ಬೆಂಗಳೂರು ನ.23: ಉಸ್ತುವಾರಿ ಸಚಿವರ ಆಪ್ತಸಹಾಯಕರು ಅಥವಾ ಕಚೇರಿ ಹೆಸರಿನಲ್ಲಿ ಹಣ ಕೇಳುವವರ ವಿರುದ್ದ ದೂರು ದಾಖಲಿಸಿ ತನಿಖೆ ನಡೆಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡುಗು ಜಿಲ್ಲಾ ಪೊಲೀಸ್ ಅಧೀಕ್ಷರಿಗೆ ಸೂಚನೆ ನೀಡಿದ್ದಾರೆ ಎಂದು ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ್ ತಿಳಿಸಿದ್ದಾರೆ.
ಆಪ್ತ ಸಹಾಯಕರ ಸೋಗಿನಲ್ಲಿ ಅಧಿಕಾರಿಗೆ ಹಣಕ್ಕೆ ಬೇಡಿಕೆಯಿಟ್ಟಿರುವ ಪ್ರಕರಣದ ಹಿನ್ನಲೆಯಲ್ಲಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ. ಯಾರೇ ಹಣಕ್ಕೆ ಬೇಡಿಕೆಯಿಡುವ ಪ್ರಕರಣ ಕಂಡಬಂದಲ್ಲಿ ಕೂಡಲೇ ಪ್ರಕರಣ ದಾಖಲಿಸಬೇಕು. ಹಾಗೆಯೇ, ಸಚಿವರ ಕಾರ್ಯಾಲಯಕ್ಕೆ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ.
ಸಾರ್ವಜನಿಕರು ಹಾಗೂ ಅಧಿಕಾರಿಗಳು ಇಂತಹ ಪ್ರಕರಣಗಳ ಬಗ್ಗೆ ಯಾವುದೇ ಹಿಂಜರಿಕೆಯಿಲ್ಲದೆ ಪೊಲೀಸರಿಗೆ ದೂರು ನೀಡಬೇಕು ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ತಿಳಿಸಿದ್ದು, ಈ ಬಗ್ಗೆ ಜಿಲ್ಲೆಯಾದ್ಯಂತ ವ್ಯಾಪಕ ಪ್ರಚಾರ ನೀಡುವಂತೆಯೂ ಮನವಿ ಮಾಡಿದ್ದಾರೆ.








