ಮಡಿಕೇರಿ ನ.21 : ದುಡಿಯುವ ಕಾರ್ಮಿಕ ವರ್ಗಕ್ಕೆ ಕನಿಷ್ಠ ವೇತನ ಘೋಷಿಸದ ಸರ್ಕಾರ ಸರ್ಕಾರಿ ಕಚೇರಿಗಳಲ್ಲಿ ಗುತ್ತಿಗೆ ಆಧಾರದಲ್ಲಿ ನೌಕರರನ್ನು ದುಡಿಸಿಕೊಳ್ಳುವ ಮೂಲಕ ಪರೋಕ್ಷವಾಗಿ ಜೀತದಾಳುಗಳನ್ನು ಸೃಷ್ಟಿ ಮಾಡುತ್ತಿದೆ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ನ ಕೊಡಗು ಜಿಲ್ಲಾ ಸಮಿತಿ ಆರೋಪಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಐಟಿಯು ಸಮಿತಿಯ ಜಿಲ್ಲಾಧ್ಯಕ್ಷ ಪಿ.ಆರ್.ಭರತ್, ಕುಟುಂಬದ ನಿರ್ವಹಣೆ, ಆಹಾರ ಮತ್ತು ಮಕ್ಕಳ ಶಿಕ್ಷಣಕ್ಕಾಗಿ ಕಾರ್ಮಿಕರಿಗೆ ಮಾಸಿಕ ಕನಿಷ್ಠ ವೇತನ 26 ಸಾವಿರ ರೂ. ಘೋಷಿಸುವ ಅಗತ್ಯವಿದೆ ಎಂದರು.
ಕೊಡಗು ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿ 2 ಸಾವಿರಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ. ಆದರೆ ಇವುಗಳನ್ನು ಗುತ್ತಿಗೆ ಆಧಾರದ ನೌಕರರ ಮೂಲಕ ತುಂಬಲಾಗುತ್ತಿದೆ. ಕಡಿಮೆ ವೇತನ ನೀಡಿ ಹೆಚ್ಚು ದುಡಿಸಿಕೊಳ್ಳುವ ಜೀತ ಪದ್ಧತಿಯನ್ನು ಸರ್ಕಾರವೇ ಜಾರಿಗೆ ತರುತ್ತಿದೆ. ಜಿಲ್ಲಾಧಿಕಾರಿಗಳ ಕಚೇರಿ, ಉದ್ಯೋಗ ವಿನಿಮಯ ಕಚೇರಿಯಲ್ಲೂ ಗುತ್ತಿಗೆ ಆಧಾರದ ನೌಕರರನ್ನೇ ನೇಮಿಸಿಕೊಳ್ಳಲಾಗಿದೆ. ಸರ್ಕಾರ ಉದ್ಯೋಗ ಸೃಷ್ಟಿ ಮಾಡುವ ಪ್ರಯತ್ನವನ್ನೇ ಮಾಡುತ್ತಿಲ್ಲವೆಂದು ಟೀಕಿಸಿದರು.
::: ಭರವಸೆ ಹುಸಿಯಾಗಿದೆ :::
ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 10 ವರ್ಷಗಳೇ ಕಳೆದಿದೆ. ಆದರೆ ಸರ್ಕಾರ ನೀಡಿದ 2 ಕೋಟಿ ಉದ್ಯೋಗ ಸೃಷ್ಟಿಯ ದೊಡ್ಡ ಭರವಸೆ ಇಲ್ಲಿಯವರೆಗೆ ಈಡೇರದೆ ಹುಸಿಯಾಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರೈತರು ದೆಹಲಿಯಲ್ಲಿ ಹೋರಾಟ ನಡೆಸಿ ಬಲಿದಾನಗೈದು ವರ್ಷವೇ ಕಳೆದಿದೆ. ಅಂದು ಕೇಂದ್ರ ಸರ್ಕಾರ ಲಿಖಿತ ರೂಪದಲ್ಲಿ ನೀಡಿದ್ದ ಭರವಸೆ ಇಲ್ಲಿಯವರೆಗೆ ಈಡೇರಿಲ್ಲ. ಕೇವಲ ಬಾಯಿ ಮಾತಿಗಷ್ಟೇ ರೈತರನ್ನು ದೇಶದ ಅನ್ನದಾತರೆಂದು ಕೇಂದ್ರ ಬಣ್ಣಿಸುತ್ತಿದೆ. ಆದರೆ ಕೃಷಿ ಪರಿಕರಗಳ ಬೆಲೆ ಏರಿಕೆಯಿಂದ ಕೃಷಿ ಕಾರ್ಯ ಮಾಡಲಾಗದೆ ನಷ್ಟ ಅನುಭವಿಸುತ್ತಿರುವ ರೈತ ಆತ್ಮಹತ್ಯೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಆರೋಪಿಸಿದರು.
ಬಂಡವಾಳಶಾಹಿಗಳ ಪರವಾಗಿರುವ ಕೇಂದ್ರ ಸರ್ಕಾರ ದೇಶದಲ್ಲಿ ವಿದೇಶಿ ಕಂಪೆನಿಗಳಿಗೆ ಅವಕಾಶ ನೀಡುತ್ತಿದೆ. ಬಿಎಸ್ಎನ್ಎಲ್, ಎಲ್ಐಸಿ, ರೈಲ್ವೆ, ಬ್ಯಾಂಕ್ ಮತ್ತು ವಿದ್ಯುತ್ ಕ್ಷೇತ್ರಗಳನ್ನು ಖಾಸಗೀರಕಣಗೊಳಿಸಲಾಗಿದೆ. ಇದರಿಂದ ದುಡಿಯುವ ವರ್ಗಕ್ಕೆ ಅನ್ಯಾಯವಾಗುತ್ತಿದೆ ಎಂದು ಭರತ್ ಟೀಕಿಸಿದರು.
::: 50 ಸಾವಿರ ಮಂದಿ ಭಾಗಿ :::
ಕೇಂದ್ರ ಸರ್ಕಾರದ ರೈತ, ಕಾರ್ಮಿಕ ಮತ್ತು ಜನ ವಿರೋಧಿ ಧೋರಣೆಗಳ ವಿರುದ್ಧ ನ.26 ರಿಂದ 28 ರವರೆಗೆ ದೇಶವ್ಯಾಪಿ ರಾಜ್ಯಪಾಲರ ನಿವಾಸದ ಎದುರು 72 ಗಂಟೆಗಳ ಮಹಾಧರಣಿ ನಡೆಯಲಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯುವ ಹೋರಾಟದಲ್ಲಿ 11 ಕಾರ್ಮಿಕ ಸಂಘಟನೆಗಳ ಸುಮಾರು 50 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕೊಡಗು ಜಿಲ್ಲೆಯಿಂದಲೂ 500 ಕ್ಕೂ ಅಧಿಕ ಮಂದಿ ತೆರಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಸಿ.ಸಾಬು ಮಾತನಾಡಿ 24 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೃಹತ್ ಹೋರಾಟ ನಡೆಸಲಾಗುತ್ತಿದೆ. ಮೂಲಕ ಕೇಂದ್ರ ಸರ್ಕಾರದ ಹುಸಿ ಭರವಸೆಗಳ ಬಗ್ಗೆ ಜನರಿಗೆ ತಿಳಿಸಲಾಗುತ್ತದೆ. ಮಹಾಧರಣಿಯ ಹಿನ್ನೆಲೆ ಕಳೆದ ಮೂರು ದಿನಗಳಿಂದ ಜಿಲ್ಲೆಯಾದ್ಯಂತ ವ್ಯಾಪಕ ಪ್ರಚಾರಾಂದೋಲನ ನಡೆಸಲಾಗುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಖಜಾಂಚಿ ಎನ್.ಡಿ.ಕುಟ್ಟಪ್ಪ ಉಪಸ್ಥಿತರಿದ್ದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*