ಮಡಿಕೇರಿ ನ.4 : ಗ್ರಾ.ಪಂ ನೌಕರರ ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾ.ಪಂ ನೌಕರರ ಸಂಘ ಕೊಡಗು ಜಿಲ್ಲಾ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು.
ನಗರದ ಜಿ.ಪಂ ಕಚೇರಿ ಎದುರು ಸಮಾವೇಶಗೊಂಡ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿದರು.
ಈ ಸಂದರ್ಭ ಸಂಘದ ಅಧ್ಯಕ್ಷ ಪಿ.ಆರ್.ಭರತ್ ಮಾತನಾಡಿ, ಗ್ರಾ.ಪಂ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರವಸೂಲಿಗಾರ, ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್ಸ್, ನೀರುಗಂಟಿಗಳು, ಜವಾನ, ಸ್ವಚ್ಛತಾಗಾರರನ್ನು ಏಕಕಾಲಕ್ಕೆ ಸರ್ಕಾರಿ ನೌಕರರನ್ನಾಗಿ ಘೋಷಿಸಬೇಕು, ದಿನ ನಿತ್ಯದ ಬಳಸುವ ವಸ್ತುಗಳ ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಠ ವೇತನ ರೂ.31,000 ನಿಗದಿಗೊಳಿಸಬೇಕು, ಎಲ್ಲಾ ನೌಕರರಿಗೆ ನಿವೃತ್ತಿ ಅಥವಾ ಮರಣ ಹೊಂದಿದರೆ ಪ್ರತಿ ತಿಂಗಳು ಕನಿಷ್ಠ 6000 ರೂ.ಪಿಂಚಣಿ ವ್ಯವಸ್ಥೆ ಜಾರಿ ಮಾಡಬೇಕು, ಈಗಾಗಲೇ ಹೆಚ್ಚುವರಿಯಾಗಿ ಕಾರ್ಯನಿರ್ವಹಿಸುವ ಡಾಟಾ ಎಂಟ್ರಿ ಆಪರೇಟರ್ ಗಳನ್ನು ನೇಮಕ ಮಾಡಿಕೊಂಡು ಮುಂದುವರಿಸಬೇಕು, ವಾಟರ್ ಮೆನ್, ಜವಾನ, ಸ್ವೀಪರ್ ಗಳಲ್ಲಿ ಕಂಪ್ಯೂಟರ್ ಜ್ಞಾನ ಹಾಗೂ ವಿದ್ಯಾರ್ಹತೆ ಹೊಂದಿದವರಿಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿದರು.
31-10-2017 ಕ್ಕೆ ನೇಮಕಗೊಂಡು ಜಿ.ಪಂ ಅನುಮೋದನೆ ಇಲ್ಲದೆ ಮರಣ ಹೊಂದಿದ ಕುಟುಂಬಕ್ಕೆ ಅನುಕಂಪದ ನೌಕರಿ ನೀಡಬೇಕು, ಜವಾನ, ಸ್ವಚ್ಛತಾಗಾರರು, ನೀರು ಗಂಟಿಗಳಿಗೆ ವಿದ್ಯಾರ್ಹತೆ ಕೈಬಿಟ್ಟು ನಿರ್ಣಯ, ವೇತನ, ಹಾಜರಾತಿ, ಆಧಾರದಲ್ಲಿ ಅನುಮೋದನೆ ನೀಡಬೇಕು, ಗ್ರಾ.ಪಂ ಕಾರ್ಯನಿರ್ವಹಿಸುವ ನೌಕರರಿಗೆ ವರ್ಗಾವಣೆಗೆ ಅವಕಾಶ ನೀಡಬೇಕು, ನೀರುಗಂಟಿಗಳಿಗೆ ಮಲ್ಟಿಪರ್ಪಸ್ ಎಂದಿರುವುದನ್ನು ಕೈ ಬಿಟ್ಟು ನಿರ್ದಿಷ್ಟವಾದ ಕೆಲಸಗಳನ್ನು ನಿಗದಿಪಡಿಸಬೇಕು, ನೀರು ಗಂಟಿ, ಅಟೆಂಡರ್, ಸ್ವೀಪರ್ ಗಳಲ್ಲಿ ವಿದ್ಯಾರ್ಹತೆ ಇರುವವರಿಗೆ ಗ್ರೇಡ್-2 ಕಾರ್ಯದರ್ಶಿ ಮತ್ತು ಲೆಕ್ಕಸಹಾಯಕ ಹುದ್ದೆಗಳಿಗೆ ಬಡ್ತಿ ನೀಡಬೇಕು, ಆದಾಯಕ್ಕೆ ಅನುಗುಣವಾಗಿ ಕರವಸೂಲಿಗಾರರ ಹುದ್ದೆಗಳನ್ನು ನಿಗದಿಗೊಳಿಸಬೇಕೆಂದು ಆಗ್ರಹಿಸಿದರು.
ಪ್ರತಿಯೊಂದು ಗ್ರಾ.ಪಂ ಗಳಿಗೆ ಲೆಕ್ಕ ಸಹಾಯಕ ಹುದ್ದೆ ಸೃಷ್ಟಿಸಬೇಕು, ಗ್ರೇಡ್ -1 ಕಾರ್ಯದರ್ಶಿ ಹುದ್ದೆಗಳಿಗೆ ಶೇ.100 ರಷ್ಟು ಸ್ಥಾನ, ಗ್ರೇಡ್-2 ಕಾರ್ಯದರ್ಶಿಗಳಿಗೆ ಶೇ.50ರಷ್ಟು, ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗೆ ಶೇ.50ರಷ್ಟು ಸ್ಥಾನಗಳನ್ನು ಬಡ್ತಿ ನೀಡಬೇಕು, ಗ್ರೇಡ್-1 ಪಂಚಾಯಿತಿಗಳನ್ನು ಜನಸಂಖ್ಯೆಗೆ ಆಧರಿಸಿ ಮೇಲ್ದರ್ಜೆಗೆ ಏರಿಸಬೇಕು,
ಅಭಿವೃದ್ಧಿ ಅಧಿಕಾರಿಗಳ ಹುದ್ದೆಗೆ ಶೇ.60ರಷ್ಟು ಸ್ಥಾನವನ್ನು ಗ್ರೇಡ್ -1 ಕಾರ್ಯದರ್ಶಿಗಳಿಗೆ ನೀಡಬೇಕು, ಐಪಿಡಿ ಸಾಲಪ್ಪ ವರದಿಯಂತೆ ಸ್ವಚ್ಛತಾ ಗಾರರನ್ನು ನೇಮಿಸಬೇಕು, ಗ್ರೇಡ್-2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕ ಹುದ್ದೆಗಳಿಗೆ ಸೇವೆಯೊಳಗಿನ ನೇರ ನೇಮಕಾತಿಗೆ ವಯೋಮಿತಿಯನ್ನು ಕೈಬಿಡಬೇಕು, ಸೇವಾ ಹಿರಿತನ ಪರಿಗಣಿಸಿ ವೇತನ ಹೆಚ್ಚಳ ಮಾಡಬೇಕು. ತೀರ್ವವಾದ ಅನಾರೋಗ್ಯಕ್ಕೆ ತುತ್ತಾದ ನೌಕರರಿಗೆ ಆಸ್ಪತ್ರೆ ವೆಚ್ಚ ಬರಿಸಬೇಕೆಂದು ಒತ್ತಾಯಿಸಿದರು.
ಜಿಲ್ಲಾ ಸಮಿತಿ ಸದಸ್ಯರಾದ ಅನಿಲ್, ವೇಣು, ದಿನೇಶ್ ಮತ್ತು ಮಹಿಳಾ ಘಟಕದ ಉಪಾಧ್ಯಕ್ಷೆ ವಿಂದ್ಯಾ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
ಬೇಡಿಕೆಯ ಮನವಿ ಪತ್ರವನ್ನು ಜಿ.ಪಂ ಮುಖ್ಯ ಕಾರ್ಯನಿರ್ವಣಾಧಿಕಾರಿಗಳ ಮುಖಾಂತರ ಪಂಚಾಯತ್ ರಾಜ್ ಇಲಾಖೆಗೆ ಸಲ್ಲಿಸಲಾಯಿತು.