ಮಡಿಕೇರಿ ಅ.2 : ಮಹಾತ್ಮ ಗಾಂಧೀಜಿ ಅವರು ವಿಶ್ವದಲ್ಲಿ ನಿರಂತರ ಶಾಂತಿಗಾಗಿ ಶ್ರಮಿಸಿದರು. ಗಾಂಧೀಜಿ ಅವರು ಸತ್ಯ ದರ್ಶನದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಗಾಂಧೀಜಿಯವರ ಬದುಕಿನ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು, ಅವರ ತ್ಯಾಗ ಅಪಾರ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ವತಿಯಿಂದ ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ ಇಲಾಖೆಗಳ ಹಾಗೂ ಸರ್ವೋದಯ ಸಮಿತಿ, ಸ್ಕೌಟ್ಸ್ ಮತ್ತು ಗೈಡ್ಸ್ ಇವರ ಸಹಕಾರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 154 ನೇ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 119 ನೇ ಜನ್ಮ ದಿನಾಚರಣೆ ಪ್ರಯುಕ್ತ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಹಾತ್ಮ ಗಾಂಧೀಜಿ ಅವರ ತ್ಯಾಗವನ್ನು ಯಾರೂ ಮರೆಯುವಂತಿಲ್ಲ. ಮಹಾತ್ಮ ಗಾಂಧೀಜಿ ಅವರ ಜೀವನ ಕುರಿತು ಎಷ್ಟು ಬಾರಿ ಓದಿದರೂ ಗಾಂಧೀಜಿ ಅವರು ಪ್ರತಿಪಾದಿಸಿದ ಜೀವನ ಮೌಲ್ಯ ಸತ್ಯ, ಅಹಿಂಸೆ ಹಾಗೂ ಆತ್ಮಬಲದ ಕುರಿತು ಪ್ರತಿಯೊಬ್ಬರೂ ತಿಳಿಯಬೇಕಿರುವುದು ಬಹಳಷ್ಟು ಇದೆ ಎಂದರು.
ಮಹಾತ್ಮ ಗಾಂಧೀಜಿ ಅವರು ‘ನನ್ನ ಜೀವನವೇ, ನನ್ನ ಸಂದೇಶ’ ಎಂಬುದನ್ನು ಸಾರಿದರು. ಮಹಾತ್ಮ ಗಾಂಧೀಜಿಯವರ ಸರಳ ಮತ್ತು ಶಾಂತಿಯುತ ಜೀವನವನ್ನು ನಾವೆಲ್ಲರೂ ಅನುಸರಿಸುವಂತಾಗಬೇಕು. ಮಹಾತ್ಮ ಗಾಂಧೀಜಿ ಅವರು ನಡೆದು ಬಂದ ಹಾದಿಯಲ್ಲಿ ಮುನ್ನಡೆಯಬೇಕು ಎಂದರು.
ಬಾಪೂಜಿ ಎಂದೇ ಪ್ರಖ್ಯಾತರಾದ ಮಹಾತ್ಮ ಗಾಂಧೀಜಿ ಅವರು ಸತ್ಯಾಗ್ರಹ ಹಾಗೂ ಅಹಿಂಸೆ ಎಂಬ ಅಸ್ತ್ರಗಳಿಂದ ಸ್ವಾತಂತ್ರ್ಯವನ್ನು ತಂದುಕೊಟ್ಟರು ಎಂದರು.
ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಪ್ರಧಾನಿಯಾಗಿ ರಾಷ್ಟ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ‘ಜೈಜವಾನ್ ಜೈಕಿಸಾನ್’ ಎಂಬ ಸಂದೇಶ ಸಾರುವ ಮೂಲಕ ರಾಷ್ಟ್ರದಲ್ಲಿ ಸೇನೆ ಹಾಗೂ ಕೃಷಿಯ ಮಹತ್ವದ ಬಗ್ಗೆ ವರ್ಣಿಸಿದ್ದಾರೆ ಎಂದು ಡಾ.ಮಂತರ್ ಗೌಡ ಅವರು ಹೇಳಿದರು.
ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರು ಮಾತನಾಡಿ ಗಾಂಧೀಜಿ ಅವರ ತತ್ವಗಳು ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಆ ದಿಸೆಯಲ್ಲಿ ಮಹಾತ್ಮ ಗಾಂಧೀಜಿ ಅವರ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು. ಸತ್ಯ, ಅಹಿಂಸೆ ಮತ್ತು ಶಾಂತಿ ಮಾರ್ಗದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಸತ್ಯ ಶೋಧನೆಯಿಂದ ಮಾತ್ರ ಗುರಿ ತಲುಪಲು ಸಾಧ್ಯ ಎಂಬುದನ್ನು ಸಾರಿ ಹೇಳಿದ್ದರು ಎಂದರು.
ಸತ್ಯ, ಅಹಿಂಸೆ, ಶಾಂತಿ, ಶಿಸ್ತನ್ನು ಒಳಗೊಂಡಿದ್ದ ಗಾಂಧೀಜಿ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ತಿಳಿದುಕೊಂಡು ಮುನ್ನಡೆಯಬೇಕು ಎಂದು ನಗರಸಭೆ ಅಧ್ಯಕ್ಷರು ಪ್ರತಿಪಾದಿಸಿದರು.
ಸರ್ವೋದಯ ಸಮಿತಿ ನಿಕಟಪೂರ್ವ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಮಾತನಾಡಿ ಭಾರತಕ್ಕೆ ಅಹಿಂಸಾ ಮಾರ್ಗದ ಮೂಲಕ ಸ್ವಾತಂತ್ರ್ಯವನ್ನು ತಂದುಕೊಟ್ಟ ಮಹಾತ್ಮ ಗಾಂಧೀಜಿ ಅವರು ಇಡೀ ವಿಶ್ವಕ್ಕೆ ಶಾಂತಿಯನ್ನು ಸ್ಥಾಪಿಸಿದ್ದರು ಎಂದು ಅವರು ನುಡಿದರು.
ಮಹಾತ್ಮ ಗಾಂಧೀಜಿ ಅವರು ಎಲ್ಲರನ್ನೂ ಒಟ್ಟುಗೂಡಿಸಿ ಸ್ವಾತಂತ್ರ್ಯ ಪಡೆಯಲು ಶ್ರಮಿಸಿದರು. ಸ್ವಾತಂತ್ರ್ಯಕ್ಕಾಗಿ ರಾಷ್ಟ್ರದಾದ್ಯಂತ ಸಂಚರಿಸಿ ಜಾಗೃತಿ ಮೂಡಿಸಿದರು ಎಂದರು.
ಗಾಂಧೀಜಿಯವರು ಜಗತ್ತು ಕಂಡ ಒಬ್ಬ ಶ್ರೇಷ್ಠ ಸಮಾಜ ಸುಧಾರಕ, ಸತ್ಯಾಗ್ರಹಿ, ಪತ್ರಕರ್ತರಾಗಿ ಗ್ರಾಮ ಸ್ವರಾಜ್ಯದ ಹರಿಕಾರರಾಗಿ ವಿವಿಧ ಕ್ಷೇತ್ರಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಟಿ.ಪಿ.ರಮೇಶ್ ಅವರು ವಿವರಿಸಿದರು.
ಜಗತ್ತಿನಲ್ಲೇ ವಿಶ್ವಸಂಸ್ಥೆಯಿಂದ ಗಾಂಧಿ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ವಿಶ್ವ ಸಂಸ್ಥೆಯು ಗಾಂಧೀಜಿ ಜನ್ಮ ದಿನವನ್ನು ವಿಶ್ವ ಅಹಿಂಸಾ ದಿನವನ್ನಾಗಿ ಘೋಷಿಸಿದೆ ಎಂದು ಹೇಳಿದರು.
ಲಾಲ್ ಬಹದ್ದೂರು ಶಾಸ್ತ್ರಿ ಅವರು ಭಾರತದ ಎರಡನೇ ಪ್ರಧಾನ ಮಂತ್ರಿಯಾಗಿ ಸರಳ, ಸಜ್ಜನಿಕೆಗೆ ಹೆಸರು ವಾಸಿಯಾಗಿದ್ದರು. ಸೇನೆ ಮತ್ತು ಕೃಷಿಗೆ ಹೆಚ್ಚಿನ ಮಹಾತ್ವಾಕಾಂಕ್ಷೆ ನೀಡಿದ್ದರು ಎಂದು ಹೇಳಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಮಾತನಾಡಿ ಗಾಂಧೀಜಿಯವರ ಜೀವನ ಚರಿತ್ರೆಗಳನ್ನು ಓದಿಕೊಂಡಾಗ ಸತ್ಯ, ಅಹಿಂಸೆ ಮತ್ತು ಸರಳತೆಯ ಬದುಕು ಕಾಣಬಹುದು ಎಂದರು.
‘ಗಾಂಧೀಜಿಯವರ ಏಳು ತತ್ವಗಳಾದ ತತ್ವ ರಹಿತ ರಾಜಕೀಯ, ದುಡಿಮೆ ಇಲ್ಲದ ಸಂಪತ್ತು, ಆತ್ಮಸಾಕ್ಷಿ ಇಲ್ಲದ ಸಂತೋಷ ಚಾರಿತ್ರ್ಯವಿಲ್ಲದ ಶಿಕ್ಷಣ, ನೀತಿ ಇಲ್ಲದ ವ್ಯವಹಾರ, ಮಾನವೀಯತೆ ಇಲ್ಲದ ಜ್ಞಾನ ಮತ್ತು ತ್ಯಾಗವಿಲ್ಲದ ಪೂಜೆ ಎಂಬುದನ್ನು ಸಾರಿದ್ದಾರೆ ಇವುಗಳನ್ನು ಅಧ್ಯಯನ ಮಾಡಬೇಕು ಎಂದು ವರ್ಣಿತ್ ನೇಗಿ ಹೇಳಿದರು.’
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಮಾತನಾಡಿ ಅಹಿಂಸಾ ಮಾರ್ಗದಿಂದ ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯವನ್ನು ತಂದು ಕೊಟ್ಟರು. ಮಹಾತ್ಮ ಗಾಂಧೀಜಿಯವರು ಅನುಸರಿಸಿದ ಸರಳ ಸಜ್ಜನಿಕೆಯ ವ್ಯಕ್ತಿತ್ವ ಮಹಾತ್ಮರನ್ನಾಗಿ ಮಾಡಿತು ಎಂದು ನುಡಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿಮ್ಯಾಥ್ಯೂ ಅವರು ಮಾತನಾಡಿ ಮಹಾತ್ಮ ಗಾಂಧೀಜಿಯವರು ಪರಿಸರದ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಿದ್ದರು ಎಂದು ತಿಳಿಸಿದರು.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 154 ನೇ ಜಯಂತಿ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ‘ಬಾಪೂಜಿ ಪ್ರಬಂಧ ಸ್ಪರ್ಧೆ’ಯಲ್ಲಿ ವಿಜೇತರಾದವರಿಗೆ ಪ್ರಥಮ ರೂ.3,000, ದ್ವಿತೀಯ ರೂ.2,000 ಹಾಗೂ ತೃತೀಯ ರೂ.1000 ನಗದು ಬಹುಮಾನ ಮತ್ತು ಪ್ರಮಾಣ ಪತ್ರ ನೀಡಲಾಯಿತು.
ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ರಾಣಿ ಮಾಚಯ್ಯ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ್, ತಹಶೀಲ್ದಾರ್ ಪ್ರವೀಣ್ ಕುಮಾರ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸತೀಶ್, ನಗರಸಭೆ ಸದಸ್ಯರಾದ ರಾಜೇಶ್ ಯಲ್ಲಪ್ಪ, ಮಡಿಕೇರಿ ನಗರ ದಸರಾ ಸಮಿತಿ ಕಾರ್ಯಾಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಕಸಾಪ ಗೌರವ ಕಾರ್ಯದರ್ಶಿ ಮುನಿರ್ ಅಹಮದ್, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್, ನಗರಸಭೆ ಪೌರಾಯುಕ್ತರಾದ ವಿಜಯ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕರಾದ ಸೌಮ್ಯ ಪೊನ್ನಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ಕಾಲೇಜು ಶಿಕ್ಷಣ ಇಲಾಖೆಯ ನೋಡಲ್ ಅಧಿಕಾರಿ ವೆಂಕಟೇಶ್ ಪ್ರಸನ್ನ, ಉಪನ್ಯಾಸಕರಾದ ಉ.ರಾ.ನಾಗೇಶ್, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷರೂ ಆದ ಟಿ.ಜಿ.ಪ್ರೇಮಕುಮಾರ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್ ಇತರರು ಇದ್ದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ ಸ್ವಾಗತಿಸಿದರು, ಉಪನ್ಯಾಸಕರಾದ ಉ.ರಾ.ನಾಗೇಶ್ ನಿರೂಪಿಸಿದರು, ಕನ್ನಡ ಸಾಹಿತ್ಯ ಪರಿಷತ್ ತಂಡದವರು ನಾಡಗೀತೆ ಹಾಡಿದರು, ಲಿಯಾಕತ್ ಆಲಿ ಗಾಂಧೀಜಿಗೆ ಪ್ರಿಯವಾದ ವೈಷ್ಣವೋ ಜಯತೊ ಗೀತೆ ಹಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಣಜೂರು ಮಂಜುನಾಥ್ ವಂದಿಸಿದರು.










