ಮಡಿಕೇರಿ ಅ.27 : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮಡಿಕೇರಿ-208 ಮತ್ತು ವಿರಾಜಪೇಟೆ-209 ವಿಧಾನಸಭಾ ಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಬಿಡುಗಡೆ ಮಾಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಈಗಾಗಲೇ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಮನೆ ಮನೆ ಸಮೀಕ್ಷೆ ಮಾಡಿ ಕರಡು ಮತದಾರರ ಪಟ್ಟಿಯನ್ನು ತಯಾರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
2024 ರ ಜನವರಿ, 05 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತಿದ್ದು, ಅದರೊಳಗೆ ಈ ಕರಡು ಮತದಾರರ ಪಟ್ಟಿಯನ್ನು ಗಮನಿಸಿ ಸರಿಪಡಿಸಿಕೊಳ್ಳಲು ಅವಕಾಶ ಇದೆ. 18 ವರ್ಷ ಪೂರ್ಣಗೊಂಡವರ ಹೆಸರು ಬಿಟ್ಟು ಹೋಗಿದ್ದಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶವಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ವೆಂಕಟ್ ರಾಜಾ ಅವರು ಕೋರಿದರು.
ಕರಡು ಮತದಾರರ ಪಟ್ಟಿಯಂತೆ ಜಿಲ್ಲೆಯ 546 ಮತಗಟ್ಟೆಯಲ್ಲಿ 2,26,392 ಪುರುಷ ಮತದಾರರು, 2,33,503 ಮಹಿಳಾ ಮತದಾರರು ಹಾಗೂ 21 ಇತರ ಮತದಾರರು, ಒಟ್ಟು 4,59,916 ಮತದಾರರು ಇದ್ದಾರೆ.
ವಿಧಾನಸಭಾ ಕ್ಷೇತ್ರವಾರು ಗಮನಿಸಿದಾಗ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 273 ಮತಗಟ್ಟೆಯಲ್ಲಿ 1,14,294 ಪುರುಷ ಮತದಾರರು, 1,19,464 ಮಹಿಳಾ ಮತದಾರರು ಹಾಗೂ 10 ಇತರ ಮತದಾರರು ಒಟ್ಟು 2,33,768 ಮತದಾರರು ಇದ್ದಾರೆ.
ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 273 ಮತಗಟ್ಟೆಯಲ್ಲಿ 1,12,098 ಪುರುಷ ಮತದಾರರು, 1,14,039 ಮಹಿಳಾ ಮತದಾರರು, 11 ಇತರ ಮತದಾರರು ಒಟ್ಟು 2,26,148 ಮತದಾರರು ಇದ್ದಾರೆ ಎಂದು ಮಾಹಿತಿ ನೀಡಿದರು.
ಒಟ್ಟಾರೆ ಕಳೆದ ವಿಧಾನಸಭಾ ಚುನಾವಣೆಗೆ ಹೋಲಿಸಿದೆ ಮತದಾರರ ಸಂಖ್ಯೆ ಹೆಚ್ಚಾಗಿದೆ ಎಂದು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರು ತಿಳಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಇದ್ದರು.
ಇನ್ನಷ್ಟು ಮಾಹಿತಿ:-ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕೊಡಗು ಜಿಲ್ಲೆಯ 208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ಅಕ್ಟೋಬರ್, 27 ರಂದು ಪ್ರಕಟಿಸಲಾಗಿದೆ.
ಕರಡು ಮತದಾರರ ಪಟ್ಟಿಯ ಪ್ರಕಟಣೆ ದಿನದಿಂದ ಅಂದರೆ ಅಕ್ಟೋಬರ್, 27 ರಿಂದ 2023 ರ ಡಿಸೆಂಬರ್, 09 ರವರೆಗೆ, 01-01-2024, 01-04-2024, 01-07-2024 ಮತ್ತು 01-10-2024ಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವಕ, ಯುವತಿಯರು ಮತ್ತು 18 ವರ್ಷ ಮೇಲ್ಪಟ್ಟ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದೆ ವಂಚಿತರಾಗಿದ್ದಲ್ಲಿ ಮತದಾರರ ಪಟ್ಟ್ಟಿಗೆ ಹೆಸರು ಸೇರಿಸಲು ನಮೂನೆ-6ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿರುವ ಮತದಾರರು ಮೃತ, ಸ್ಥಳಾಂತರ, ಪುನರಾವರ್ತನೆ ಆಗಿದ್ದಲ್ಲಿ ಹೆಸರುಗಳನ್ನು ತೆಗೆಯಲು ನಮೂನೆ-7 ರಲ್ಲಿ ಆಕ್ಷೇಪಣೆ ಅರ್ಜಿಯನ್ನು ಪಡೆದುಕೊಳ್ಳಲಾಗುವುದು.
ಮತದಾರರ ಗುರುತಿನ ಚೀಟಿಯಲ್ಲಿನ ನಮೂದುಗಳು ತಪ್ಪಾಗಿದ್ದಲ್ಲಿ ತಿದ್ದುಪಡಿ ಮಾಡಲು ಹಾಗೂ ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ ಮಾಡಲು ನಮೂನೆ-8ರಲ್ಲಿ ಅರ್ಜಿ ಸ್ವೀಕರಿಸಲಾಗುತ್ತಿದೆ. ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-6ಎರಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನಮೂನೆ-6, 6ಎ, 7 ಮತ್ತು 8ರ ಅರ್ಜಿಗಳನ್ನು ಭಾರತ ಚುನಾವಣಾ ಆಯೋಗವು ಅಭಿವೃದ್ಧಿ ಪಡಿಸಿರುವ ಮೋಬೈಲ್ ಅಪ್ಲಿಕೇಷನ್ ಮತದಾರರ ಸಹಾಯವಾಣಿ ಆಪ್ (VOTER HELPLINE APP) ಹಾಗೂ https://voters.eci.gov.in/ / VOTERS’ SERVICE PORTAL ಮೂಲಕ ಅನ್‍ಲೈನ್‍ನಲ್ಲಿ ನೇರವಾಗಿ ಸಲ್ಲಿಸಬಹುದಾಗಿದೆ.
2023 ರ ನವೆಂಬರ್, 18, 19, ಡಿಸೆಂಬರ್, 02 ಮತ್ತು 03 ರಂದು ಮತಗಟ್ಟೆಗಳಲ್ಲಿ ವಿಶೇಷ ನೋಂದಣಿ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿದ್ದು, ನಾಗರಿಕರು ಇದರ ಉಪಯೋಗವನ್ನು ಪಡೆದುಕೊಂಡು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಬಗ್ಗೆ ಖಚಿತ ಪಡಿಸಿಕೊಳ್ಳಲು ಸಹ ಕೋರಿದೆ. ನೋಂದಣಿ ಆಗದೆ ಇದ್ದಲ್ಲಿ ನಮೂನೆ-6 ರಲ್ಲಿ ಅರ್ಜಿ ಸ್ಥಳದಲ್ಲಿಯೇ ನೀಡಬಹುದಾಗಿದೆ.
ಮತದಾರರ ಪಟ್ಟಿ ಮತ್ತು ಚುನಾವಣೆಯ ಕುರಿತು ಮತದಾರರಿಗೆ ಮಾಹಿತಿಯನ್ನು ನೀಡುವ ಸಲುವಾಗಿ ಭಾರತ ಚುನಾವಣಾ ಆಯೋಗವು ಮತದಾರರ ಸಹಾಯವಾಣಿ ಆಪ್ (VOTER HELPLINE APP) ಅನ್ನು ಬಿಡುಗಡೆ ಮಾಡಿದ್ದು, ಎಲ್ಲಾ ಮತದಾರರು / ನಾಗರಿಕರು ತಮ್ಮ ಮೊಬೈಲ್‍ನಲ್ಲಿ ಮತದಾರರ ಸಹಾಯವಾಣಿ ಆಪ್ (VOTER HELPLINE APP) ಅನ್ನು ಡೌನ್‍ಲೋಡ್ ಮಾಡಿಕೊಳ್ಳಲು ಕೋರಿದೆ.
ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಭಾ.ಆ.ಸೇ., ಅವರನ್ನು ಕೊಡಗು ಜಿಲ್ಲೆಗೆ ಮತದಾರರ ಪಟ್ಟಿ ವೀಕ್ಷಕರಾಗಿ ನೇಮಕ ಮಾಡಲಾಗಿದೆ.