ಕುಶಾಲನಗರ ಆ.31: ಬೆಂಗಳೂರಿನ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು
ಸಂಗ್ರಹಾಲಯ, ಶಾಲಾ ಶಿಕ್ಷಣ ಇಲಾಖೆಯ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ದ ವತಿಯಿಂದ ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ವಿಜ್ಞಾನ ಸಂಘದ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೋಮವಾರಪೇಟೆ
ತಾಲ್ಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಹಾಗೂ ನಾಟಕ ಸ್ಪರ್ಧೆ ನಡೆಯಿತು.
ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಂಗಳೂರು ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ(ಬಿ.ಎಡ್., ಕಾಲೇಜು) ದ ಉಪನ್ಯಾಸಕ ಎಚ್.ಬಿ.ಶಿವಾನಂದ, ವಿಜ್ಞಾನ ಮನುಷ್ಯನ ಬದುಕಿನ ಅವಿಭಾಜ್ಯ ಅಂಗವಾಗಿದೆ. ವಿದ್ಯಾರ್ಥಿಗಳು ವಿಜ್ಞಾನ ವಿಷಯದಲ್ಲಿ ಹೆಚ್ಚಿನ ಅಧ್ಯಯನ ಕೈಗೊಂಡು ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಬೇಕು ಎಂದರು.
ವಿದ್ಯಾರ್ಥಿಗಳು ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ಸ್ಪರ್ಧಾ ಮನೋಭಾವದೊಂದಿಗೆ ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿ ಸಿರಿಧಾನ್ಯಗಳ ಮಹತ್ವ ಕುರಿತು ಮಾತನಾಡಿದ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ವಿ.ಮಂಜೇಶ್, ವಿಶ್ವ ಸಿರಿಧಾನ್ಯಗಳ ವರ್ಷಾಚರಣೆ ಅಂಗವಾಗಿ ದಿನನಿತ್ಯ ಜೀವನದಲ್ಲಿ ಮರೆಯಾಗುತ್ತಿದ್ದ
ಸಿರಿಧಾನ್ಯಗಳ ಬಳಕೆ ಬಗ್ಗೆ ಜನಜಾಗೃತಿ ಮೂಡಿಸಲು ಇಂತಹ ಸ್ಪರ್ಧೆಗಳು ಸಹಕಾರಿಯಾಗಿವೆ ಎಂದರು.
ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ, ಜ್ಞಾನ ಹೆಚ್ಚಿಸಲು ಸರಕಾರ ವಿಜ್ಞಾನ ಗೋಷ್ಠಿ ಹಾಗೂ ವಿಜ್ಞಾನ ನಾಟಕ ಸ್ಪರ್ಧೆಗಳನ್ನು ಏರ್ಪಡಿಸುತ್ತಿದೆ ಎಂದರು.
“ದಿನನಿತ್ಯ ಜೀವನದಲ್ಲಿ ವಿಜ್ಞಾನ ಬಳಕೆ” ಕುರಿತು ಮಾತನಾಡಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ವಿದ್ಯಾರ್ಥಿಗಳು ಮೂಲ ವಿಜ್ಞಾನ ವಿಷಯಗಳಲ್ಲಿ ಹೆಚ್ಚಿನ ಅಧ್ಯಯನ ಕೈಗೊಂಡು ವಿಜ್ಞಾನಿಗಳಂತೆ ವಿಜ್ಞಾನದ ಅನ್ವೇಷಣೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಮೂಢನಂಬಿಕೆಗಳಿಂದ ದೂರವಿದ್ದು, ವಿಜ್ಞಾನದ ನಡಿಗೆ ಮೂಲಕ ವಿಜ್ಞಾನ ಕ್ಷೇತ್ರದ ಸಾಧನೆಯಲ್ಲಿ ತೊಡಗಿಕೊಳ್ಳಬೇಕು ಎಂದರು.
ಹೊಸ ಅವಿಷ್ಕಾರಗಳು ಮಾನವ ವಿಕಾಸದ ಮೈಲುಗಲ್ಲು. ವಿದ್ಯಾರ್ಥಿಗಳು ವಿಜ್ಞಾನಿಗಳ ಮಾದರಿಯಲ್ಲಿ ಸಂಶೋಧನಾ ಪ್ರವೃತ್ತಿ ಬೆಳೆಸಿಕೊಂಡು ವಿಜ್ಞಾನ ವಿಷಯದಲ್ಲಿ ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳಬೇಕು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಸ್ಪರ್ಧಾ ಕಾರ್ಯಕ್ರಮದ ತಾಲ್ಲೂಕು ನೋಡಲ್ ಅಧಿಕಾರಿ ಕೆ.ಬಿ.ರಾಧಾಕೃಷ್ಣ, ಮಕ್ಕಳಲ್ಲಿ ಸ್ಪರ್ಧಾ ಮನೋಭಾವ ಬೆಳೆಸಲು ಇಂತಹ ಸ್ಪರ್ಧೆ ಸಂಘಟಿಸಲಾಗಿದೆ ಎಂದರು.
ವಿಜ್ಞಾನ ಸ್ಪರ್ಧೆಯ ವಿವರಗಳನ್ನು ನೀಡಿದರು.
ತಾಲ್ಲೂಕು ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳನ್ನು ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಗುವುದು ಎಂದರು.
ಶಾಲೆಯ ಮುಖ್ಯೋಪಾಧ್ಯಾಯಿನಿ ಬಿ.ಎನ್.ಪುಷ್ಪ, ಏಳನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಸೋಮಯ್ಯ, ಮುಕಾಂಬಿಕಾ ಪ್ರೌಢಶಾಲಾ ಮುಖ್ಯ ಶಿಕ್ಷಕ ಎಸ್.ಎಸ್.ಗೋಪಾಲ್, ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಕೆ.ಆರ್.ರಾಣಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಮೈಸೂರು ವಿಭಾಗದ ಉಪಾಧ್ಯಕ್ಷ ಪಿ.ನವೀನ್ ಕುಮಾರ್, ಬಿ ಆರ್ ಪಿ ಎಸ್.ಎನ್.ಲೋಕೇಶ್, ಇಸಿಓ ಎಚ್.ಆರ್. ಶೇಖರ್, ಯಲ್ಲಪ್ಪ ಪೂಜಾರಿ, ವಿವಿಧ ಶಾಲೆಗಳ ವಿಜ್ಞಾನ ವಿಷಯದ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶಿಕ್ಷಕ ಕೆ.ಸಿ.ಶಿವಣ್ಣ ಕಾರ್ಯಕ್ರಮ ನಿರ್ವಹಿಸಿದರು.