ಮಡಿಕೇರಿ ಸೆ.18 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯುಷ್ಮಾನ್ ಭವ ಕಾರ್ಯಕ್ರಮದ ಪ್ರಯುಕ್ತ ಸೆ.19 ರಂದು ಬೆಳಗ್ಗೆ 10 ಗಂಟೆಗೆ ಸಮುದಾಯ ಆರೋಗ್ಯ ಕೇಂದ್ರ ಮಟ್ಟದಲ್ಲಿ ತಜ್ಞ ವೈದ್ಯರಿಂದ ಮಡಿಕೇರಿ ತಾಲ್ಲೂಕಿನ ನಾಪೋಕ್ಲು, ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟ ಹಾಗೂ ಕುಶಾಲನಗರ ತಾಲ್ಲೂಕಿನ ಕುಶಾಲನಗರದಲ್ಲಿ ಆರೋಗ್ಯ ಮೇಳ ನಡೆಯಲಿದೆ.
ಈ ಆರೋಗ್ಯ ಮೇಳದಲ್ಲಿ ತಜ್ಞ ವೈದ್ಯರಿಂದ ಸ್ತ್ರೀರೋಗ ಮತ್ತು ಪ್ರಸೂತಿ ಸೇವೆಗಳು, ಮಕ್ಕಳ ಸೇವೆಗಳು, ಕಣ್ಣು, ಕಿವಿ, ಮೂಗು, ಗಂಟಲು ತಪಾಸಣೆ, ಮಾನಸಿಕ ತಜ್ಞರ ಸೇವೆಗಳು ಹಾಗೂ ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನಾರೋಗ್ಯ ಆರೋಗ್ಯ ಕರ್ನಾಟಕ ಯೋಜನೆ ಕಾರ್ಡ್ ನೋಂದಣಿ, ಕಫಸಂಗ್ರಹಣೆ, ಅಸಾಂಕ್ರಾಮಿಕ ರೋಗಗಳ ತಪಾಸಣೆ, ಐಸಿಟಿಸಿ ಸಮಾಲೋಚನೆ ಹಾಗೂ ಇತರೆ ಆರೋಗ್ಯ ಸೇವೆಗಳನ್ನು ಉಚಿತವಾಗಿ ನೀಡಲಾಗುತ್ತದೆ.
ಅಲ್ಲದೇ ಜಿಲ್ಲೆಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳು-ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು, ಉಪ ಕೇಂದ್ರಗಳು-ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ತಾಯಿ ಮತ್ತು ಮಕ್ಕಳ ಆರೋಗ್ಯ ಸೇವೆಗಳು, ಪೌಷ್ಟಿಕತೆ ಮತ್ತು ರೋಗಿಗಳ ಹಿತರಕ್ಷಣಾ ಸೇವೆಗಳು, ಅಸಾಂಕ್ರಾಮಿಕ ರೋಗಗಳ ತಪಾಸಣೆ, ಕಫಸಂಗ್ರಹಣೆ ಸೇವೆಗಳು, ಚಿಕಿತ್ಸೆ ಮತ್ತು ಸಲಹೆಗಳು ಉಚಿತವಾಗಿ ದೊರೆಯುತ್ತವೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ತಿಳಿಸಿದ್ದಾರೆ.












