ಮಡಿಕೇರಿ ಸೆ.14 : ಗೌರಿ- ಗಣೇಶ ಹಬ್ಬದ ಸಂದರ್ಭದಲ್ಲಿ ನಾಗರಿಕರು ಪಿ.ಓ.ಪಿ ಗಣೇಶ ತಯಾರಿಕೆ ಹಾಗೂ ರಾಸಾಯನಿಕ ಬಣ್ಣ ಮುಕ್ತ ಪರಿಸರ ಸ್ನೇಹಿ ನೈಸರ್ಗಿಕವಾದ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿಯ ಜಿಲ್ಲಾ ಉಪ ಪರಿಸರ ಅಧಿಕಾರಿ ಎಂ. ಎಸ್.ನೇತ್ರಾವತಿ ಮನವಿ ಮಾಡಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ನ ಜಿಲ್ಲಾ ಘಟಕದ ವತಿಯಿಂದ ಶಾಲಾ – ಕಾಲೇಜುಗಳಲ್ಲಿ ಇಕೋ ಕ್ಲಬ್/ ವಿಜ್ಞಾನ ಸಂಘ/ ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್.) ,ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಹಾಗೂ ಇನ್ನಿತರ ಸಂಘಗಳು/ ಎಸ್ ಡಿ ಎಂ ಸಿ ಹಾಗೂ ಶಾಲಾ ಆಡಳಿತ ಮಂಡಳಿಯ ಸಹಯೋಗದೊಂದಿಗೆ ಸೆ.18 ರಂದು ನಡೆಯಲಿರುವ ಗೌರಿ- ಗಣೇಶೋತ್ಸವದ ಅಂಗವಾಗಿ “ನಮ್ಮ ನಡೆ ಹಸಿರೆಡೆಗೆ” ಅಭಿಯಾನದಡಿ( ಗೋ ಗ್ರೀನ್ ಕ್ಯಾಂಪೈನ್ ) “ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ -2023 ಕುರಿತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಸಂಘ- ಸಂಸ್ಥೆಗಳ ಸಹಭಾಗಿತ್ವದಲ್ಲಿ ಜನಜಾಗೃತಿ ಮೂಡಿಸುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದರು.
ಗಣೇಶೋತ್ಸವ ಸಂದರ್ಭದಲ್ಲಿ ಪಿ.ಓ.ಪಿ. ಗಣೇಶ ಮೂರ್ತಿ ತಯಾರಿಕೆ ಹಾಗೂ ಮಾಲಿನ್ಯಕಾರಿ ರಾಸಾಯನಿಕ ಬಣ್ಣ ಬಳಸಿ ಗಣೇಶ ಮೂರ್ತಿ ತಯಾರಿಸಿ ಪ್ರತಿಷ್ಠಾಪನೆ ಮಾಡುವುದನ್ನು ಸರ್ಕಾರ ಸಂಪೂರ್ಣವಾಗಿ ನಿಷೇಧಿಸಿದೆ. ಈ ಕುರಿತು ಕೊಡಗು ಜಿಲ್ಲಾಧಿಕಾರಿಗಳು ಈಗಾಗಲೇ ಪ್ರಕಟನೆ ಹೊರಡಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ.
ನಾಗರಿಕರು ಪರಿಸರ ಪೂರಕವಾಗಿ ಗಣೇಶೋತ್ಸವ ಆಚರಿಸಬೇಕೆಂದು ಉಪ ಪರಿಸರ ಅಧಿಕಾರಿ ನೇತ್ರಾವತಿ ಮನವಿ ಮಾಡಿದರು.
ಸರ್ಕಾರದ ಸುತ್ತೋಲೆಯ ಪ್ರಕಾರ ನೈಸರ್ಗಿಕವಾಗಿ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ತಯಾರಿಕೆ ಹಾಗೂ ಪ್ರತಿಷ್ಠಾಪನೆ ಕುರಿತು ಶಾಲೆಗಳಲ್ಲಿ ಜನ ಜಾಗೃತಿ ಮೂಡಿಸಲು *ಈಗಾಗಲೇ ಶಾಲಾ- ಕಾಲೇಜಿನ ಮುಖ್ಯಸ್ಥರಿಗೆ
ತಿಳಿಸಲಾಗಿದೆ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಪ್ರಭಾರಿ ಉಪ ನಿರ್ದೇಶಕಿ( ಆಡಳಿತ) ಸೌಮ್ಯ ಪೊನ್ನಪ್ಪ ತಿಳಿಸಿದ್ದಾರೆ.
ಶಾಲೆಗಳಲ್ಲಿ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಬಗ್ಗೆ ವಿದ್ಯಾರ್ಥಿಗಳು ಹಾಗೂ ಸಮುದಾಯದಲ್ಲಿ ಶಾಲೆಗಳ ಮುಖ್ಯಸ್ಥರು, ಶಿಕ್ಷಕರು ಜತೆಗೂಡಿ ಜನಜಾಗೃತಿ ಮೂಡಿಸಲು ತಿಳಿಸಲಾಗಿದೆ ಎಂದು ಹೇಳಿದ್ದಾರೆ.
ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಯ ಮಹತ್ವ ಕುರಿತು ಮಾಹಿತಿ ನೀಡಿರುವ ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್ ನ ಕೊಡಗು ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಪರಿಸರ ಕಾರ್ಯಕ್ರಮ ಸಂಘಟಕ ಟಿ.ಜಿ.ಪ್ರೇಮಕುಮಾರ್, ಪ್ರತಿಯೊಬ್ಬರೂ ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಮೂಲಕ ಮಾಲಿನ್ಯ ತಡೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಗಣೇಶ ಹಬ್ಬದ ಸಂದರ್ಭದಲ್ಲಿ ಪಿಓಪಿ ಹಾಗೂ ರಾಸಾಯನಿಕ ಮಿಶ್ರಿತ ಗಣೇಶ ಮೂರ್ತಿಯನ್ನು ಬಳಸದೇ ಪರಿಸರ ಸ್ನೇಹಿ ಹಾಗೂ ನೈಸರ್ಗಿಕವಾಗಿ ಮಣ್ಣಿನ ಮೂರ್ತಿ ತಯಾರಿಸಿ ಪ್ರತಿಷ್ಠಾಪಿಸುವ
ಮೂಲಕ ಮಾಲಿನ್ಯ ತಡೆಗಟ್ಟಲು ಶಾಲೆಗಳ ಇಕೋ ಕ್ಲಬ್ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದಿದ್ದಾರೆ.
ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ನದಿ,ಕೆರೆ ಮತ್ತಿತರ ಜಲಮೂಲಗಳಿಗೆ ವಿಸರ್ಜಿಸುವುದರಿಂದ ಜಲಚರಗಳು ಸೇರಿದಂತೆ ನೀರು ಮತ್ತು ಪರಿಸರ ಮಾಲಿನ್ಯ ಉಂಟಾಗುವುದನ್ನು ತಡೆಗಟ್ಟುವ ದಿಸೆಯಲ್ಲಿ
ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ ಪ್ರತಿಷ್ಠಾಪಿಸಲು ಜನಜಾಗೃತಿ ಮೂಡಿಸಲಾಗುತ್ತಿದೆ ಎಂದು ಪ್ರೇಮಕುಮಾರ್ ತಿಳಿಸಿದ್ದಾರೆ.
ಗಣೇಶ ಮೂರ್ತಿಗಳನ್ನು ಆಕರ್ಷಣೀಯವಾಗಿಸಲು ಅರಿಶಿಣ ಮತ್ತು ನೈಸರ್ಗಿಕ ಬಣ್ಣಗಳನ್ನು ಬಳಸಬಹುದು ಎಂದು ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಜಿಲ್ಲಾಡಳಿತ, ಶಿಕ್ಷಣ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ರಾಜ್ಯ ವಿಜ್ಞಾನ ಪರಿಷತ್ತು ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಹಕಾರದೊಂದಿಗೆ ಕಳೆದ 12 ವರ್ಷಗಳಿಂದ ನಿರಂತರವಾಗಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸುವ ಮೂಲಕ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸಲಾಗುತ್ತಿದೆ ಎಂದು ಎಂದಿದ್ದಾರೆ.