ಮಡಿಕೇರಿ ಸೆ.15 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ಸಂವಿಧಾನದತ್ತವಾದ 9 ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಜನ್ಮದಿನವಾದ ಇಂದು ತೀರ್ಥ ಕ್ಷೇತ್ರ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಪಾದಯಾತ್ರೆಯನ್ನು ಆರಂಭಿಸಿತು.
ಕೊಡಗು ಜಿಲ್ಲೆಯ ವಿವಿಧೆಡೆ ಐದು ಹಂತಗಳಲ್ಲಿ ಪಾದಯಾತ್ರೆ ನಡೆಯಲಿದೆ. ಶುಕ್ರವಾರ ಬೆಳಗ್ಗೆ ತಲಕಾವೇರಿಯಲ್ಲಿ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಯೋಗಕ್ಷೇಮಕ್ಕಾಗಿ ವಿಶೇಷ ಪೂಜೆ ಸಲ್ಲಿಸಿದ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಗಾಗಿ ಪ್ರಾರ್ಥನೆ ಸಲ್ಲಿಸಿದರು. ನಂತರ ಕೊಡವ ಲ್ಯಾಂಡ್ ಪರ ಘೋಷಣೆಯೊಂದಿಗೆ ಪಾದಯಾತ್ರೆ ಆರಂಭಗೊಂಡಿತು.