ಮಡಿಕೇರಿ ನ.9 : ಇತ್ತೀಚೆಗೆ ಗೋಣಿಕೊಪ್ಪ ವ್ಯಾಪ್ತಿಯಲ್ಲಿ ಇಬ್ಬರು ಮಹಿಳೆಯರು ಒಂದೇ ದಿನ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸ್ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಶಾಸಕರು ಇಬ್ಬರು ಮಹಿಳೆಯರ ನಾಪತ್ತೆ ಪ್ರಕರಣದ ಬಗ್ಗೆ ವಿಶೇಷ ಕಾಳಜಿ ತೋರಿ ಸೂಕ್ತ ತನಿಖೆಗೆ ಕ್ರಮ ಕೈಗೊಳ್ಳಬೇಕು. ಮಹಿಳೆಯರನ್ನು ಪತ್ತೆ ಮಾಡಲು ಪೊಲೀಸರು ಕಾರ್ಯೋನ್ಮುಖವಾಗಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳೆಯರ ಭದ್ರತೆ ಬಗ್ಗೆ ಸಂಶಯ ವ್ಯಕ್ತವಾಗುತ್ತಿದೆ. ಕೆಲವು ದಿನಗಳ ಹಿಂದೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯ ಕೊಲೆಯಾಗಿದೆ. ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಮಾನಸಿಕ ಹಿಂಸೆಯ ಪ್ರಕರಣಗಳು ಹೆಚ್ಚಾಗಿದೆ. ಕೆಲವು ಪ್ರಕರಣಗಳಲ್ಲಿ ಮಹಿಳೆಯರಿಗೆ ನ್ಯಾಯ ದೊರಕಿಸಿಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಇದೀಗ ಗೋಣಿಕೊಪ್ಪ ಮಹಿಳೆಯರ ನಾಪತ್ತೆ ಪ್ರಕರಣ ಆತಂಕವನ್ನು ಸೃಷ್ಟಿಸಿದೆ ಎಂದು ಆರೋಪಿಸಿದ್ದಾರೆ.










