ಮಡಿಕೇರಿ ನ.20 : ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ “ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ” ಎಂಬ ಕೇಂದ್ರ ವಿಷಯದಡಿ 31 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ-2023 ವನ್ನು ಕ್ಕೆ ಪೂರ್ವಭಾಗಿಯಾಗಿ ನ.21 ರಂದು ಬೆಳಗ್ಗೆ 9.30 ಗಂಟೆಗೆ ಮಡಿಕೇರಿ ನಗರದ ರೋಟರಿ ಮಕ್ಕಳ ವಿಜ್ಞಾನ ಕೇಂದ್ರದಲ್ಲಿ ಮಾರ್ಗದರ್ಶಿ ಶಿಕ್ಷಕರಿಗೆ ಜಿಲ್ಲಾಮಟ್ಟದ ತರಬೇತಿ ಕಾರ್ಯಾಗಾರ ನಡೆಯಲಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ,
ಶಾಲಾ ಶಿಕ್ಷಣ ಇಲಾಖೆ,
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆ ಹಾಗೂ
ಮಡಿಕೇರಿ ನಗರದ ಲಯನ್ಸ್ ಕ್ಲಬ್
ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಜ್ಞಾನ ಶಿಕ್ಷಕರು/ ಆಸಕ್ತ ಶಿಕ್ಷಕರಿಗೆ ಹಮ್ಮಿಕೊಂಡಿರುವ ತರಬೇತಿ ಕಾರ್ಯಾಗಾರದಲ್ಲಿ ಸಮಾವೇಶದ ಕೇಂದ್ರ ವಿಷಯದಡಿ ವಿವಿಧ ಉಪ ವಿಷಯದಡಿ ಮಕ್ಕಳಿಂದ ವೈಜ್ಞಾನಿಕ ಯೋಜನಾ ಪ್ರಬಂಧ ತಯಾರಿಸುವ ಕುರಿತು ತರಬೇತಿ ನೀಡಲಾಗುವುದು ಎಂದು ಡಿಡಿಪಿಐ ಎಂ.ಚಂದ್ರಕಾಂತ್ ತಿಳಿಸಿದ್ದಾರೆ.
ಡಿಸೆಂಬರ್, 2023 ರ ಮೊದಲ ವಾರದಲ್ಲಿ ಜಿಲ್ಲಾಮಟ್ಟದ ಮಕ್ಕಳ ವಿಜ್ಞಾನ ಸಮಾವೇಶ ನಡೆಯಲಿದ್ದು, ಜಿಲ್ಲಾಮಟ್ಟದ ಸಮಾವೇಶದಲ್ಲಿ ಉತ್ತಮವಾಗಿ ಪ್ರಬಂಧ ಮಂಡಿಸುವ 10 ಮಂದಿ ಬಾಲವಿಜ್ಞಾನಿಗಳು ನಂತರ ಡಿಸೆಂಬರ್ ಎರಡನೇ ವಾರದಲ್ಲಿ ನಡೆಯಲಿರುವ ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಿ ಪ್ರಬಂಧ ಮಂಡಿಸಲಿದ್ದಾರೆ. ರಾಜ್ಯಮಟ್ಟದಲ್ಲಿ ಆಯ್ಕೆಯಾಗುವ ಬಾಲ ವಿಜ್ಞಾನಿಗಳು ನಂತರ
ನಡೆಯಲಿರುವ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ-2023ದಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿದ್ದಾರೆ ಎಂದು ಸಮಾವೇಶದ ಜಿಲ್ಲಾ ಸಂಯೋಜಕ ಜಿ.ಶ್ರೀಹರ್ಷ ತಿಳಿಸಿದ್ದಾರೆ.
ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶವನ್ನು 10-17 ವಯೋಮಾನದ ಮಕ್ಕಳಿಗಾಗಿ ಪಠ್ಯಕ್ರಮಕ್ಕೆ ಪೂರಕವಾದ ವಿಜ್ಞಾನ ಚಟುವಟಿಕೆಗಳಿಂದ ಕೂಡಿದ ಕಾರ್ಯಕ್ರಮವಾಗಿದೆ. ಈ ಸಮಾವೇಶವು ಮಕ್ಕಳಲ್ಲಿ ವಿಜ್ಞಾನ ಆಸಕ್ತಿ, ಕುತೂಹಲ, ಕ್ರಿಯಾಶೀಲತೆ ಹಾಗೂ ಸೃಜನಶೀಲತೆ ಬೆಳೆಸುವುದರೊಂದಿಗೆ ಅವರಲ್ಲಿ ಸಂಶೋಧನಾ ಪ್ರವೃತಿ ಹಾಗೂ ಭವಿಷ್ಯದ ವಿಜ್ಞಾನಿಗಳನ್ನಾಗಿ ರೂಪಿಸಲು ಸೂಕ್ತ ವೇದಿಕೆ ಒದಗಿಸಲಿದೆ ಎಂದು ವಿಜ್ಞಾನ ಕಾರ್ಯಕ್ರಮದ ಸಂಘಟಕರೂ ಆದ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಅಧ್ಯಕ್ಷ ಟಿ.ಜಿ.ಪ್ರೇಮಕುಮಾರ್ ತಿಳಿಸಿದ್ದಾರೆ.
2 ವಿದ್ಯಾರ್ಥಿಗಳನ್ನೊಳಗೊಂಡ ತಂಡದಲ್ಲಿ ಶಿಕ್ಷಕರ ಮಾರ್ಗದರ್ಶನದೊಂದಿಗೆ ಕೇಂದ್ರ ವಿಷಯದಡಿ ವಿವಿಧ ಉಪ ವಿಷಯಗಳಿಗೆ ಸಂಬಂಧಿಸಿದಂತೆ ತಮ್ಮ ಸುತ್ತಲಿನ ಪರಿಸರದಲ್ಲಿನ ಸಮಸ್ಯೆಯನ್ನು ಗುರುತಿಸಿ ಸಂಗ್ರಹಿತ ಮಾಹಿತಿಯನ್ನು ವಿಶ್ಲೇಷಿಸುತ್ತಾರೆ. ವಿದ್ಯಾರ್ಥಿಗಳು ಕೈಗೊಂಡ ಚಟುವಟಿಕೆಗಳು, ಮಾಹಿತಿ ಸಂಗ್ರಹಣೆ, ತಜ್ಞರೊಂದಿಗೆ ಸಮಾಲೋಚನೆ, ವಿಶ್ಲೇಷಣೆ, ಪರಿಹಾರೋಪಾಯಗಳ ಸಾರಾಂಶವನ್ನು ಸಮಗ್ರವಾಗಿ ಪ್ರಬಂಧ ರೂಪದಲ್ಲಿ ಸಿದ್ಧಪಡಿಸುತ್ತಾರೆ. ಈ ಪ್ರಕ್ರಿಯೆಯಲ್ಲಿ ಮಕ್ಕಳಲ್ಲಿ ಅಡಗಿದ ಸೃಜನಾತ್ಮಕ ಪ್ರತಿಭೆ, ವಿಶ್ಲೇಷಣಾ ಸಾಮರ್ಥ್ಯ ಓರೆಗೆ ಹಚ್ಚಲ್ಪಟ್ಟ ಅತ್ಯುತ್ತಮ ಮಟ್ಟದಲ್ಲಿ ಹೊರಹೊಮ್ಮಲು ಅವಕಾಶ ಸಿಗುತ್ತದೆ ಎಂದು ತಿಳಿಸಿದ್ದಾರೆ.
ಸಮಾವೇಶದ ಕುರಿತು ಹೆಚ್ಚಿನ ಮಾಹಿತಿಗೆ ಜಿಲ್ಲಾ ಸಂಯೋಜಕ ಜಿ.ಶ್ರೀಹರ್ಷ (ಮೊ: 9481431263), ವಿಜ್ಞಾನ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಡಿ.ಕೃಷ್ಣಚೈತನ್ಯ (ಮೊ:9449202055) ಅಥವಾ ಪರಿಷತ್ತಿನ ಜಿಲ್ಲಾ ಸಮಿತಿ ಅಧ್ಯಕ್ಷ ಟಿ.ಜಿ.ಪ್ರೇಮಕುಮಾರ್ (ಮೊ.94485 88352) ಅವರನ್ನು ಸಂಪರ್ಕಿಸಬಹುದು.
ಈ ಸಮಾವೇಶವು ಮಕ್ಕಳ ಸರ್ವತೋಮುಖ ಬೆಳವಣಿಗೆ, ವೈಜ್ಞಾನಿಕ ಚಿಂತನೆ, ಸೃಜನಾತ್ಮಕ ಚಟುವಟಿಕೆಗಳೊಂದಿಗೆ ಭವಿಷ್ಯದಲ್ಲಿ ಉತ್ತಮ ಜವಾಬ್ದಾರಿಯು ನಾಗರಿಕರಾಗಲು ಪ್ರಸ್ತುತ ಕಾರ್ಯಕ್ರಮವು ಅತ್ಯಂತ ಸಹಕಾರಿಯಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಉದ್ಘಾಟನಾ ಸಮಾರಂಭ : ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಪೂರ್ವಭಾವಿಯಾಗಿ
ಮಡಿಕೇರಿ ನಗರದ ಲಯನ್ಸ್ ಸಂಸ್ಥೆಯ ಸಭಾಂಗಣದಲ್ಲಿ ನ.21 ರಂದು ಬೆಳಿಗ್ಗೆ 10.00 ಕ್ಕೆ
ನಡೆಯಲಿರುವ ಜಿಲ್ಲಾಮಟ್ಟದ ಮಾರ್ಗದರ್ಶಿ ಶಿಕ್ಷಕರ ಕಾರ್ಯಾಗಾರವನ್ನು ಜಿ.ಪಂ.ಸಿಇಓ ವರ್ಣಿತ್ ನೇಗಿ ಉದ್ಘಾಟಿಸಲಿದ್ದು, ಲಯನ್ಸ್ ಸಂಸ್ಥೆಯ ಅಧ್ಯಕ್ಷ ಮಧುಕರ್ ಶೇಟ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಡಿಡಿಪಿಐ ಎಂ.ಚಂದ್ರಕಾಂತ್,
ಲಯನ್ಸ್ ಪ್ರಾಂತೀಯ ಅಧ್ಯಕ್ಷ ಅಂಬೇಕಲ್ ನವೀನ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ , ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ರವೀಂದ್ರ ರೈ, ಮುಳಿಯ ಪ್ರತಿಷ್ಠಾನದ ಮುಖ್ಯಸ್ಥ ಕೇಶವಪ್ರಸಾದ್, ಲಯನ್ಸ್ ಸಂಸ್ಥೆಯ ಕಾರ್ಯದರ್ಶಿ ನಟರಾಜ್ ಕೆಸ್ತೂರು ಹಾಗೂ ವಿಜ್ಞಾನ ಪರಿಷತ್ತಿನ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಮಕ್ಕಳ ಸಮಾವೇಶದ ಜಿಲ್ಲಾ ಸಂಯೋಜಕ ಜಿ.ಶ್ರೀಹರ್ಷ ತಿಳಿಸಿದ್ದಾರೆ.