ಮಡಿಕೇರಿ ಸೆ.15 : ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ನೀಡದೆ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವುದು ಅಸಾಧ್ಯ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ ಅಭಿಪ್ರಾಯಪಟ್ಟಿದ್ದಾರೆ.
ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ 40ನೇ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನ್ನು ಪಕ್ಷ ಗುರುತಿಸಬೇಕು. ಪ್ರತಿ ಹಂತದಲ್ಲಿ ಕಾರ್ಯಕರ್ತೆಯರಿಗೆ ಸೂಕ್ತ ಸ್ಥಾನಮಾನ ನೀಡಬೇಕು. ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್, ಮಹಿಳೆಯರು ರಾಜಕೀಯವಾಗಿ ಸಬಲರಾಗಬೇಕು, ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿಯವರ ಕನಸು ನನಸಾಗಿಸಬೇಕು. ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿಗಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ತೆನ್ನಿರ ಮೈನಾ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಅಂಕಿ ಅಂಶಗಳನ್ನು ನೀಡಿ ವಿಷಾದ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಘೋಷಿತ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು.
ಮಹಿಳಾ ಕಾಂಗ್ರೆಸ್ ಪ್ರಮುಖರಾದ ಮೀನಾಕ್ಷಿ ಕೇಶವ, ಡಿಸಿಸಿ ಉಪಾಧ್ಯಕ್ಷೆ ಫಿಲೋಮಿನ, ಶೈಲಾ ಕುಟ್ಟಪ್ಪ, ನಗರಾಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ, ದೇವಜಾನು, ನಗರಸಭಾ ಮಾಜಿ ಅಧ್ಯಕ್ಷೆ ಜುಲೇಕಾಬಿ, ಮಾಜಿ ಸದಸ್ಯ ಪ್ರಕಾಶ್ ಆಚಾರ್ಯ, ಪ್ರೇಮಾ ಲಿಂಗಪ್ಪ, ಹೆಚ್.ಕೆ.ಪ್ರೇಮಾ, ಟೀನಾ, ಡಿಸಿಸಿ ಸದಸ್ಯರಾದ ಉದಯ್ ಕುಮಾರ್, ಟಿ.ಹೆಚ್.ಪುಷ್ಪ ಪೂಣಚ್ಚ, ಬೊಳ್ಳಿಯಂಡ ಗಣೇಶ್, ಧನಲಕ್ಮಿ, ರಾಣಿ ಮತ್ತಿತರ ಪ್ರಮುಖರು ಹಾಗೂ ಕಾರ್ಯಕರ್ತರು ಹಾಜರಿದ್ದರು. ಮಹಿಳಾ ಪ್ರಧಾನ ಕಾರ್ಯದರ್ಶಿ ಮೀನಾಜ್ ಪ್ರವೀಣ್ ಸ್ವಾಗತಿಸಿ, ತೋರೆರ ಪೊನ್ನಕ್ಕಿ ನಿರೂಪಿಸಿ, ವಂದಿಸಿದರು.
ಕಾರ್ಯಕ್ರಮಕ್ಕೂ ಮೊದಲು ಮಹಿಳಾ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಮಹಿಳಾ ಕಾಂಗ್ರೆಸ್ ಧ್ವಜಾರೋಹಣ ನೆರವೇರಿಸಲಾಯಿತು.










