ಮಡಿಕೇರಿ ಅ.9 : ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವೈದ್ಯಕೀಯ ಶಿಕ್ಷಣ, ಸಾರ್ವಜನಿಕ ಶಿಕ್ಷಣ, ಲೋಕೋಪಯೋಗಿ ಹೀಗೆ ವಿವಿಧ ಇಲಾಖೆಗಳಲ್ಲಿ ಪರಿಶಿಷ್ಟರಿಗೆ ಮೀಸಲಿಟ್ಟಿದ್ದ ಅನುದಾನವನ್ನು ಕಾಲಮಿತಿಯಲ್ಲಿ ನಿಯಮಾನುಸಾರ ಬಳಸುವಂತೆ ಜಿಲ್ಲಾಧಿಕಾರಿ ವೆಂಕಟ ರಾಜಾ ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ವಿವಿಧ ಇಲಾಖೆಗಳ ಕಾರ್ಯಕ್ರಮ ಅನುಷ್ಠಾನ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದರು.
ಈಗಾಗಲೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಗೆ ಬಿಡುಗಡೆಯಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಅನುಸರಿಸಬಾರದು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಪ್ರತೀ ಇಲಾಖೆಗೂ ಸಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ಕಾರ್ಯಕ್ರಮಗಳು/ ಸೌಲಭ್ಯಗಳು ನಿಗಧಿಯಾಗಿದ್ದು, ಸರ್ಕಾರದ ನಿರ್ದೇಶನವನ್ನು ಪಾಲಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಕೌಶಲ್ಯ ಕಾರ್ಯಕ್ರಮದಡಿ ವಿವಿಧ ವೃತ್ತಿಪರ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಎಸ್‍ಸಿಎಸ್‍ಪಿ/ಟಿಎಸ್‍ಪಿ ಹಣವನ್ನು ಸರಿಯಾಗಿ ಖರ್ಚು ಮಾಡುವುದರ ಜೊತೆಗೆ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು ಎಂದರು.
‘ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಸಂದರ್ಭದಲ್ಲಿಯೂ ಸಹ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಪರಿಶಿಷ್ಟ ಕಲಾವಿದರಿಗೆ ಆದ್ಯತೆ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ವೆಂಕಟ ರಾಜಾ ಅವರು ಇದೇ ಸಂದರ್ಭದಲ್ಲಿ ಸಲಹೆ ನೀಡಿದರು.’ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ವಿವಿಧ ಇಲಾಖೆಯ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ನೀಡಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೋಮಸಂದರ, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರಸನ್ನ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಯೋಗೇಶ್, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ದೀಪಾಂಜಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜು, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಣಾಧಿಕಾರಿ ಬಿಂದು, ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ದನ್, ಲೋಕೋಪಯೋಗಿ ಇಲಾಖೆಯ ಇಇ ಸಿದ್ದೇಗೌಡ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಸಪ್ಪ, ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿ ಉಮಾ, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಸ್ಮಯಿ, ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಉಪ ನಿರ್ದೇಶಕರಾದ ರಘು, ಸಣ್ಣ ನೀರಾವರಿ ಇಲಾಖೆಯ ಎಇಇ ಕುಮಾರಸ್ವಾಮಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಇತರರು ಇದ್ದರು.









