ಮಡಿಕೇರಿ ನ.10 : ರೈತರು ಪಂಪ್‍ಸೆಟ್‍ಗಳಿಗೆ ಸ್ವಂತ ವೆಚ್ಚದಲ್ಲಿ ವಿದ್ಯುತ್ ಸಂಪರ್ಕ ಪಡೆದುಕೊಳ್ಳಬೇಕು ಮತ್ತು ಮೂಲಸೌಲಭ್ಯ ಕಲ್ಪಿಸಿಕೊಳ್ಳಬೇಕು ಎನ್ನುವ ಆದೇಶವನ್ನು ರಾಜ್ಯ ಸರ್ಕಾರ ತಕ್ಷಣ ಹಿಂಪಡೆಯಬೇಕೆಂದು ಬಿಜೆಪಿ ರೈತ ಮೋರ್ಚಾ ಒತ್ತಾಯಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ರೈತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಯಮುನಾ ಚಂಗಪ್ಪ, ಇನ್ನು ಮುಂದೆ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಪಡೆಯಬೇಕಾದರೆ ಟ್ರಾನ್ಸ್‍ಫಾರ್ಮರ್, ಕಂಬ ಮತ್ತು ತಂತಿ ಸೇರಿದಂತೆ ಸಂಬಂಧಪಟ್ಟ ವಸ್ತುಗಳನ್ನು ರೈತರೇ ಸ್ವಂತ ಖರ್ಚಿನಲ್ಲಿ ಖರೀದಿಸಬೇಕೆಂದು ಸರ್ಕಾರ ಆದೇಶ ಮಾಡಿದೆ. ಇದೊಂದು ರೈತ ವಿರೋಧಿ ನಿಲುವಾಗಿದ್ದು, ತಕ್ಷಣ ಇದನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.
ಹಿಂದೆ ಒಂದು ಪಂಪ್‍ಸೆಟ್‍ಗೆ ವಿದ್ಯುತ್ ಪಡೆಯಬೇಕಾದರೆ ರೈತರಿಗೆ 24 ಸಾವಿರ ರೂ. ಖರ್ಚಾಗುತ್ತಿತ್ತು, ಆದರೆ ಈಗ 2 ಲಕ್ಷ ರೂ. ಬೇಕಾಗುತ್ತದೆ. ರಾಜ್ಯದಲ್ಲಿ ಮಳೆಯ ಅಭಾವದಿಂದ ಬರಗಾಲ ಆವರಿಸಿದ್ದು, ಮುಂಗಾರು ಬೆಳೆ ಸಂಪೂರ್ಣ ನಾಶವಾಗಿದೆ. ಆದರೂ ಸರ್ಕಾರದಿಂದ ಬೆಳೆಹಾನಿ ಅಧ್ಯಯನಕ್ಕೆ ಯಾವುದೇ ತಂಡ ಹೋಗದಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬರಗಾಲದಿಂದ ಕಂಗೆಟ್ಟಿರುವ ಕೆಲವು ರೈತರು ಆತ್ಮಹತ್ಯೆಗೆ ಮುಂದಾಗಿದ್ದಾರೆ. ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯ ಧೋರಣೆಯಿಂದ ರೈತರಲ್ಲಿ ಆತಂಕ ಹೆಚ್ಚಾಗಿದ್ದು, ಮುಂದೇನು ಎಂದು ಯೋಚಿಸುವಂತಾಗಿದೆ. ಇರುವ ಅಲ್ಪ ಪ್ರಮಾಣದ ಬೆಳೆಯನ್ನು ಉಳಿಸಿಕೊಳ್ಳಲು ರೈತರು ತೆರೆದ ಬಾವಿ, ಕೊಳವೆ ಬಾವಿಗಳ ಮೊರೆ ಹೊಗಿದ್ದಾರೆ. ಆದರೆ ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಕೆಯಾಗದೆ ಪರದಾಡುವಂತಾಗಿದೆ ಎಂದರು.
ರೈತರ ಸಮಸ್ಯೆಯನ್ನು ಅರಿತು ಬಿಜೆಪಿ ರಾಜ್ಯದ ಎಲ್ಲೆಡೆ ಬೆಳೆಹಾನಿ ಅಧ್ಯಯನ ನಡೆಸಿದ್ದು, ಸುಮಾರು 33 ಕೋಟಿ ರೂ. ಹಾನಿ ಆಗಿರುವ ಬಗ್ಗೆ ವರದಿ ಮಾಡಿದೆ. ಸರ್ಕಾರ ರೈತರಿಗೆ ಪರಿಹಾರ ನೀಡಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಹಿಂದಿನ ಬಿಜೆಪಿ ಸರ್ಕಾರದ ರೈತಪರ, ಜನಪರ ಯೋಜನೆಗಳನ್ನು ಅನುದಾನದ ಕೊರತೆ ಎಂಬ ನೆಪವೊಡ್ಡಿ ರದ್ದು ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳು ಹಳ್ಳಹಿಡಿಯುತ್ತಿದ್ದು, ದೊಡ್ಡ ದಂಧೆಯಾಗಿ ಮಾರ್ಪಟ್ಟಿದೆ ಎಂದು ಆರೋಪಿಸಿದ ಯಮುನಾ ಚಂಗಪ್ಪ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಗ್ಯಾರಂಟಿಯಿಂದ ಬಡವರಿಗೆ ಅನುಕೂಲವಾಗಲಿದೆ ಎಂಬುವುದು ಹಾಸ್ಯಾಸ್ಪದ ಎಂದು ಟೀಕಿಸಿದರು.
ಸೋಮವಾರಪೇಟೆ ಮಂಡಲ ರೈತ ಮೋರ್ಚಾದ ಅಧ್ಯಕ್ಷ ಮಚ್ಚಂಡ ಪ್ರಕಾಶ್ ಬೆಳ್ಯಪ್ಪ ಮಾತನಾಡಿ, ಮಳೆ ಅಭಾವದಿಂದ ರೈತನ ಬದುಕು ಅತಂತ್ರವಾಗಿದೆ. ರೈತರ ಕೃಷಿ ಪಂಪಸೆಟ್‍ಗಳಿಗೆ ಸ್ವಂತ ಖರ್ಚಿನಲ್ಲಿಯೇ ಹೊಸ ಸಂಪರ್ಕ ಪಡೆಯುವ ಆದೇಶವನ್ನು ಸರ್ಕಾರ ರದ್ದುಗೊಳಿಸಿ, ಈ ಹಿಂದಿನಂತೆಯೇ ವಿದ್ಯುತ್ ಸಂಪರ್ಕ ನೀಡಬೇಕೆಂದು ಒತ್ತಾಯಿಸಿದರು.
ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದ ಅವರು, ಜಿಲ್ಲೆಯಲ್ಲಿ ರಸ್ತೆ ಸೇರಿದಂತೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ದೂರಿದರು.
ಮಡಿಕೇರಿ ಗ್ರಾಮಾಂತರ ರೈತ ಮೋರ್ಚಾದ ಅಧ್ಯಕ್ಷ ಶಿವಚಾಳಿಯಂಡ ಜಗದೀಶ್ ಮಾತನಾಡಿ, ಕೊಡಗಿನಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದ್ದು, ಅರಣ್ಯ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.








