ಮಡಿಕೇರಿ ಅ.12 : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಯ ಮಿತ್ರ ಪಕ್ಷ ಆಮ್ ಆದ್ಮಿ ಪಾರ್ಟಿಗೆ ಕೊಡಗು- ಮೈಸೂರು ಕ್ಷೇತ್ರವನ್ನು ಹಂಚಿಕೆ ಮಾಡಬೇಕೆಂದು ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ 28 ಪಕ್ಷಗಳ ಮೈತ್ರಿಯ ಇಂಡಿಯಾ ಒಕ್ಕೂಟ ಸ್ಥಾಪನೆಯಾಗಿದ್ದು, ಅದರಲ್ಲಿ ಆಮ್ ಆದ್ಮಿ ಪಾರ್ಟಿ ಕೂಡ ಒಂದಾಗಿದೆ. ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದರಿಂದ ಗೆಲುವು ಸಾಧಿಸುವುದು ಸುಲಭವಾಗಲಿದೆ. ಆಮ್ ಆದ್ಮಿ ಪಾರ್ಟಿಯಲ್ಲಿ ಆಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಸ್ಪರ್ಧಿಸಲು ಉತ್ಸುಕರಾಗಿದ್ದಾರೆ. ಆದ್ದರಿಂದ ಕೊಡಗು- ಮೈಸೂರು ಕ್ಷೇತ್ರವನ್ನು ನಮ್ಮ ಪಕ್ಷಕ್ಕೆ ನೀಡಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಬೇಕೆಂದು ಮನವಿ ಮಾಡಿದ್ದಾರೆ.
ಕಳೆದ 9.5 ವರ್ಷಗಳ ಕೇಂದ್ರ ಸರ್ಕಾರದ ಆಡಳಿತದಲ್ಲಿ ಅಗತ್ಯ ವಸ್ತುಗಳ ನಿರಂತರ ಬೆಲೆ ಮತ್ತು ತೆರಿಗೆ ಏರಿಕೆಯಿಂದ ಜನಸಾಮಾನ್ಯರ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಯುವ ಸಮೂಹ ನಿರುದ್ಯೋಗ ಸಮಸ್ಯೆಯನ್ನು ಎದುರಿಸುತ್ತಿದೆ. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವಿದ್ದರೂ ಕೊಡಗು- ಮೈಸೂರು ಕ್ಷೇತ್ರದ ಸಂಸದರು ಎರಡು ಅವಧಿಯಲ್ಲೂ ಗಮನಾರ್ಹ ಸಾಧನೆ ಮಾಡಿಲ್ಲ. ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಪರಿಣಾಮ ಇಲ್ಲಿನ ಮತದಾರರು ಭ್ರಮನಿರಸನಗೂಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕೂಡ ಆಡಳಿತ ವಿರೋಧಿ ಅಲೆ ಕಂಡು ಬಂದಿದೆ ಎಂದು ಆರೋಪಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನು ಮಣಿಸಬೇಕಾದರೆ ಇಂಡಿಯಾ ಮೈತ್ರಿ ಪಕ್ಷಗಳು ಒಗ್ಗಟ್ಟಾಗಿ ಹೋರಾಟ ಮಾಡಬೇಕಾಗಿದೆ. 2014 ಮತ್ತು 2019ರ ಲೋಕಸಭಾ ಚುನಾವಣೆಯಲ್ಲಿ ಕೊಡಗು- ಮೈಸೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಬಿಜೆಪಿ ಅಭ್ಯರ್ಥಿಯ ವಿರುದ್ಧ ಸೋಲು ಅನುಭವಿಸಿದ್ದಾರೆ. ಮತ್ತೊಂದು ಸೋಲಾಗುವುದನ್ನು ತಡೆಯಲು ಕ್ಷೇತ್ರದ ಅಭ್ಯರ್ಥಿಯ ಆಯ್ಕೆ ಸಂದರ್ಭ ಮಿತ್ರ ಪಕ್ಷಗಳನ್ನು ಗಣನೆಗೆ ತೆಗೆದುಕೊಳ್ಳಬೇಕು. ಕೊಡಗು-ಮೈಸೂರು ಕ್ಷೇತ್ರವನ್ನು ಆಮ್ ಆದ್ಮಿ ಪಾರ್ಟಿಗೆ ಹಂಚಿಕೆ ಮಾಡಬೇಕೆಂದು ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ.










