ಮಡಿಕೇರಿ ಸೆ.6 : ಕನ್ನಡ ಸಾಹಿತ್ಯ ಪರಿಷತ್ತಿನ ಕುಶಾಲನಗರ ತಾಲ್ಲೂಕು ಘಟಕದ ಪದಗ್ರಹಣ ಸಮಾರಂಭವು ಸೆ.10 ರಂದು ಕುಶಾಲನಗರದಲ್ಲಿ ನಡೆಯಲಿದೆ ಎಂದು ಘಟಕದ ನಿಯೋಜಿತ ಅಧ್ಯಕ್ಷ ಕೆ.ಎಸ್.ನಾಗೇಶ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 3 ಗಂಟೆಗೆ ಕುಶಾಲನಗರದ ಕಲಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಉದ್ಘಾಟಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಕನ್ನಡ ಸಾಹಿತ್ಯ ಪರಿಷತ್ ಗೌರವ ಸಲಹೆಗಾರ ಹಾಗೂ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಪಾಲ್ಗೊಳ್ಳಿದ್ದಾರೆ.
ಸಭಾ ಕಾರ್ಯಕ್ರಮಕ್ಕೂ ಮೊದಲು ಕೊಪ್ಪಗೇಟ್ ಬಳಿಯಿಂದ ಯದುವೀರ್ ಒಡೆಯರ್ ಅವರಿಗೆ ಅದ್ದೂರಿ ಸ್ವಾಗತ ಕೋರಲಾಗುವುದು. ಅಲ್ಲಿಂದ ಕಲಾ ಭವನದವರೆಗೆ ಮೆರವಣಿಗೆ ಮೂಲಕ ವೇದಿಕೆಗೆ ಕರೆ ತರಲಾಗುವುದು ಎಂದರು.
ಕನ್ನಡ ಸಾಹಿತ್ಯ ಪರಿಷತ್ ಗೌರವ ಸಲಹೆಗಾರ ಹಾಗೂ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಕುಶಾಲನಗರ ಕಲಾ ಭವನದ ಕಾಮಗಾರಿ ಅಪೂರ್ಣಗೊಂಡಿದ್ದು, ಈಗಾಗಲೇ ಶಾಸಕ ಡಾ.ಮಂತರ್ ಗೌಡ ಅವರ ಗಮನ ಸೆಳೆಯಲಾಗಿದೆ. ಕಟ್ಟಡ ಪೂರ್ಣಗೊಂಡ ನಂತರ ಮುಂದಿನ ದಿನಗಳಲ್ಲಿ ಕನ್ನಡ ಪರ ಕಾರ್ಯಕ್ರಮಗಳನ್ನು ಅಲ್ಲೇ ನಡೆಸಲಾಗುವುದು ಎಂದು ಹೇಳಿದರು.
ಕೊಡಗು ಜಿಲ್ಲೆಯಲ್ಲಿ ಕುಶಾಲನಗರ ಅತ್ಯಂತ ಬೆಳವಣಿಗೆ ಕಂಡ ತಾಲ್ಲೂಕು ಆಗಿದ್ದು, ಹಲವು ಕನ್ನಡ ಪರ ಕಾರ್ಯಕ್ರಮಗಳು ಈ ಭಾಗದಲ್ಲೇ ಹೆಚ್ಚು ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಕಸಾಪದಿಂದ ಹೆಚ್ಚು ಹೆಚ್ಚು ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್, ಕುಶಾಲನಗರ ತಾಲ್ಲೂಕು ಘಟಕದ ನಿರ್ದೇಶಕರುಗಳಾದ ಡಿ.ವಿ.ರಾಜೇಶ್ ಹಾಗೂ ಸೋಮಣ್ಣ ಉಪಸ್ಥಿತರಿದ್ದರು.









