ಮಡಿಕೇರಿ ಸೆ.28 : ಸೋಮವಾರಪೇಟೆ ಪಟ್ಟಣದಲ್ಲಿ ಸುಮಾರು 1.75 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ಕಾಮಗಾರಿ 10 ವರ್ಷ ಕಳೆದರೂ ಪೂರ್ಣಗೊಂಡಿಲ್ಲವೆಂದು ಕೊಡಗು ಜಿಲ್ಲಾ ದಲಿತ ಹಿತರಕ್ಷಣಾ ಒಕ್ಕೂಟ ಬೇಸರ ವ್ಯಕ್ತಪಡಿಸಿದೆ.
ಒಕ್ಕೂಟದ ಪ್ರಮುಖರು ಸೋಮವಾರಪೇಟೆ ತಾಲ್ಲೂಕು ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ ಅಂಬೇಡ್ಕರ್ ಭವನದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಹಸ್ತಾಂತರಿಸುವಂತೆ ಒತ್ತಾಯಿಸಿದರು.
ದಲಿತ ಹಿತರಕ್ಷಣಾ ಒಕ್ಕೂಟದ ಪರಿಶ್ರಮ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಹಕಾರದಿಂದ ಭವನದ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಆದರೆ 10 ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಕುಡಿಯುವ ನೀರು ಮತ್ತು ಶೌಚಾಲಯದ ವ್ಯವಸ್ಥೆ ಸಮರ್ಪಕವಾಗಿ ಆಗಿಲ್ಲ. ಕಟ್ಟಡಕ್ಕೆ ಸುಣ್ಣಬಣ್ಣ ಬಳಿದಿಲ್ಲ, ಅಧಿಕೃತವಾಗಿ ಉದ್ಘಾಟನೆಗೊಂಡಿಲ್ಲ. ಇಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ಅವಧಿ ಮುಗಿದಿದ್ದರೂ ಸ್ಥಳಾಂತರಿಸಿಲ್ಲ ಎಂದು ಪದಾಧಿಕಾರಿಗಳು ಆರೋಪಿಸಿದರು.
ತಕ್ಷಣ ಕಾಮಗಾರಿ ಪೂರ್ಣಗೊಳಿಸಿ ಭವನವನ್ನು ಅಧಿಕೃತವಾಗಿ ನಮಗೆ ಹಸ್ತಾಂತರಿಸಬೇಕು ಎಂದು ಒತ್ತಾಯಿಸಿದರು.
ಒಕ್ಕೂಟದ ಅಧ್ಯಕ್ಷ ಡಿ.ಎಸ್.ನಿರ್ವಾಣಪ್ಪ, ಗೌರವಾಧ್ಯಕ್ಷ ಜಯಪ್ಪ ಹಾನಗಲ್ಲು, ಉಪಾಧ್ಯಕ್ಷರಾದ ಹೆಚ್.ಎಂ.ಸೋಮಪ್ಪ, ಎಂ.ಪಿ.ಹೊನ್ನಪ್ಪ ಹಾಗೂ ಪ್ರಧಾನ ಕಾರ್ಯದರ್ಶಿ ಹೆಚ್.ಎ.ನಾಗರಾಜು ಮನವಿ ಸಲ್ಲಿಸುವ ಸಂದರ್ಭ ಹಾಜರಿದ್ದರು.










