ಮಡಿಕೇರಿ ಸೆ.25 : ಜನತಾ ದರ್ಶನದ ಮೂಲಕ ಜನರ ಬಳಿಗೆ ಸರ್ಕಾರವನ್ನು ಕೊಂಡೊಯ್ಯುವಲ್ಲಿ ಕೊಡಗು ಜಿಲ್ಲೆಯ ನಾಪೋಕ್ಲು ಗ್ರಾಮದಲ್ಲಿ ಸೋಮವಾರ ಏರ್ಪಡಿಸಿದ್ದ ವಿನೂತನ ಪ್ರಯತ್ನಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಚಾಲನೆ ನೀಡಿದರು.
ಸರ್ಕಾರದ ಗ್ಯಾರಂಟಿ ಯೋಜನೆಗಳ ಜೊತೆಗೆ ವಿವಿಧ ಇಲಾಖೆಗಳ ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಮಳಿಗೆಯನ್ನು ಸಚಿವರು ಮತ್ತು ಶಾಸಕರು ವೀಕ್ಷಿಸಿದರು.
ಜನತಾ ದರ್ಶನ ಕಾರ್ಯಕ್ರಮದ ಸಂದರ್ಭದಲ್ಲಿ ಸುಮಾರು 170 ಕ್ಕೂ ಹೆಚ್ಚು ಅರ್ಜಿಗಳು ಸಾರ್ವಜನಿಕರಿಂದ ಸಲ್ಲಿಕೆಯಾಗಿದ್ದು, ಕೆಲವು ಅರ್ಜಿಗಳಿಗೆ ಸ್ಥಳದಲ್ಲಿಯೇ ಜಿಲ್ಲಾ ಉಸ್ತುವಾರಿ ಸಚಿವರು ಪರಿಹರಿಸಿದರು.
ಜನತಾ ದರ್ಶನ ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಜನರ ಬಳಿಗೆ ಸರ್ಕಾರದ ಆಡಳಿತ ಖುದ್ದು ಭೇಟಿ ಮಾಡಿ, ಗ್ರಾಮೀಣ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಬೇಕು ಎಂಬ ಉದ್ದೇಶದಿಂದ ಜನತಾ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಅವರು ಎಲ್ಲಾ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳುವಂತೆ ಸೂಚಿಸಿದ್ದಾರೆ. ಅದರಂತೆ ಕೊಡಗು ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಜಿಲ್ಲೆಯ ಹಲವು ಸಮಸ್ಯೆಗಳಿಗೆ ಸಂಬಂಧಿಸಿದಂತೆ ಬೆಂಗಳೂರಿಗೆ ಅಥವಾ ಜಿಲ್ಲಾ ಕೇಂದ್ರಕ್ಕೂ ತೆರಳಲು ಸಾಧ್ಯವಿಲ್ಲ. ಆ ನಿಟ್ಟಿನಲ್ಲಿ ಪ್ರತೀ ತಿಂಗಳು ಜಿಲ್ಲಾ ಮಟ್ಟದಲ್ಲಿ ಜನತಾ ದರ್ಶನ ಹಮ್ಮಿಕೊಳ್ಳಲಾಗುತ್ತದೆ. ಈ ಅವಕಾಶವನ್ನು ಬಳಸಿಕೊಂಡು ಕಾಲಮಿತಿಯೊಳಗೆ ಸಮಸ್ಯೆಗಳನ್ನು ಇತ್ಯರ್ಥಪಡಿಸಿಕೊಳ್ಳುವಂತಾಗಬೇಕು ಎಂದರು.
ಪ್ರತೀ ತಿಂಗಳು ಜಿಲ್ಲಾಡಳಿತ ನೇತೃತ್ವದಲ್ಲಿ ಜನತಾ ದರ್ಶನ ನಡೆಯಲಿದ್ದು, ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸಬೇಕು. ಬೇರೆ ಜಿಲ್ಲೆಗಳಲ್ಲಿ ಹೋಲಿಸಿದರೆ ಕೊಡಗು ಜಿಲ್ಲೆಯಲ್ಲಿ ಕಡಿಮೆ ಅರ್ಜಿಗಳು ಸಲ್ಲಿಕೆಯಾಗಿದೆ. ಏನೇ ಬರಲಿ ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲಾಗುವುದು. ಕಂದಾಯ, ಅರಣ್ಯ, ವಿದ್ಯುತ್, ಇತರೆ ಇಲಾಖೆಗಳ ಸಮಸ್ಯೆಗಳು ಇರುತ್ತವೆ. ಇದನ್ನು ಬಗೆಹರಿಸಲಾಗುವುದು ಎಂದರು.
ಸರ್ಕಾರದ 5 ಗ್ಯಾರಂಟಿಗಳಲ್ಲಿ ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದೆ. ಕೊಡಗು ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ 55 ಲಕ್ಷ ಮಹಿಳೆಯರು ಬಸ್‌ನಲ್ಲಿ ಸಂಚರಿಸಿದ್ದಾರೆ. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ 6.65 ಕೋಟಿ ರೂ. ಭರಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 1.14 ಲಕ್ಷ ಮಹಿಳೆಯರಿಗೆ 2 ಸಾವಿರ ರೂ. ರಂತೆ ಹಣ ಪಾವತಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ 1 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ 5 ಕೆ.ಜಿ. ಅಕ್ಕಿ ಜೊತೆಗೆ 5 ಕೆ.ಜಿ. ಅಕ್ಕಿಯ ಹಣ ಭರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ 10 ಕೆ.ಜಿ.ಅಕ್ಕಿ ವಿತರಿಸಲಾಗುವುದು ಎಂದು ಸಚಿವರು ಹೇಳಿದರು.
ಯಾವುದೇ ಮಧ್ಯವರ್ತಿಗಳಿಲ್ಲದೆ ಗ್ಯಾರಂಟಿ ಯೋಜನೆಗಳನ್ನು ಬಡವರಿಗೆ ತಲುಪಿಸಲಾಗುತ್ತಿದೆ. ಈ ಯೋಜನೆಗಳು ಸರ್ಕಾರದ ಮಹತ್ವಾಂಕಾಕ್ಷೆಯಾಗಿದೆ ಎಂದರು.
ಸಾರ್ವಜನಿಕರೊಬ್ಬರು ಮಾತನಾಡಿ ನಾಪೋಕ್ಲು ಭಾಗದಲ್ಲಿ ವಿದ್ಯುತ್ ಪರಿವರ್ತಕ ನಿರ್ಮಾಣ ಮಾಡಬೇಕು. ಕ್ರೀಡಾಪಟುಗಳಿಗೆ ಹಾಕಿ ಮೈದಾನ ನಿರ್ಮಿಸಬೇಕು. ಬಸ್ ನಿಲ್ದಾಣಕ್ಕೆ ಜಾಗ ಒದಗಿಸಲಾಗಿದ್ದು, ಗ್ರಾ.ಪಂ.ಗೆ ಜಾಗ ಹಸ್ತಾಂತರಿಸಬೇಕು. ಜೊತೆಗೆ ನಾಪೋಕ್ಲು ಗ್ರಾ.ಪಂ.ಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಬೇಕು ಎಂದು ಮನವಿ ಮಾಡಿದರು.
ಕಾರ್ಮಿಕ ಇಲಾಖೆ ವತಿಯಿಂದ ಸುಮಾರು 28 ಫಲಾನುಭವಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು. ಕಾನೂನು ಪದವೀಧರರಿಗೆ ಪ್ರೋತ್ಸಾಹಧನ ವಿತರಿಸಲಾಯಿತು. ಕಂದಾಯ ಇಲಾಖೆಯಿಂದ ಹಕ್ಕುಪತ್ರ ವಿತರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಯಿತು.
ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಸರ್ಕಾರ ನುಡಿದಂತೆ ನಡೆಯುತ್ತಿದೆ. 100 ದಿನದಲ್ಲಿ ನಾಲ್ಕು ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಬಡವರ, ಶೋಷಿತರ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಲಾಗಿದೆ. ಆ ನಿಟ್ಟಿನಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಪ್ರತೀ ತಿಂಗಳು ತಾಲ್ಲೂಕು ಮಟ್ಟದಲ್ಲಿ ಜನತಾ ದರ್ಶನ ನಡೆಯಲಿದ್ದು, ಗ್ರಾಮ ಮಟ್ಟದಲ್ಲಿಯ ಸಮಸ್ಯೆಗಳನ್ನು ಜನತಾ ದರ್ಶನದ ಮೂಲಕ ಪರಿಹರಿಸಕೊಳ್ಳಬಹುದಾಗಿದೆ ಎಂದರು.
ನಾಪೋಕ್ಲು ಭಾಗದಲ್ಲಿ ಮಳೆಗಾಲದ ಸಂದರ್ಭದಲ್ಲಿ ಸಂಪರ್ಕ ಕಳೆದುಕೊಳ್ಳುವ ರಸ್ತೆಯನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಅನುಮೋದನೆ ದೊರೆತಿದೆ. ಸದ್ಯದಲ್ಲೇ ಕಾಮಗಾರಿ ಆರಂಭಿಸಲಾಗುವುದು ಎಂದರು.
ಜನರ ಜೀವನ ಮಟ್ಟವನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನಿಸುತ್ತಿದೆ. ಕಾಡಾನೆಗಳು ನಾಡಿಗೆ ಬರುತ್ತಿದ್ದು, ಇವುಗಳನ್ನು ತಡೆಯಬೇಕಿದೆ. ಜನರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಜನತಾ ದರ್ಶನ ಮೊದಲ ಹೆಜ್ಜೆಯಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಅವರು ಮಾತನಾಡಿ ಜಿಲ್ಲೆಯಲ್ಲಿ ಅಕ್ರಮ ಸಕ್ರಮ ಯೋಜನೆಯಡಿ ಭೂಮಿ ಒದಗಿಸುವುದು, ಕಾಡಾನೆ ಹಾವಳಿ ನಿಯಂತ್ರಣ ಮಾಡುವುದು, ಕಾವೇರಿ ನದಿ ಪಾತ್ರದಲ್ಲಿ ತ್ಯಾಜ್ಯ ವಿಲೇವಾರಿ ಸಂಬಂಧ ಶಾಶ್ವತ ಪರಿಹಾರ ಕಂಡುಕೊಳ್ಳುವುದು ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಸರ್ಕಾರದ ಹಂತದಲ್ಲಿ ಪರಿಹರಿಸುವಲ್ಲಿ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ಹೇಳಿದರು.
ವಿವಿಧ ಇಲಾಖೆಗಳಿಂದ ಸರ್ಕಾರದ ಯೋಜನೆಗಳ ಸಂಬಂಧ ಏರ್ಪಡಿಸಲಾಗಿದ್ದ ವಸ್ತುಪ್ರದರ್ಶನ ಮಳಿಗೆ ಉತ್ತಮ ಮಾಹಿತಿ ಒಳಗೊಂಡು ಸಾರ್ವಜನಿಕರ ಗಮನ ಸೆಳೆಯಿತು.
ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ್, ತಹಶೀಲ್ದಾರರು, ವಿವಿಧ ಇಲಾಖೆ ಅಧಿಕಾರಿಗಳು ಇತರರು ಇದ್ದರು.










