ಮಡಿಕೇರಿ ನ.9 : ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಉಪವಿಭಾಗದಲ್ಲಿ ಎನ್‍ಡಿಆರ್‍ಎಫ್ ಮತ್ತು ಮಳೆಹಾನಿ ದುರಸ್ತಿ ಕಾಮಗಾರಿ ಪೂರ್ಣಗೊಂಡ ಬಿಲ್‍ಗಳನ್ನು ಸಲ್ಲಿಸಿದ್ದರೂ ಗುತ್ತಿಗೆದಾರರಿಗೆ ಹಣ ಪಾವತಿಯಾಗಿಲ್ಲ. ತಕ್ಷಣ ಹಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಮಡಿಕೇರಿ ತಾಲ್ಲೂಕು ಲೋಕೋಪಯೋಗಿ ಗುತ್ತಿಗೆದಾರರ ಸಂಘ ಜಿಲ್ಲೆಯ ಶಾಸಕದ್ವಯರಲ್ಲಿ ಮನವಿ ಮಾಡಿದೆ.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರಿಗೆ ಮನವಿ ಪತ್ರ ಸಲ್ಲಿಸಿದ ಸಂಘದ ಪ್ರಮುಖರು ಗುತ್ತಿಗೆದಾರರ ಸಮಸ್ಯೆಗಳನ್ನು ವಿವರಿಸಿದರು.
ಈ ಸಂದರ್ಭ ಮಾತನಾಡಿದ ಸಂಘದ ತಾಲ್ಲೂಕು ಅಧ್ಯಕ್ಷ ಬಿ.ಪಿ.ರಾಜೀವ ಲೋಚನ 2018-19, 2019-20, 2020-21 ಮತ್ತು 2021-22ನೇ ಸಾಲಿನ ಮಳೆಹಾನಿ ಮತ್ತು ಎನ್‍ಡಿಆರ್‍ಎಫ್ ಯೋಜನೆಯಡಿ ಕೈಗೊಂಡ ಕಾಮಗಾರಿಗಳು ಪೂರ್ಣಗೊಂಡು ನೋಡಲ್ ಅಧಿಕಾರಿ ಹಾಗೂ ಕುಶಾಲನಗರ ಇಂಜಿನಿಯರಿಂಗ್ ಕಾಲೇಜಿನಿಂದ ಪರಿಶೀಲನೆ ವರದಿಯನ್ನು ನೀಡಿದ್ದರೂ ಇಲ್ಲಿಯವರೆಗೆ ಹಣ ಬಿಡುಗಡೆ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಈ ಬಗ್ಗೆ ಹಲವು ಬಾರಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಮತ್ತು ಜಿಲ್ಲಾಧಿಕಾರಿ ಕಚೇರಿಯನ್ನು ಸಂಪರ್ಕಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಗುತ್ತಿಗೆದಾರರು ಸಾಲ ಮಾಡಿ ಕಾಮಗಾರಿಗಳನ್ನು ನಿರ್ವಹಿಸಿದ್ದಾರೆ. ಇದೀಗ ಕಾಮಗಾರಿಯ ಹಣ ಬಿಡುಗಡೆಯಾಗದೆ ಇರುವುದರಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಗಮನ ಸೆಳೆದರು.
ಹಣವಿಲ್ಲದೆ ಮುಂದಿನ ದಿನಗಳಲ್ಲಿ ಕಾಮಗಾರಿಯನ್ನು ನಿರ್ವಹಿಸಲು ಅಸಾಧ್ಯವಾಗಿರುವುದರಿಂದ ಗುತ್ತಿಗೆದಾರರು ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳದೆ ಇರಲು ನಿರ್ಧರಿಸಿದ್ದಾರೆ. ಆದ್ದರಿಂದ ಈ ಬಗ್ಗೆ ತರ್ತು ಗಮನ ಹರಿಸಿ ಗುತ್ತಿಗೆದಾರರಿಗೆ ಹಣ ಪಾವತಿಸಲು ಕ್ರಮ ಕೈಗೊಳ್ಳಬೇಕೆಂದು ರಾಜೀವ ಲೋಚನ ಮನವಿ ಮಾಡಿದರು.









