ಮಡಿಕೇರಿ ಸೆ.8 : ಬಿಜೆಪಿ ಸರ್ಕಾರದ ರೈತಪರ ಯೋಜನೆ ಮುಂದುವರಿಸಬೇಕು ಮತ್ತು ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕೆಂದು ಆಗ್ರಹಿಸಿ, ಬಿಜೆಪಿ ರೈತ ಮೋರ್ಚಾದಿಂದ ಮಡಿಕೇರಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಪಾಲ್ಗೊಂಡ ಮಾಜಿ ಶಾಸಕರುಗಳಾದ ಕೆ.ಜಿ.ಬೋಪಯ್ಯ ಹಾಗೂ ಎಂ.ಪಿ.ಅಪ್ಪಚ್ಚು ರಂಜನ್ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿ ಸರ್ಕಾರ ನೀಡುತ್ತಿದ್ದ ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ ಯೋಜನೆ, ಭೂಸಿರಿ, ಶ್ರಮಶಕ್ತಿ ಮತ್ತು ರೈತ ಸಂಪದ ಯೋಜನೆಯನ್ನು ಮುಂದುವರೆಸಬೇಕೆಂದು ಒತ್ತಾಯಿಸಿದರು.
ಅಪ್ಪಚ್ಚು ರಂಜನ್ ಮಾತನಾಡಿ ಬಿಜೆಪಿ ಸರ್ಕಾರ ನೀಡುತ್ತಿದ್ದ ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ ಯೋಜನೆ ಸೇರಿದಂತೆ ಅನೇಕ ಯೋಜನೆಗಳನ್ನು ಕಾಂಗ್ರೆಸ್ ಸರಕಾರ ಸ್ಥಗಿತಗೊಳಿಸಿದೆ. 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಹೇಳಿ, ವಿದ್ಯುತ್ ದರವನ್ನು ಹೆಚ್ಚಿಸಿದೆ ಎಂದು ಆರೋಪಿಸಿದರು.
ಕೆ.ಜಿ.ಬೋಪಯ್ಯ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ನೂರು ದಿನ ಕಳೆದಿದೆ. ಆದರೆ ಈ ನೂರು ದಿನಗಳ ಆಡಳಿತದ ಅನುಭವದಿಂದಾಗಿ ಜನರು ಸರಕಾರಕ್ಕೆ ಹಿಡಿಶಾಪ ಹಾಕುವಂತಾಗಿದೆ. ಐದು ಗ್ಯಾರಂಟಿ ಯೋಜನೆಗಳಿಂದಾಗಿ ಜನರಲ್ಲಿ ಗೊಂದಲ ಸೃಷ್ಟಿಯಾಗಿದೆ.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಬ್ಯಾಂಕ್ ಎದುರು ಸಾಲು ನಿಲ್ಲುವಂತಾಗಿದೆ. 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಹೇಳಿ ಮತ್ತೊಂದೆಡೆ ವಿದ್ಯುತ್ ಬಿಲ್ ಹೆಚ್ಚಳ ಮಾಡಿದೆ. ಕೇಂದ್ರ ಸರಕಾರ ನೀಡುತ್ತಿರುವ ಐದು ಕೆ.ಜಿ. ಅಕ್ಕಿಯನ್ನು ತಾವು ನೀಡುತ್ತಿರುವುದಾಗಿ ಹೇಳಿ ಜನರ ದಿಕ್ಕುತಪ್ಪಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರೈತ ಮೋರ್ಚಾದ ಜಿಲ್ಲಾಧ್ಯಕ್ಷ ನಾಗೇಶ್ ಕುಂದಲ್ಪಾಡಿ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ತಹಶೀಲ್ದಾರ್ ಮೂಲಕ ಸರಕಾರಕ್ಕೆ ಸಲ್ಲಿಸಿದರು. ರಾಜ್ಯ ರೈತ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆ ಯಮುನಾ ಚಂಗಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಸುನಿಲ್ ಸುಬ್ರಮಣಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಬೀನ್ ದೇವಯ್ಯ, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ನಗರಸಭಾ ಸದಸ್ಯರು, ಬಿಜೆಪಿ ಮಡಿಕೇರಿ ನಗರಾಧ್ಯಕ್ಷ ಮನು ಮಂಜುನಾಥ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.









