ಮಡಿಕೇರಿ ಅ.27 : ರಾಜ್ಯ ಸರ್ಕಾರ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ವೃಥಾರೋಪಗಳನ್ನು ಮಾಡುವ ಮೂಲಕ ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸವನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಮಾಡುತ್ತಿದ್ದಾರೆ ಮತ್ತು ಸುಳ್ಳುಗಳನ್ನು ನಿಜವಾಗಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯೊಂದಿಗೆ ಸೇರಿಕೊಂಡಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಸೆಂಟ್ರಲ್ ಗ್ರಿಡ್ ಮೂಲಕ ವಿದ್ಯುತ್ ಖರೀದಿ ಮಾಡಿದೆ. ಇದರ ಬಗ್ಗೆ ಅರಿವಿಲ್ಲದ ಅವರು ವಿದ್ಯುತ್ ಖರೀದಿಯಲ್ಲಿ ಕಮಿಷನ್ ಹೊಡೆದಿದ್ದಾರೆ ಎಂದು ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಜೆಡಿಎಸ್ ಮತ್ತು ಬಿಜೆಪಿ ಅವಧಿಯಲ್ಲಿ ರಾಜ್ಯದ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿ ಒಂದು ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೂ ಕ್ರಮ ಕೈಗೊಂಡಿಲ್ಲವೆಂದು ಟೀಕಿಸಿದರು.
ಪ್ರಸ್ತುತ ಡಿ.ಕೆ.ಶಿವಕುಮಾರ್ ಅವರು ಒಕ್ಕಲಿಗರ ನಾಯಕರಾಗಿ ಬೆಳೆಯುತ್ತಿದ್ದು, ಹೆಚ್.ಡಿ.ಕುಮಾರಸ್ವಾಮಿ ಅವರು ನೇಪತ್ಯಕ್ಕೆ ಸರಿಯುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಜಾರಿ, ಜನಪರವಾದ ಕಾರ್ಯಕ್ರಮಗಳನ್ನು ಸಹಿಸದೆ ಅವರು ಆರೋಪಗಳನ್ನು ಮಾಡುತ್ತಿದ್ದಾರೆ. ಆದರೆ ಇಂತಹ ಪ್ರಯತ್ನಗಳಿಂದ ರಾಜಕೀಯ ಗ್ರಾಫ್ ಮೇಲಕ್ಕೇರುವುದಿಲ್ಲ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಈ ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳಿಗೆ ಸಂಬಂಧಿಸಿದಂತೆ ತನಿಖೆೆಗಳನ್ನು ನಡೆಸುತ್ತಿದ್ದು, ಉಪ್ಪು ತಿಂದವರು ನೀರು ಕುಡಿದೇ ಕುಡಿಯುತ್ತಾರೆ ಎಂದು ಹೇಳಿದರು.
ಹುಲಿ ಉಗರು ಪ್ರಕರಣಗಳಿಗೆ ಸಂಬಂಧಿಸಿದಂತೆ ಈಗಾಗಲೆ ಅರಣ್ಯ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ನವಿಲುಗರಿಯ ವಿಚಾರ ಪ್ರಸ್ತಾಪಿಸಿದ್ದಕ್ಕೆ ಪ್ರತಿಕ್ರಿಯಿಸಿ, ಅವರು ಮೊದಲು ಕಾನೂನನ್ನು ತಿಳಿದುಕೊಳ್ಳ್ಳಲಿ. ಕಾನೂನಿನಲ್ಲಿ ಈ ಬಗ್ಗೆ ಸ್ಪಷ್ಟವಾಗಿ ತಿಳಿಸಲಾಗಿದೆ. ಅನಗತ್ಯವಾಗಿ ಸಮಾಜದಲ್ಲಿ ಕಿಡಿ ಹೊತ್ತಿಸುವ ಪ್ರಯತ್ನ ಬೇಡವೆಂದು ಲಕ್ಷ್ಮಣ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್, ಮೈಸೂರು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಮು, ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ.ಈ.ಸುರೇಶ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ ಉಪಸ್ಥಿತರಿದ್ದರು.










