ಮಡಿಕೇರಿ ಅ.3 : ಪೌರಕಾರ್ಮಿಕರಿಗೆ ದೊರಕಬೇಕಾದ ಸೌಲಭ್ಯಗಳನ್ನು ಒದಗಿಸುವಲ್ಲಿ ಮಡಿಕೇರಿ ನಗರಸಭೆಯ ಆಡಳಿತ ಮಂಡಳಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿ, ಪೌರಸೇವಾ ನೌಕರರ ಸಂಘದ ನೇತೃತ್ವದಲ್ಲಿ ಮಡಿಕೇರಿ ನಗರಸಭೆಯ ಪೌರಕಾರ್ಮಿಕರು ಪ್ರತಿಭಟನೆ ನಡೆಸಿದರು.
ನಗರಸಭೆಯ ಕಚೇರಿ ಎದುರು ಘೋಷಣೆಗಳನ್ನು ಕೂಗಿದ ಪೌರ ಕಾರ್ಮಿಕರು ಮೂಲಭೂತ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿದರು.
ಸಂಘದ ಉಪಾಧ್ಯಕ್ಷ ಹೆಚ್.ಎಂ.ಲೋಕೇಶ್ ಮಾತನಾಡಿ ಸರಕಾರದಿಂದ ಪೌರಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳು ನಮಗೆ ಸಿಗುತ್ತಿಲ್ಲ. ವಸತಿ ಮತ್ತು ಆಹಾರ ಸೌಲಭ್ಯದಿಂದ ನಾವು ವಂಚಿತರಾಗಿದ್ದೇವೆ. ಗಾಂಧಿ ಜಯಂತಿಯಂದು ಸರಕಾರಿ ರಜೆ ಇದ್ದರೂ ಪೌರಕಾರ್ಮಿಕರು ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ಆದರೆ ನಗರಸಭೆಯ ಆರೋಗ್ಯಾಧಿಕಾರಿ ಹಾಜರಿ ಪುಸ್ತಕದಲ್ಲಿ ಗೈರು ಹಾಜರೆಂದು ನಮೂದಿಸಿದ್ದಾರೆ. ಇದು ಪೌರಕಾರ್ಮಿಕರಿಗೆ ಅತೀವ ನೋವು ತಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಕಳೆದ ಎರಡು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ. ನಗರಸಭೆಯಿಂದ ಪೌರಕಾರ್ಮಿಕರ ದಿನಾಚರಣೆಯನ್ನು ಆಚರಿಸಲಿಲ್ಲ, ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿದರು.









