ಮಡಿಕೇರಿ ಅ.2 : ಮಡಿಕೇರಿ ನಗರದ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ತಕ್ಷಣ ಡಾಂಬರೀಕರಣ ಕಾರ್ಯ ಆರಂಭಿಸಬೇಕೆಂದು ಒತ್ತಾಯಿಸಿ ಅ.3 ರಂದು ನಗರಸಭೆ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಮತ್ತು ನಗರಸಭೆಯ ಎದುರು ಮುಖ್ಯ ರಸ್ತೆ ತಡೆ ಪ್ರತಿಭಟನೆ ನಡೆಸಲಾಗುವುದು ಎಂದು ಕೊಡಗು ರಕ್ಷಣಾ ವೇದಿಕೆಯ ಅಧ್ಯಕ್ಷ ಅಚ್ಚಂಡೀರ ಪವನ್ ಪೆಮ್ಮಯ್ಯ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಸ್ತೆ ಸೇರಿದಂತೆ ಮೂಲಭೂತ ಸೌಲಭ್ಯ ನೀಡುವಲ್ಲಿ ನಗರಸಭೆ ಸಂಪೂರ್ಣವಾಗಿ ವಿಫಲವಾಗಿದ್ದು, ನಗರದ ಜನ ಸಂಕಷ್ಟ ಎದುರಿಸುತ್ತಿದ್ದಾರೆ. ಆದ್ದರಿಂದ ಜನಪರವಾಗಿ ನಗರಸಭೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದಾಗಿ ಹೇಳಿದ್ದಾರೆ.
ಆಟೋ ಚಾಲಕರ ಸಂಘ, ಲಾರಿ ಚಾಲಕರ ಸಂಘ, ಖಾಸಗಿ ಬಸ್ ಚಾಲಕರು ಹಾಗೂ ಸಿಬ್ಬಂದಿಗಳ ಸಂಘ, ಟ್ಯಾಕ್ಸಿ ಚಾಲಕರ ಸಂಘ ಸೇರಿದಂತೆ ಸಾರ್ವಜನಿಕರು ಕೂಡ ಬೃಹತ್ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಮೈದಾನದಿಂದ ಮೆರವಣಿಗೆ ಮೂಲಕ ಬಂದು ನಗರಸಭೆಗೆ ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿದ್ದಾರೆ.









