ಮಡಿಕೇರಿ ಸೆ.26 : ಕೊಡಗು ಜಿಲ್ಲಾ ಮಟ್ಟದ ಅಂತರ ಪ್ರಾಥಮಿಕ ಶಾಲಾ 14 ವಯೋಮಿತಿಯ ಬಾಲಕರ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ನಗರದ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾವಳಿಯಲ್ಲಿ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಸೋಮವಾರಪೇಟೆ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿ, ಫೈನಲ್ ಪಂದ್ಯದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡರು.
ವಿದ್ಯಾರ್ಥಿಗಳಾದ ಜಿ.ಎಸ್.ಶಿಶಿರ ಮತ್ತು ಎಮ್.ಎಸ್.ಗಗನ್ ಮುಂದೆ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಬಿ.ಎಲ್.ಸಂದೇಶ್ ತರಬೇತಿ ನೀಡಿದ್ದಾರೆ. ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಎಸ್.ಡಿ.ಎಂಸಿ ಅಧ್ಯಕ್ಷರು ಮತ್ತು ಸದಸ್ಯರುಗಳು ಅಭಿನಂದನೆ ಸಲ್ಲಿಸಿದರು.









