ಬೆಂಗಳೂರು ನ.7 : ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ.ಚಂದ್ರೇಗೌಡ ಸೋಮವಾರ ರಾತ್ರಿ ನಿಧನರಾಗಿದ್ದು, ಅವರಿಗೆ 87 ವರ್ಷ ವಯಸ್ಸಾಗಿತ್ತು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಡಿ.ಬಿ.ಚಂದ್ರೇಗೌಡ ಸೋಮವಾರ ಮಧ್ಯರಾತ್ರಿ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಅಂತಿಮ ಇಂದು ಮಧ್ಯಾಹ್ನ 2 ರಿಂದ ಸಂಜೆ 6ರವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ(ನವೆಂಬರ್ 08) ನಾಳೆ ಮಧ್ಯಾಹ್ನ ದಾರದಹಳ್ಳ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಮೂರು ಬಾರಿ ಶಾಸಕರಾಗಿ, 3 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಚಂದ್ರೇಗೌಡ, ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೇ ಕಾನೂನು ಸಚಿವರು ಹಾಗೂ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. ಇನ್ನು ಕಾಂಗ್ರೆಸ್ ಕಟ್ಟಾಳಾಗಿದ್ದ ಚಂದ್ರೇಗೌಡ, ಬದಲಾದ ಸನ್ನಿವೇಶದಲ್ಲಿ ಬಿಜೆಪಿ ಸೇರಿದ್ದರು. ಬಳಿಕ ಬಿಜೆಪಿಯಿಂದ ಸಂಸದರಾಗಿಯೂ ಆಯ್ಕೆಯಾಗಿದ್ದರು.
ಸಂತಾಪ :: ಡಿ.ಬಿ.ಚಂದ್ರೇಗೌಡ ನಿಧನಕ್ಕೆ ವಿವಿಧ ಪಕ್ಷಗಳ ನಾಯಕರು, ಗಣ್ಯರು ಸಂತಾಪ ಸೂಚಿಸಿದ್ದಾರೆ. ಮಾಜಿ ಸಿಎಂ ಬಿಎಸ್ ಬೊಮ್ಮಾಯಿ ಟ್ವಿಟರ್ ಮೂಲಕ ಸಂತಾಪ ಸೂಚಿಸಿದ್ದು, ಹಿರಿಯ ರಾಜಕಾರಿಣಿ, ಮಾಜಿ ಸಚಿವರು, ಮಾಜಿ ಸಂಸದರಾದ ಆತ್ಮೀಯ ಡಿ. ಬಿ. ಚಂದ್ರೇಗೌಡರು ನಿಧನರಾದ ವಿಷಯ ತಿಳಿದು ತುಂಬಾ ದುಃಖಿತನಾಗಿದ್ದೇನೆ. ಅವರ ನಿಧನ ನಾಡಿಗೆ ತುಂಬಲಾರದ ನಷ್ಟವಾಗಿದ್ದು, ಉತ್ತಮ ಸಂಸದೀಯ ಪಟುವಾಗಿ ಅವರು ಹಾಕಿಕೊಟ್ಟ ಮಾರ್ಗ ಯುವ ಪೀಳಿಗೆ ಮಾದರಿಯಾಗಿರುವಂತಹದ್ದು. ಅವರ ಕುಟುಂಬಕ್ಕೆ ಅವರ ಅಭಿಮಾನಿಗಳಿಗೆ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.