ಮಡಿಕೇರಿ ಅ.7 : ಕ್ರೀಡಾಪಟುಗಳು ಸ್ಪರ್ಧಾ ಹಾಗೂ ಕ್ರೀಡಾ ಮನೋಭಾವದಿಂದ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಎ.ಸೌಮ್ಯ ಪೊನ್ನಪ್ಪ ಹೇಳಿದರು.
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಕೊಡಗು ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಕೊಡಗಿನ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟಕ್ಕೆ ಹೋಗುವ ಮೂಲಕ ತಮ್ಮ ಜಿಲ್ಲೆಯ ಕೀರ್ತಿ ಎತ್ತಿಹಿಡಿಯಬೇಕು ಎಂದರು.
ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿರುವ ಕ್ರೀಡಾಪಟುಗಳು ಕ್ರೀಡಾ ಚಟುವಟಿಕೆಗಳಲ್ಲಿ ಸ್ಪೂರ್ತಿದಾಯಕವಾಗಿ ಲವಲವಿಕೆಯಿಂದ ಪಾಲ್ಗೊಂಡಿರುವುದು ತುಂಬ ಸಂತೋಷ ತಂದಿದೆ. ವಿದ್ಯಾರ್ಥಿಗಳನ್ನು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಪೆÇ್ರೀತ್ಸಾಹಿಸಿ, ಪ್ರೇರೆಪಿಸಿದ ದೈಹಿಕ ಶಿಕ್ಷಣ ಶಿಕ್ಷಕರಿಗೂ, ಕ್ರೀಡಾಪಟುಗಳಿಗೂ ಕ್ರೀಡಾಕೂಟ ಆಯೋಜಕರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಮಡಿಕೇರಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ಸಿ.ದೊಡ್ಡೇಗೌಡ ಅವರು ಕ್ರೀಡಾಪಟುಗಳಿಂದ ಪಥಸಂಚಲನದ ಗೌರವ ವಂದನೆ ಸ್ವೀಕರಿಸಿ ಮಾತನಾಡಿ, ಕ್ರೀಡೆ ವಿದ್ಯಾರ್ಥಿಗಳಿಗೆ ಸ್ಪೂರ್ತಿ ಹಾಗೂ ಚೈತನ್ಯವನ್ನು ತುಂಬುತ್ತದೆ. ಎಲ್ಲಾ ಪ್ರವೃತ್ತಿಗಳಲ್ಲೂ ಉತ್ತಮ ಪ್ರವೃತ್ತಿ ಕ್ರೀಡೆಯೇ ಆಗಿದ್ದು ದೈಹಿಕ, ಮಾನಸಿಕ ಹಾಗೂ ಆರೋಗ್ಯ ಪೂರ್ಣತೆಗೆ ಕ್ರೀಡೆ ಸಹಕಾರಿಯಾಗಿದೆ ಎಂದರು.
ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಕ್ರೀಡೆಯನ್ನು ಅಳವಡಿಸಿಕೊಳ್ಳಬೇಕು. ಶಿಕ್ಷಣ ಇಲಾಖೆ ವತಿಯಿಂದ ಪ್ರತಿ ವರ್ಷ ಕ್ರೀಡೆಗೆ ಹೆಚ್ಚಿನ ಪೆÇ್ರೀತ್ಸಾಹ ಸಹಕಾರ ನೀಡುವ ಮೂಲಕ ಕ್ರೀಡಾಕೂಟಗಳನ್ನು ಯಶಸ್ವಿಯಾಗಿ ನಡೆಸಲಾಗುತ್ತಿದೆ ಎಂದರು.
ಕ್ರೀಡಾ ಚಟುವಟಿಕೆ ಯಶಸ್ವಿಯಾಗಲು ದೈಹಿಕ ಶಿಕ್ಷಣದ ಪಾತ್ರ ಮಹತ್ವದಾಗಿದೆ ಎಂದರು. ಮಕ್ಕಳನ್ನು ಪ್ರೋತ್ಸಾಹಿಸಿದ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರಿಗೂ, ಮುಖ್ಯ ಶಿಕ್ಷಕರಿಗೂ ಮತ್ತು ಶಿಕ್ಷಕ ವೃಂದಕ್ಕೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಮಡಿಕೇರಿ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವಯ್ಯ ಎಸ್.ಪಲ್ಲೇದ್ ಕ್ರೀಡಾ ಜ್ಯೋತಿ ಬೆಳಗಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ಮಡಿಕೇರಿ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಶ್ರೀನಿವಾಸ್, ವಿರಾಜಪೇಟೆ ತಾಲ್ಲೂಕು ದೈಹಿಕ ಪರಿವೀಕ್ಷಕಿ ಬಿ.ಆರ್.ಗಾಯಿತ್ರಿ, ಸೋಮವಾರಪೇಟೆ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಎಂ.ಎಲ್.ಸುಕುಮಾರಿ, ಕೊಡಗು ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ಪಿ.ಎ.ಪ್ರವೀಣ್, ಜಿಲ್ಲಾ ಗ್ರೇಡ್2 ಪ್ರಾಥಮಿಕ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ಬಿ.ಟಿ.ಪೂರ್ಣೇಶ್, ಜಿಲ್ಲಾ ಅನುದಾನಿತ ಪ್ರೌಢಶಾಲಾ ಶಿಕ್ಷಕ ನೌಕರರ ಸಂಘದ ಅಧ್ಯಕ್ಷ ಪ್ರಭುಕುಮಾರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್, ಅನುದಾನಿತ ಪ್ರೌಢಶಾಲಾ ಮತ್ತು ಕಾಲೇಜು ನೌಕರರ ಸಂಘ ಮಡಿಕೇರಿ ಅಧ್ಯಕ್ಷ ಕೆ.ಶಿವಪ್ರಸಾದ್,
ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕ ಸಂಘ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಪಿ.ಎಂ.ಕಿರಣ್, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕ ಸಂಘ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಕೆ.ಜಿ.ಅಶೋಕ್, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಬಿ.ಕೆ.ಶಿವಶಂಕರ್ ಇದ್ದರು. ದೈಹಿಕ ಶಿಕ್ಷಣ ಶಿಕ್ಷಕ ಕೆ.ಶಿವಪ್ರಸಾದ್ ಅವರು ದೈಹಿಕ ಶಿಕ್ಷಕರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಕ್ರೀಡಾಪಟು ದೇಚಮ್ಮ ಕ್ರೀಡಾಪಟುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಸದಾಶಿವಯ್ಯ ಎಸ್. ಪಲ್ಲೇದ್ ವಂದಿಸಿದರು. ಶಿಕ್ಷಕಿ ಮಮತಾ ಪ್ರಾರ್ಥಿಸಿದರು. ಮೂರ್ನಾಡು ಜ್ಞಾನ ಜ್ಯೋತಿ ಶಾಲೆಯ ಬ್ಯಾಂಡ್ ವಾದ್ಯದೊಂದಿಗೆ ವಿವಿಧ ತಾಲ್ಲೂಕಿನ ಕ್ರೀಡಾಪಟುಗಳು ಆಕರ್ಷಕ ಪಥ ಸಂಚಲನ ನಡೆಸಿದರು. ಇದೇ ಸಂದರ್ಭ ಮಡಿಕೇರಿ ತಾಲ್ಲೂಕು ಕ್ರೀಡಾಕೂಟವನ್ನು ಯಶಸ್ವಿಯಾಗಿ ಸಂಘಟಿಸಿದ ದೈಹಿಕ ಶಿಕ್ಷಣ ಶಿಕ್ಷಕ ಸಿ.ಕೆ.ತಿಮ್ಮಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.







