ಮಡಿಕೇರಿ ಆ.30 : ಅರಣ್ಯ ಇಲಾಖೆಯ ಮಹಿಳಾ ಕಿರಿಯ ಅಧಿಕಾರಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮೂಲತಃ ಮಂಡ್ಯ ಮೂಲದ ರಶ್ಮಿ(27) ಎಂಬುವವರೇ ಮೃತ ಅಧಿಕಾರಿಯಾಗಿದ್ದಾರೆ.
ಮಡಿಕೇರಿ ಅರಣ್ಯ ಇಲಾಖೆಯ ಸಂಶೋಧನೆ ವಿಭಾಗದಲ್ಲಿ ಡಿಆರ್‍ಎಫ್‍ಓ ಆಗಿ ಕಳೆದ 2 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ರಶ್ಮಿ ಅವರು ಅರಣ್ಯ ಇಲಾಖೆಯ ವಸತಿ ಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ರಾತ್ರಿಯೇ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದ್ದು, ಬುಧವಾರ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಪೊಲೀಸ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಹಜರು ನಡೆಸಿ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಯಿತು. ಮೃತದೇಹದ ಮರಣೋತ್ತರ ಪರೀಕ್ಷೆ ನಂತರ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಆತ್ಮಹತ್ಯೆ ಕುರಿತು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಡಿಕೇರಿಯ ಅರಣ್ಯ ಇಲಾಖೆಯ ಡಿ.ಎಫ್.ಓ ಎ.ಟಿ.ಪೂವಯ್ಯ, ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ರಶ್ಮಿ ಸಾವಿಗೆ ಸಂತಾಪ ಸೂಚಿಸಿದ್ದಾರೆ.