ನಾಪೋಕ್ಲು ಅ.26 : ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ವಿಕಸನಗೊಳಿಸಿ ಸಾರ್ವಜನಿಕ ಸೇವೆಯ ಮೂಲಕ ವಿದ್ಯಾರ್ಥಿಗಳಲ್ಲಿ ರಾಷ್ಟ್ರ ಪ್ರೇಮ ಮತ್ತು ಸೇವಾ ಮನೋಭಾವನೆಯನ್ನು ಬೆಳೆಸಲು ಸಹಕಾರಿಯಾಗಿದೆ ಎಂದು ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ ಹೇಳಿದರು.
ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪಗೊಂಡು ಉನ್ನತಿಯನ್ನು ಹೊಂದಿರಿ ಎಂದು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಕನ್ನಂಬೀರ ಸುಧಿ ತಿಮ್ಮಯ್ಯ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯು ಎಲ್ಲಾ ಕಾರ್ಯಕ್ರಮಗಳಲ್ಲೂ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮೂರ್ನಾಡು ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಪುದಿಯೋಕ್ಕಡ ಸುಬ್ರಮಣಿ ಮಾತನಾಡಿ, ಏಳು ದಿನಗಳ ಶಿಬಿರ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ ನಾಯಕತ್ವ ಕೂಡ ಬೆಳೆಸಲು ಸಹಕಾರಿಯಾಗಿದೆ ಎಂದರು.
ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ದಮಯಂತಿ ಏಳು ದಿನಗಳ ಶಿಬಿರದ ಕಾರ್ಯ ಚಟುವಟಿಕೆಗಳ ವರದಿಯನ್ನು ವಾಚಿಸಿದರು.
ವೇದಿಕೆಯಲ್ಲಿ ಮೂರ್ನಾಡು ವಿದ್ಯಾಸಂಸ್ಥೆಯ ನಿರ್ದೇಶಕ ಈರಮಂಡ ಸೋಮಣ್ಣ, ಕಾರ್ಯದರ್ಶಿ ವೇಣು ಅಪ್ಪಣ್ಣ ,ಪ್ರಾಂಶುಪಾಲರಾದ ದೇವಕಿ, ಶಿಕ್ಷಕಿ ಕುಮುದ ಉಪಸ್ಥಿತರಿದ್ದರು.
ವರದಿ : ದುಗ್ಗಳ ಸದಾನಂದ









