ಮಡಿಕೇರಿ ಸೆ.30 : ಕೊಡಗು ಜಿಲ್ಲೆಯಲ್ಲಿ ಮಳೆಯ ಕಣ್ಣಾಮುಚ್ಚಾಲೆ ಮುಂದುವರೆದಿದೆ. ಒಂದು ತಿಂಗಳಿನಿಂದ ಮಳೆಯ ಕೊರತೆಯನ್ನು ಎದುರಿಸಿದ್ದ ಕಾವೇರಿನಾಡು ಕೊಡಗಿನಲ್ಲಿ ಕಳೆದ ಮೂರು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ.
ರಾಜ್ಯದ ನದಿಮೂಲದಲ್ಲಿ ನೀರಿನ ಹರಿವು ಕಡಿಮೆಯಾಗಿ ಕಾವೇರಿ ವಿವಾದ ತಾರಕಕ್ಕೇರಿರುವ ಬೆನ್ನಲ್ಲೇ ಕಾವೇರಿ ತವರು ಕೊಡಗಿನಲ್ಲಿ ಮಳೆಯಾಗುತ್ತಿದ್ದು, ಆಡಳಿತ ವ್ಯವಸ್ಥೆ ಮತ್ತು ರೈತಾಪಿ ವರ್ಗ ಕೊಂಚ ನೆಮ್ಮದಿಯ ನಿಟ್ಟುಸಿರು ಬಿಡುವಂತ್ತಾಗಿದೆ. ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ.
ಕಾವೇರಿಯ ಉಗಮ ಸ್ಥಾನ ತಲಕಾವೇರಿ ಮತ್ತು ಭಾಗಮಂಡಲ ಕ್ಷೇತ್ರದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಎರಡು ಇಂಚು ಮಳೆ ದಾಖಲಾಗಿದೆ. ಮಡಿಕೇರಿ ಭಾಗದಲ್ಲೂ ನಿರಂತರವಾಗಿ ಮಳೆಯಾಗುತ್ತಿದ್ದು, ಚಳಿ ಮತ್ತು ಮಂಜು ಮುಸುಕಿದ ವಾತಾವರಣವಿದೆ. ಅಕಾಲಿಕ ಮಳೆ ಕಾಫಿ ಬೆಳೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ.
ಜನವರಿಯಿಂದ ಇಲ್ಲಿಯವರೆಗಿನ ಮಳೆ 1964.96 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3159.45 ಮಿ.ಮೀ ಮಳೆಯಾಗಿತ್ತು. ಈ ಬಾರಿ ಕೊಡಗಿನಲ್ಲಿ ಸುಮಾರು 1200 ಮಿ.ಮೀ ಮಳೆ ಕೊರತೆ ಉಂಟಾಗಿದೆ.
::: ಮಳೆ ವಿವರ :::
ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 15.70 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.10 ಮಿ.ಮೀ. ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 25.15 ಮಿ.ಮೀ. ಕಳೆದ ವರ್ಷ ಇದೇ ದಿನ 0.30 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2898.16 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 4583.93 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 16.04 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1523.96 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2449.98 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 5.90 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1472.76 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2444.45 ಮಿ.ಮೀ. ಮಳೆಯಾಗಿತ್ತು.
::: ಹೋಬಳಿವಾರು ಮಳೆ :::
ಮಡಿಕೇರಿ ಕಸಬಾ 18.60, ನಾಪೋಕ್ಲು 20, ಸಂಪಾಜೆ 20, ಭಾಗಮಂಡಲ 42, ವಿರಾಜಪೇಟೆ ಕಸಬಾ 24.60, ಹುದಿಕೇರಿ 10.40, ಶ್ರೀಮಂಗಲ 6.20, ಪೊನ್ನಂಪೇಟೆ 12.02, ಅಮ್ಮತ್ತಿ 28, ಬಾಳೆಲೆ 15, ಸೋಮವಾರಪೇಟೆ ಕಸಬಾ 9.40, ಶನಿವಾರಸಂತೆ 4.40, ಶಾಂತಳ್ಳಿ 12, ಕೊಡ್ಲಿಪೇಟೆ 6.40, ಸುಂಟಿಕೊಪ್ಪ 3.20 ಮಿ.ಮೀ.ಮಳೆಯಾಗಿದೆ.
::: ಹಾರಂಗಿ ಜಲಾಶಯದ ನೀರಿನ ಮಟ್ಟ :::
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2854.02 ಅಡಿಗಳು. ಕಳೆದ ವರ್ಷ ಇದೇ ದಿನ 2856.25 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 2.40 ಮಿ.ಮೀ., ಇಂದಿನ ನೀರಿನ ಒಳಹರಿವು 1794 ಕ್ಯುಸೆಕ್, ಕಳೆದ ವರ್ಷ ಇದೇ ದಿನ 362 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 1000 ಕ್ಯುಸೆಕ್. ನಾಲೆಗೆ 1200 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 650 ಕ್ಯುಸೆಕ್. ನಾಲೆಗೆ 933 ಕ್ಯುಸೆಕ್.








