ಮಡಿಕೇರಿ ಅ.28 : ಕರ್ನಾಟಕ ಸಂಭ್ರಮ-50 ರ ಪ್ರಯುಕ್ತ ನ.1 ರಿಂದ ವರ್ಷವಿಡೀ ಕಾರ್ಯಕ್ರಮಕ್ಕೆ ಸಜ್ಜಾಗಿದ್ದು, ವಿವಿಧ ಕಾರ್ಯಕ್ರಮಗಳು ಜರುಗಲಿವೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಜಿಲ್ಲೆಯ ಎಲ್ಲಾ ಜನತೆಯ ಸಹಕಾರದಿಂದ ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ನ.1 ರಂದು ಜಿಲ್ಲೆಯ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ-50 ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಘೋಷ ವಾಕ್ಯವನ್ನು ಬರೆಯುವಂತೆ ಅವರು ನಾಗರಿಕರಲ್ಲಿ ಮನವಿ ಮಾಡಿದ್ದಾರೆ.
ನ.1 ರ ಬೆಳಗ್ಗೆ 9 ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ(ರೇಡಿಯೋ) ನಾಡಗೀತೆ ಪ್ರಸಾರವಾಗಲಿದ್ದು, ಆ ಸಮಯದಲ್ಲಿ ಕನ್ನಡ ನಾಡಿನ ಸಮಸ್ತ ನಾಗರಿಕರು ಎದ್ದು ನಿಂತು ರಾಷ್ಟ್ರಗೀತೆಗೆ ಗೌರವ ಸಲ್ಲಿಸುವ ರೀತಿಯಲ್ಲಿ ನಾಡಗೀತೆಗೂ ಗೌರವ ಸಲ್ಲಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಕೋರಿದ್ದಾರೆ.
ಸಂಜೆ 7 ಗಂಟೆಗೆ ಜಿಲ್ಲೆಯ ಎಲ್ಲಾ ಗ್ರಾಮಗಳ ಮನೆಗಳ ಮುಂದೆ, ಕಚೇರಿಗಳ ಮುಂದೆ ಹಾಗೂ ಅಂಗಡಿ-ಮಳಿಗೆಗಳ ಮುಂದೆ ಹಣತೆ(ದೀಪ) ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗುವಂತೆ ವೆಂಕಟ್ ರಾಜಾ ಮನವಿ ಮಾಡಿದ್ದಾರೆ.
ರಾಜ್ಯೋತ್ಸವದ ದಿನ ಗಾಯನಕ್ಕಾಗಿ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’(ಹುಯಿಲಗೋಳ ನಾರಾಯಣರಾಯರು), ‘ಎಲ್ಲಾದರು ಇರು ಎಂತಾದರು ಇರು…’(ಕುವೆಂಪು), ‘ಒಂದೇ ಒಂದೇ ಕರ್ನಾಟಕ ಒಂದೇ…’(ದ.ರಾ.ಬೇಂದ್ರೆ), ‘ಹೊತ್ತಿತೋ ಹೊತ್ತಿತು ಕನ್ನಡದ ದೀಪ..’(ಸಿದ್ದಯ್ಯ ಪುರಾಣಿಕ) ಮತ್ತು ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ..’(ಚೆನ್ನವೀರ ಕಣವಿ) ಗೀತೆಗಳನ್ನು ಹಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.









