಥಿತರಿದ್ದರು.









